ED and B Nagendra 
ಸುದ್ದಿಗಳು

ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಪ್ರಕರಣ: ಮಾಜಿ ಸಚಿವ ನಾಗೇಂದ್ರ ಜಾಮೀನು ಕೋರಿಕೆ

ಸುಪ್ರೀಂ ಕೋರ್ಟ್‌ ಜಾಮೀನು ಅರ್ಜಿಗಳನ್ನು ತುರ್ತಾಗಿ ವಿಲೇವಾರಿ ಮಾಡಬೇಕು ಎಂದು ಮಾರ್ಗಸೂಚಿ ರೂಪಿಸಿದೆ. ನ್ಯಾಯದಾನದ ದೃಷ್ಟಿಯಿಂದ ಕೊನೆಯ ಬಾರಿಗೆ ಅರ್ಜಿದಾರರಿಗೆ ವಾದಿಸಲು ಅವಕಾಶ ನೀಡಲಾಗುತ್ತಿದೆ ಎಂದು ಅರ್ಜಿದಾರರಿಗೆ ತಿಳಿಸಿರುವ ನ್ಯಾಯಾಲಯ.

Siddesh M S

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (ಕೆಎಂವಿಎಸ್‌ಟಿಡಿಸಿಎಲ್‌) ಬ್ಯಾಂಕ್ ಖಾತೆಯಿಂದ ಅಕ್ರಮವಾಗಿ ₹95 ಕೋಟಿ ಹಣ ವರ್ಗಾಯಿಸಿರುವ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಮಾಜಿ ಸಚಿವ ಬಿ ನಾಗೇಂದ್ರ ಜಾಮೀನು ಕೋರಿ ಜನಪ್ರತಿನಿಧಿಗಳ ವಿಶೇಷ ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿರುವ ನಾಗೇಂದ್ರ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆಯನ್ನು ವಿಶೇಷ ಸತ್ರ ನ್ಯಾಯಾಧೀಶರಾದ ಸಂತೋಷ್‌ ಗಜಾನನ ಭಟ್‌ ಅವರು ಶುಕ್ರವಾರ ವಿಚಾರಣೆ ನಡೆಸಿದರು.

ಅರ್ಜಿದಾರರ ಪರ ವಕೀಲರು ಮೆರಿಟ್‌ ಮೇಲೆ ವಾದಿಸಲು ಕಾಲಾವಕಾಶ ನೀಡಬೇಕು ಎಂದು ಕೋರಿದರು. ಅದಕ್ಕೆ ಪೀಠವು ಜಾಮೀನು ಅರ್ಜಿಯು 15 ದಿನಗಳಿಂದ ಬಾಕಿ ಉಳಿದಿದ್ದು, ಸುಪ್ರೀಂ ಕೋರ್ಟ್‌ ಜಾಮೀನು ಅರ್ಜಿಗಳನ್ನು ತುರ್ತಾಗಿ ವಿಲೇವಾರಿ ಮಾಡಬೇಕು ಎಂದು ಮಾರ್ಗಸೂಚಿ ರೂಪಿಸಿದೆ. ನ್ಯಾಯದಾನದ ದೃಷ್ಟಿಯಿಂದ ಕೊನೆಯ ಬಾರಿಗೆ ಅರ್ಜಿದಾರರಿಗೆ ವಾದಿಸಲು ಅವಕಾಶ ನೀಡಲಾಗುತ್ತಿದೆ ಎಂದು ಆದೇಶದಲ್ಲಿ ಹೇಳಿದ್ದು, ವಿಚಾರಣೆಯನ್ನು ಸೆಪ್ಟೆಂಬರ್‌ 20ಕ್ಕೆ ಮುಂದೂಡಿದೆ.

ನಾಗೇಂದ್ರ ಅರ್ಜಿಗೆ ಜಾರಿ ನಿರ್ದೇಶನಾಲಯವು ಆಕ್ಷೇಪಣೆಯನ್ನೂ ಸಲ್ಲಿಸಿದ್ದು, ಉಭಯ ಪಕ್ಷಕಾರರು ವಾದ ಮಂಡಿಸುವುದು ಮಾತ್ರ ಬಾಕಿ ಇದೆ. ವಕೀಲ ಗೌರವ್‌ ನವೀನ್‌ ಕುಮಾರ್‌ ತೇಜಸ್ವಿ ಅವರು ನಾಗೇಂದ್ರ ಪರವಾಗಿ ವಕಾಲತ್ತು ಹಾಕಿದ್ದಾರೆ.

ಈ ಪ್ರಕರಣದಲ್ಲಿ ಸೆಪ್ಟೆಂಬರ್‌ 9ರಂದು ಜಾರಿ ನಿರ್ದೇಶನಾಲಯವು ಅಕ್ರಮ ಹಣ ವರ್ಗಾವಣೆ ಕಾಯಿದೆಯ ಸೆಕ್ಷನ್‌ 3 ಮತ್ತು 4ರ ಅಡಿಯ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ 4,970 ಪುಟಗಳ ಆರೋಪ ಪಟ್ಟಿ ಹಾಗೂ 144 ಪುಟಗಳ ದೂರನ್ನು ಸಲ್ಲಿಸಿತ್ತು. ಪ್ರಕರಣದಲ್ಲಿ ನಾಗೇಂದ್ರ ಅವರನ್ನು ಮೊದಲ ಆರೋಪಿಯನ್ನಾಗಿ ಮಾಡಲಾಗಿದೆ.

