ಸುದ್ದಿಗಳು

ಸುಪ್ರೀಂ ಕೋರ್ಟ್ ಮೊದಲ ಮಹಿಳಾ ನ್ಯಾಯಮೂರ್ತಿ ಫಾತಿಮಾ ಬೀವಿ ಇನ್ನಿಲ್ಲ

Bar & Bench

ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎಂ.ಫಾತಿಮಾ ಬೀವಿ (96) ನಿಧನರಾಗಿದ್ದಾರೆ.

ನ್ಯಾಯಮೂರ್ತಿ ಬೀವಿ ಅವರು ಭಾರತ ಸರ್ವೋಚ್ಚ ನ್ಯಾಯಾಲಯದ ಮೊದಲ ಮಹಿಳಾ ನ್ಯಾಯಮೂರ್ತಿಯಾಗಿದ್ದುಅವರು ದೇಶದ ಸರ್ವೋಚ್ಚ ನ್ಯಾಯಾಲಯಕ್ಕೆ ನೇಮಕಗೊಂಡ ಮೊದಲ ಮುಸ್ಲಿಂ ಮಹಿಳೆ ಕೂಡ ಆಗಿದ್ದಾರೆ.

ಅವರು 1927ರಲ್ಲಿ ಕೇರಳದಲ್ಲಿ ಜನಿಸಿದರು. ತಂದೆಯವರಿಂದ ಕಾನೂನು ಅಧ್ಯಯನ ಮಾಡಲು ಪ್ರೋತ್ಸಾಹ. 1950ರಲ್ಲಿ, ಅವರು ವಕೀಲ ಪರಿಷತ್‌ ಪರೀಕ್ಷೆಯಲ್ಲಿ ಅಗ್ರಸ್ಥಾನ ಪಡೆದರು. ಆ ಮೂಲಕ ವಕೀಲ ಪರಿಷತ್‌ನಿಂದ ಚಿನ್ನದ ಪದಕ ಪಡೆದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಕೇರಳದಲ್ಲಿ ವಕೀಲರಾಗಿ ತಮ್ಮ ವೃತ್ತಿಜೀವನ ಪ್ರಾರಂಭಿಸಿದ ಅವರು 1974ರಲ್ಲಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದರು. 1980ರಲ್ಲಿ ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿಯಲ್ಲಿ ಸೇವೆ ಸಲ್ಲಿಸಿ 1983 ರಲ್ಲಿ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡರು.

ಸುಪ್ರೀಂ ಕೋರ್ಟ್‌ಗೆ 1989ರಲ್ಲಿ ನೇಮಕಗೊಂಡ ಅವರು ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಯಾದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಏಷ್ಯಾದ ದೇಶವೊಂದರ ಸುಪ್ರೀಂ ಕೋರ್ಟ್ ಮೊದಲ ಮಹಿಳಾ ನ್ಯಾಯಮೂರ್ತಿ ಎಂಬ ಹಿರಿಮೆಯೂ ಅವರದ್ದೇ.

1993 ರಲ್ಲಿ ನಿವೃತ್ತರಾದ ನಂತರ, ಅವರು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸದಸ್ಯರಾಗಿ ನಂತರ ತಮಿಳುನಾಡು ರಾಜ್ಯಪಾಲರಾಗಿ ಸೇವೆ ಸಲ್ಲಿಸಿದರು.

ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ನಾಲ್ವರು ಕೈದಿಗಳು ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದ ನಂತರ ಅವರು ತಮಿಳುನಾಡು ರಾಜ್ಯಪಾಲ ಹುದ್ದೆಗೆ ರಾಜೀನಾಮೆ ನೀಡಿದರು.