B S Yediyurappa 
ಸುದ್ದಿಗಳು

ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ವಿರುದ್ಧ ಲೈಂಗಿಕ ದೌರ್ಜನ್ಯ, ಕಿರುಕುಳ ಆರೋಪದಡಿ ಎಫ್‌ಐಆರ್‌ ದಾಖಲು

ಮಾರ್ಚ್‌ 14ರಂದು ದೂರು ದಾಖಲಾಗಿದ್ದು, ಪೋಕ್ಸೊ ಕಾಯಿದೆ ಸೆಕ್ಷನ್‌ 8 (ಲೈಂಗಿಕ ದೌರ್ಜನ್ಯ) ಮತ್ತು ಐಪಿಸಿ ಸೆಕ್ಷನ್‌ 354 (ಎ) ಅಡಿ (ಲೈಂಗಿಕ ಕಿರುಕುಳ) ಯಡಿಯೂರಪ್ಪ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

Bar & Bench

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ 81 ವರ್ಷದ ಬಿ ಎಸ್‌ ಯಡಿಯೂರಪ್ಪ ಅವರ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ (ಪೋಕ್ಸೊ) ಕಾಯಿದೆ ಅಡಿ ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲಿ ಗುರುವಾರ ಎಫ್‌ಐಆರ್‌ ದಾಖಲಾಗಿದೆ.

ಮಾರ್ಚ್‌ 14ರಂದು ದೂರು ದಾಖಲಾಗಿದ್ದು, ಪೋಕ್ಸೊ ಕಾಯಿದೆ ಸೆಕ್ಷನ್‌ 8 (ಲೈಂಗಿಕ ದೌರ್ಜನ್ಯ) ಮತ್ತು ಐಪಿಸಿ ಸೆಕ್ಷನ್‌ 354 (ಎ) ಅಡಿ (ಲೈಂಗಿಕ ಕಿರುಕುಳ) ಯಡಿಯೂರಪ್ಪ ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.

ದೂರಿನ ಸಾರಾಂಶ: ಸಂತ್ರಸ್ತೆಯ ಮೇಲೆ ಈ ಹಿಂದೆ ಅತ್ಯಾಚಾರವಾಗಿದ್ದು, ಈ ಸಂಬಂಧ ವಿಶೇಷ ತನಿಖಾ ದಳ ರಚಿಸಲು ರಾಜ್ಯ ಸರ್ಕಾರದ ಮೇಲೆ ಒತ್ತಡ ತರುವ ಮೂಲಕ ನೆರವಾಗುವಂತೆ ಕೋರಲು ಸಂತ್ರಸ್ತೆ ಮತ್ತು ಆಕೆಯ ತಾಯಿ ಯಡಿಯೂರಪ್ಪ ಅವರನ್ನು 2024ರ ಫೆಬ್ರವರಿ 2ರಂದು ಅವರ ನಿವಾಸದಲ್ಲಿ ಭೇಟಿ ಮಾಡಿದ್ದರು. ಈ ಸಂದರ್ಭದಲ್ಲಿ ಯಡಿಯೂರಪ್ಪ ಅವರು ನಮ್ಮ ಜೊತೆ ಒಂಭತ್ತು ನಿಮಿಷ ಮಾತನಾಡಿ, ನಮಗೆ ಟೀ ಕುಡಿಸಿದರು. ಆನಂತರ ನನ್ನ ಮಗಳನ್ನು ಕೊಠಡಿಗೆ ಕರೆದೊಯ್ದು ಲಾಕ್‌ ಮಾಡಿಕೊಂಡು ಬಲಭಾಗದ ಎದೆಯನ್ನು ಅದುಮಿದ್ದಾರೆ. ಈ ಸಂದರ್ಭದಲ್ಲಿ ಅವರಿಂದ ತಪ್ಪಿಸಿಕೊಂಡು ಹೊರಬರಲು ಆಕೆ ಸಾಕಷ್ಟು ಪ್ರಯತ್ನಪಟ್ಟರೂ ಆಗಿಲ್ಲ. ಆನಂತರ ಯಡಿಯೂರಪ್ಪ ಅವರೇ ಬಾಗಿಲು ತೆರೆದಿದ್ದು, ತಕ್ಷಣ ಓಡಿ ಬಂದ ನನ್ನ ಪುತ್ರಿ ಘಟನೆಯನ್ನು ವಿವರಿಸಿದಳು.

ಈ ಕುರಿತು ಯಡಿಯೂರಪ್ಪ ಅವರನ್ನು ಪ್ರಶ್ನಿಸಲಾಗಿ ಅದಕ್ಕೆ ಅವರು ನಿಮ್ಮ ಮಗಳಿಗೆ ರೇಪ್‌ ಆಗಿದೆಯೋ? ಇಲ್ಲವೋ? ಎಂಬುದನ್ನು ಚೆಕ್‌ ಮಾಡಲು ಹಾಗೆ ಮಾಡಿದೆ ಎಂದರು. ತಕ್ಷಣ ನಮ್ಮ ಕ್ಷಮೆಯಾಚಿಸಿದ ಯಡಿಯೂರಪ್ಪ ಅವರು ನಿಮಗೆ ಮೋಸ ಆಗಿರುವ ಬಗ್ಗೆ ಸಹಾಯ ಮಾಡುತ್ತೇನೆ ಎಂದರು. ಇದಕ್ಕೆ ನಾನು ಒಪ್ಪಲಿಲ್ಲ. ಅದಾಗ್ಯೂ, ಯಡಿಯೂರಪ್ಪ ಅವರು ಈ ವಿಚಾರವನ್ನು ಹೊರೆಗೆ ಬಾಯಿ ಬಿಡದಂತೆ ತಡೆಯಲು ತುಂಬಾ ಪ್ರಯತ್ನಿಸಿದ್ದಾರೆ ಎಂದು ದೂರಿನಲ್ಲಿ ಸಂತ್ರಸ್ತೆಯ ತಾಯಿ ವಿವರಿಸಿದ್ದಾರೆ.