Shakti scheme and Karnataka HC 
ಸುದ್ದಿಗಳು

'ಶಕ್ತಿ ಯೋಜನೆʼಯಿಂದ ಮಕ್ಕಳು, ಹಿರಿಯ ನಾಗರಿಕೆಗೆ ಸಮಸ್ಯೆ: ಹೈಕೋರ್ಟ್‌ಗೆ ಪಿಐಎಲ್‌ ಸಲ್ಲಿಕೆ

ʼಶಕ್ತಿ ಯೋಜನೆʼಯಿಂದ ವಾರಕ್ಕೆ 100 ಕೋಟಿ ರೂಪಾಯಿ ತೆರಿಗೆದಾರರ ಹಣ ಸರ್ಕಾರಕ್ಕೆ ನಷ್ಟವಾಗುತ್ತಿದೆ. ಈ ಯೋಜನೆಗೆ ವಾರ್ಷಿಕ 3,200ರಿಂದ 3,400 ಕೋಟಿ ರೂಪಾಯಿ ವೆಚ್ಚವಾಗಬಹುದು ಎಂದು ಅರ್ಜಿಯಲ್ಲಿ ಉಲ್ಲೇಖ.

Bar & Bench

ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಸೌಲಭ್ಯ ಕಲ್ಪಿಸಿರುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಶಕ್ತಿ ಯೋಜನೆ’ಯು ಅವ್ಯವಸ್ಥೆಯಿಂದ ಕೂಡಿದ್ದು, ಮಕ್ಕಳು-ಹಿರಿಯ ನಾಗರಿಕರ ಮೇಲೆ ದುಷ್ಪರಿಣಾಮ ಬೀರುತ್ತಿದೆ ಹಾಗೂ ರಾಜ್ಯದ ಆರ್ಥಿಕತೆಗೆ ಸಾಕಷ್ಟು ನಷ್ಟ ಉಂಟಾಗುತ್ತಿದೆ ಎಂದು ಆಕ್ಷೇಪಿಸಿ ಕರ್ನಾಟಕ ಹೈಕೊರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಕೆಯಾಗಿದೆ.

ರಾಜ್ಯದ ವಿವಿಧ ಕಾನೂನು ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಅಶ್ವಿನಿ ಶಂಕರ್ ಭಟ್, ನೇಹಾ ವೆಂಕಟೇಶ್ ಮತ್ತು ಯಶಿಕಾ ಸರವಣನ್ ಮತ್ತಿತರರು ಈ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ರಾಜ್ಯ ಸಾರಿಗೆ ಇಲಾಖೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ), ಬೆಂಗಳೂರು ಮಹಾನಗರ ಸಾರಿಗೆ ನಿಗಮ (ಬಿಎಂಟಿಸಿ), ವಾಯುವ್ಯ ರಸ್ತೆ ಸಾರಿಗೆ ನಿಗಮ (ಎನ್‌ಡಬ್ಲ್ಯುಕೆಆರ್‌ಟಿಸಿ), ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮವನ್ನು (ಕೆಕೆಆರ್‌ಟಿಸಿ) ಪ್ರತಿವಾದಿ ಮಾಡಲಾಗಿದೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.

ರಾಜ್ಯದ ನಾಲ್ಕು ಸಾರಿಗೆ ನಿಮಗಗಳಿಗೆ ಸೇರಿದ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸಿ ರಾಜ್ಯ ಸರ್ಕಾರ ಶಕ್ತಿ ಯೋಜನೆಯನ್ನು ಜಾರಿ ಮಾಡಿದೆ. ಆದರೆ, ಬಸ್ ಹಾಗೂ ಬಸ್ ನಿಲ್ದಾಣಗಳಲ್ಲಿ ಜನಸಂದಣಿ ಹೆಚ್ಚಾಗಿದೆ. ಇದರಿಂದ ಅವ್ಯವಸ್ಥೆ ಹಾಗೂ ಗದ್ದಲದ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರಯಾಣಿಕರು ಸಹ ಅಶಿಸ್ತಿನ ನಡವಳಿಕೆ ತೋರುತ್ತಿದ್ದಾರೆ. ಬಸ್‌ಗಳಲ್ಲಿ ಸೀಟಿಗಾಗಿ ಗಲಾಟೆ, ಹೊಡೆದಾಟ ನಡೆದು ಅಹಿತಕರ ಘಟನೆಗಳು ವರದಿಯಾಗಿವೆ. ಹಿರಿಯ ನಾಗರಿಕರು, ಮಕ್ಕಳು ಬಸ್‌ಗಳಲ್ಲಿ ಹತ್ತಲು ಆಗುತ್ತಿಲ್ಲ. ಇದರಿಂದ ನಿಗದಿತ ಸಮಯಕ್ಕೆ ವಿದ್ಯಾರ್ಥಿಗಳು ಶಾಲಾ-ಕಾಲೇಜು ತಲುಪಲು ಆಗುತ್ತಿಲ್ಲ. ಬಸ್ ನಿಲ್ದಾಣ ಮತ್ತು ಸರ್ಕಾರಿ ಬಸ್‌ಗಳು ಯುದ್ಧ ಭೂಮಿ, ಮೀನು ಮಾರುಕಟ್ಟೆ ಆಗಿವೆ. ಉಚಿತ ಪ್ರಯಾಣವು ಮಹಿಳೆಯರಿಗೆ ಪ್ರಯೋಜನಕ್ಕಿಂತ ಹೆಚ್ಚಿನ ಹಾನಿ ಉಂಟು ಮಾಡುತ್ತಿದೆ ಎಂದು ಅರ್ಜಿಯಲ್ಲಿ ಆಕ್ಷೇಪಿಸಲಾಗಿದೆ.

ಅಲ್ಲದೆ, ಶಕ್ತಿ ಯೋಜನೆ ಜಾರಿಯಾದ ದಿನದಿಂದ ಸರ್ಕಾರಿ ಬಸ್‌ಗಳಲ್ಲಿ ಮೂರು ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಿದ್ದಾರೆ. ಇದರಿಂದ ವಾರಕ್ಕೆ 100 ಕೋಟಿ ರೂಪಾಯಿ ತೆರಿಗೆದಾರರ ಹಣ ಸರ್ಕಾರಕ್ಕೆ ನಷ್ಟವಾಗುತ್ತಿದೆ. ಈ ಯೋಜನೆಗೆ ವಾರ್ಷಿಕ 3,200ರಿಂದ 3,400 ಕೋಟಿ ರೂಪಾಯಿ ವೆಚ್ಚವಾಗಬಹುದು. ಆದ್ದರಿಂದ, ಬಸ್ ಹತ್ತುವಾಗ ಸರತಿ ಸಾಲು ವ್ಯವಸ್ಥೆ ಮಾಡಬೇಕು. ಕಿಟಕಿ ಮತ್ತು ಚಾಲಕ ಸೀಟುಗಳ ಮೂಲಕ ಬಸ್‌ಗಳನ್ನು ಹತ್ತುವುದನ್ನು ತಡೆಯಬೇಕು. ಶಾಲಾ ಮಕ್ಕಳು ಹಿರಿಯ ನಾಗರಿಕರಿಗೆ ಬಸ್ ಹತ್ತಿ-ಇಳಿಯಲು ಸೂಕ್ತ ವ್ಯವಸ್ಥೆ ಮಾಡುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ಹಾಗೆಯೇ, ಟಿಕೆಟ್ ಖರೀದಿಸಿದವರಿಗೆ ಶೇ.50ರಷ್ಟು ಸೀಟುಗಳಿಗೆ ಮೀಸಲಿಡಬೇಕು. ಶಾಲಾ ಮಕ್ಕಳಿಗೆ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಬೇಕು. ದೂರದ ಊರಿಗಳಿಗೆ ತೆರಳುವ ಬಸ್‌ಗಳಲ್ಲಿ ಮುಂಗಡ ಟಿಕೆಟ್ ಕಾಯ್ದಿರಿಸಿದ ಪ್ರಯಾಣಿಕರಿಗೆ ಬಸ್‌ಗಳಲ್ಲಿ ಹತ್ತಲು ಮೊದಲು ಅವಕಾಶ ಮಾಡಿಕೊಡಬೇಕು. ದೂರದ ಊರುಗಳಿಗೆ ನಿಂತು ಪ್ರಯಾಣಿಸುವುದನ್ನು ನಿಷೇಧಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.