ನಿಗಮದ ಖಾತೆಯಿಂದ ಒಟ್ಟಾರೆ 84 ಕೋಟಿಯ ಅಕ್ರಮವಾಗಿ ಬಳಕೆ ಮಾಡಲಾಗಿದೆ. ಮಾಜಿ ಸಚಿವ ನಾಗೇಂದ್ರ ಅವರು ನಕಲಿ ಖಾತೆ ಸೃಷ್ಟಿಸಲು ಸೂಚಿಸಿ, ಹಣ ವರ್ಗಾವಣೆ ಮಾಡಲು ನಿರ್ದೇಶಿಸಿದ್ದಾರೆ. ನಾಗೇಂದ್ರ ಸೂಚನೆಯಂತೆ ಪದ್ಮನಾಭರಿಂದ ಹಣ ವರ್ಗಾವಣೆಯಾಗಿದೆ. ಈ ಪ್ರಕರಣದಲ್ಲಿ ನಾಗೇಂದ್ರ ಒಳಸಂಚು ರೂಪಿಸಿದ್ದು, ಆನಂತರ ಸಾಕ್ಷ್ಯ ನಾಶಕ್ಕೆ ಪ್ರಯತ್ನಿಸಿದ್ದಾರೆ. ಆನಂತರ ವಸಂತ ನಗರದ ಶಾಂಗ್ರಿಲಾ ಹೋಟೆಲ್‌ನಲ್ಲಿ ನಾಗೇಂದ್ರ ಸಭೆ ನಡೆಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮನಕ್ಕೆ ಪದ್ಮನಾಭ ಅವರನ್ನು ನಾಗೇಂದ್ರ ಆಪ್ತನಾದ ನೆಕ್ಕಂಟಿ ನಾಗರಾಜ್‌ ಮೂಲಕ ನೇಮಕ ಮಾಡಲಾಗಿತ್ತು ಎಂದು ಆರೋಪಿಸಲಾಗಿದೆ.

ಲೋಕಸಭಾ ಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ಬಳಕೆ ಮಾಡಲಾಗಿದೆ. ನಾಗೇಂದ್ರನ ಆಪ್ತ ಸಹಾಯಕನಾದ 8ನೇ ಆರೋಪಿ ವಿಜಯ್ ಕುಮಾರ್ ಮೊಬೈಲಿನಲ್ಲಿ ಹಣದ ಮೊತ್ತ, ಯಾರಿಗೆಲ್ಲಾ ಪೂರೈಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ ಎಂದು ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ. ಬಳ್ಳಾರಿ ಲೋಕಸಭಾ ಚುನಾವಣೆಗೆ 20.19 ಕೋಟಿ ರೂಪಾಯಿ ಬಳಕೆ ಮಾಡಲಾಗಿದೆ ಎಂದು ವಿವರಿಸಲಾಗಿದೆ. ಈ ಸಂಬಂಧ ಎಲ್ಲಾ ಆರೋಪಿಗಳ ಹೇಳಿಕೆ ದಾಖಲಿಸಲಾಗಿದೆ ಎನ್ನಲಾಗಿದೆ.

ಪ್ರಕರಣದಲ್ಲಿ ಸದ್ಯ 15 ಸಾಕ್ಷಿಗಳ ಕಲೆ ಹಾಕಲಾಗಿದ್ದು, ನಾಗೇಂದ್ರ 5.26 ಕೋಟಿ ರೂಪಾಯಿ ಬಳಕೆ ಮಾಡಿದ್ದಾರೆ. ಆದರೆ, ಈ ಸಂಬಂಧ ಉತ್ತರಿಸಲು ನಾಗೇಂದ್ರ ನಿರಾಕರಿಸಿದ್ದಾರೆ. ಸಣ್ಣ ಕೆಲಸಗಳಿಗೆ ಹೆಚ್ಚಿನ ಮೊತ್ತದ ನಕಲಿ ಬಿಲ್‌ಗಳನ್ನು ಸೃಷ್ಟಿಸಲಾಗಿದೆ. ಹಗರಣದಲ್ಲಿ ಆರ್ಥಿಕ ಇಲಾಖೆ ಅಧಿಕಾರಿಗಳು ಭಾಗಿಯಾಗಿರುವ ಬಗ್ಗೆ ಜಾರಿ ನಿರ್ದೇಶನಾಲಯ ಸಂಶಯ ವ್ಯಕ್ತಪಡಿಸಿದೆ ಎನ್ನಲಾಗಿದೆ.

ಬಳ್ಳಾರಿ ಗ್ರಾಮೀಣ ಶಾಸಕರಾದ ಬಿ ನಾಗೇಂದ್ರ ಅವರು ಜುಲೈ 22ರಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ.