Chandrababu Naidu
Chandrababu Naidu  biographystars.com
ಸುದ್ದಿಗಳು

ಕೌಶಲ್ಯಾಭಿವೃದ್ಧಿ ಹಗರಣ: ಎಫ್ಐಆರ್ ರದ್ದುಗೊಳಿಸಲು ಕೋರಿ ಸುಪ್ರೀಂ ಮೊರೆಹೋದ ಚಂದ್ರಬಾಬು ನಾಯ್ಡು

Bar & Bench

ಬಹುಕೋಟಿ ರೂಪಾಯಿ ಮೌಲ್ಯದ ಆಂಧ್ರಪ್ರದೇಶ ಕೌಶಲ್ಯಾಭಿವೃದ್ಧಿ ಯೋಜನೆ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ರದ್ದುಗೊಳಿಸುವಂತೆ ಕೋರಿ ರಾಜ್ಯದ ಮಾಜಿ ಮುಖ್ಯಮಂತ್ರಿ ಎನ್‌ ಚಂದ್ರಬಾಬು ನಾಯ್ಡು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ವಕೀಲ ಗುಂಟೂರು ಪ್ರಮೋದ್ ಕುಮಾರ್ ಅವರು ಇಂದು ಬೆಳಿಗ್ಗೆ ಅರ್ಜಿ ಸಲ್ಲಿಸಿದರು. ಎಫ್‌ಐಆರ್‌ ರದ್ದತಿ ಕೋರಿ ನಾಯ್ಡು ಅವರು ಸಲ್ಲಿಸಿದ್ದ ಅರ್ಜಿಯನ್ನು ಆಂಧ್ರ ಪ್ರದೇಶ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿತ್ತು.

ನಾಯ್ಡು ಅವರ ವಿರುದ್ಧ ಆರೋಪಿಸಲಾದ ಕೃತ್ಯಗಳು ಅವರು ಮುಖ್ಯಮಂತ್ರಿಯಾಗಿ ಸದ್ಭಾವನೆಯಿಂದ ಹಾಗೂ ತಮ್ಮ ಅಧಿಕೃತ ಕರ್ತವ್ಯಗಳ ನಿರ್ವಹಣೆಯ ಭಾಗವಾಗಿ ಮಾಡಿದ್ದಾರೆ ಎಂದು ಹೇಳಲಾಗುವುದಿಲ್ಲ ಎಂದು ಹೈಕೋರ್ಟ್‌ ನ್ಯಾಯಮೂರ್ತಿ ಕೆ ಶ್ರೀನಿವಾಸರೆಡ್ಡಿ ತಿಳಿಸಿದ್ದರು.

ನಾಯ್ಡು ಅವರ ಪರವಾಗಿ ಹಿರಿಯ ವಕೀಲ ಹರೀಶ್‌ ಸಾಳ್ವೆ, ಸಿದ್ಧಾರ್ಥ್ ಲೂತ್ರಾ ವಾದ ಮಂಡಿಸಿದ್ದರು. ಆಂಧ್ರಪ್ರದೇಶ ಸಿಐಡಿಯನ್ನು ಹಿರಿಯ ವಕೀಲರಾದ ಮುಕುಲ್ ರೋಹಟಗಿ ಮತ್ತು ರಂಜಿತ್ ಕುಮಾರ್ ಪ್ರತಿನಿಧಿಸಿದ್ದರು. ಹೆಚ್ಚುವರಿ ಅಡ್ವೊಕೇಟ್ ಜನರಲ್ ಪೊನ್ನವೋಲು ಸುಧಾಕರ್ ರೆಡ್ಡಿ ಅವರು ಕೂಡ ಈ ಸಂದರ್ಭದಲ್ಲಿ ವಾದ ಮಂಡಿಸಿದ್ದರು.

ಕೌಶಲ್ಯಾಭಿವೃದ್ಧಿ ಯೋಜನೆಗಾಗಿ ಮೀಸಲಿಟ್ಟ ಸರ್ಕಾರಿ ಹಣವನ್ನು ನಕಲಿ ಬಿಲ್‌ ಸೃಷ್ಟಿಸಿ ವಿವಿಧ ಬೇನಾಮಿ ಕಂಪೆನಿಗಳಿಗೆ ವರ್ಗಾಯಿಸಿದ್ದಕ್ಕೆ ಸಂಬಂಧಿಸಿದ ಹಗರಣ ಇದಾಗಿದ್ದು ನಾಯ್ಡು ಅವರನ್ನು ಈಚೆಗೆ ಬಂಧಿಸಲಾಗಿತ್ತು.