Gauri Lankesh and Karnataka High Court 
ಸುದ್ದಿಗಳು

ಗೌರಿ ಹತ್ಯೆ ಪ್ರಕರಣ: ಅಮಿತ್‌ ದಿಗ್ವೇಕರ್‌, ಸುರೇಶ್‌, ನವೀನ್‌ ಕುಮಾರ್‌ಗೆ ಜಾಮೀನು ಮಂಜೂರು ಮಾಡಿದ ಹೈಕೋರ್ಟ್‌

ಹನ್ನೊಂದನೇ ಆರೋಪಿ ಮೋಹನ್‌ ನಾಯಕ್‌ಗೆ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿರುವುದನ್ನು ಪರಿಗಣಿಸಿ ತಮಗೂ ಜಾಮೀನು ಮಂಜೂರು ಮಾಡಬೇಕು ಎಂಬುದು ಎಲ್ಲಾ ಅರ್ಜಿದಾರರ ವಾದವಾಗಿತ್ತು.

Siddesh M S

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದಲ್ಲಿನ ಮೂವರು ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್‌ ಮಂಗಳವಾರ ಜಾಮೀನು ಮಂಜೂರು ಮಾಡಿದೆ.

ಪ್ರಕರಣದಲ್ಲಿ ಐದನೇ ಆರೋಪಿಯಾಗಿರುವ ಅಮಿತ್‌ ದಿಗ್ವೇಕರ್‌ ಅಲಿಯಾಸ್‌ ಅಮಿತ್‌ ಅಲಿಯಾಸ್‌ ಪ್ರದೀಪ್‌ ಮಹಾಜನ್‌; ಏಳನೇ ಆರೋಪಿ ಸುರೇಶ್‌ ಎಚ್‌ ಎಲ್‌ ಅಲಿಯಾಸ್‌ ಟೀಚರ್‌ ಮತ್ತು 17ನೇ ಆರೋಪಿ ಕೆ ಟಿ ನವೀನ್‌ ಕುಮಾರ್‌ ಅಲಿಯಾಸ್‌ ನವೀನ್‌ ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ಕಲಬುರ್ಗಿ ಪೀಠದಲ್ಲಿರುವ ನ್ಯಾಯಮೂರ್ತಿ ಎಸ್‌ ವಿಶ್ವಜಿತ್‌ ಶೆಟ್ಟಿ ಅವರ ಏಕಸದಸ್ಯ ಪೀಠ ಪುರಸ್ಕರಿಸಿದೆ. ವಿಸ್ತೃತ ಆದೇಶ ಇನ್ನಷ್ಟೇ ಪ್ರಕಟವಾಗಬೇಕಿದೆ.

ಹನ್ನೊಂದನೇ ಆರೋಪಿ ಮೋಹನ್‌ ನಾಯಕ್‌ಗೆ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿರುವುದನ್ನು ಪರಿಗಣಿಸಿ ತಮಗೂ ಜಾಮೀನು ಮಂಜೂರು ಮಾಡಬೇಕು ಎಂಬುದು ಎಲ್ಲಾ ಅರ್ಜಿದಾರರ ವಾದವಾಗಿತ್ತು. ಇದಕ್ಕೆ ತೀವ್ರವಾಗಿ ಆಕ್ಷೇಪಿಸಿದ ಪ್ರಾಸಿಕ್ಯೂಷನ್‌ “ಮೋಹನ್‌ ನಾಯಕ್‌ ಈ ಹಿಂದೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್‌ನ ಬೇರೊಂದು ಪೀಠವು ತಿರಸ್ಕರಿಸಿದ್ದು, ಕೊಲೆ, ಪಿತೂರಿಯಂಥ ಗಂಭೀರ ಆರೋಪಗಳಿರುವಾಗ ಜಾಮೀನು ನೀಡಲಾಗದು ಎಂದಿದೆ. ಇಡೀ ಪ್ರಕರಣದಲ್ಲಿ ಜಾಮೀನು ಪಡೆದಿರುವ ಏಕೈಕ ಮತ್ತು ಮೊದಲ ಆರೋಪಿ ಮೋಹನ್‌ ನಾಯಕ್‌ ಆಗಿದ್ದು, ಆತನ ಜಾಮೀನು ಆದೇಶವನ್ನು ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದು, ಅದು ವಿಚಾರಣೆಗೆ ಬಾಕಿಯಿದೆ" ಎಂದಿತ್ತು.

ಒಂದನೇ ಆರೋಪಿ ಅಮೋಲ್‌ ಕಾಳೆಯ ಸ್ವಯಂ ಹೇಳಿಕೆ ಆಧರಿಸಿ ಅಮಿತ್‌ನನ್ನು ಬಂಧಿಸಲಾಗಿದೆ. ಕೃತ್ಯಕ್ಕೆ ಹಣಕಾಸಿನ ನೆರವು ನೀಡಿದ ಆರೋಪ ಅಮಿತ್‌ ಮೇಲಿದೆ. 13ನೇ ಆರೋಪಿ ಸುಜಿತ್‌ (ಸುಜಿತ್‌ ಸಮನ್ವಯಕಾರನ ಪಾತ್ರ ವಹಿಸಿದ್ದಾನೆ) ಜೊತೆ ನವೀನ್‌ ಕುಮಾರ್‌ ಪಾರ್ಕ್‌ನಲ್ಲಿ ಮಾತನಾಡಿ ಸಂಚು ರೂಪಿಸಿದ್ದಾನೆ ಎಂದು ಆರೋಪಿಸಲಾಗಿದೆ. 15ನೇ ಆರೋಪಿ ವಿಕಾಸ್‌ ಪಾಟೀಲ್‌ಗೆ ಗೌರಿ ಲಂಕೇಶ್‌ ಅವರ ಮನೆಯ ವಿಳಾಸ ಪತ್ತೆ ಮಾಡಿಕೊಡಿಕೊಟ್ಟಿರುವ, ಶಸ್ತ್ರಾಸ್ತ್ರಗಳನ್ನು ಬಚ್ಚಿಡಲು ನೆರವಾಗಿರುವ ಆರೋಪ ಸುರೇಶ್‌ ಮೇಲಿದೆ.

ಅಮಿತ್‌ ದಿಗ್ವೇಕರ್‌ ಪರ ವಕೀಲ ಬಸವರಾಜ ಸಪ್ಪಣ್ಣವರ್‌, ಕೆ ಟಿ ನವೀನ್‌ ಕುಮಾರ್‌ (ಹೊಟ್ಟೆ ನವೀನ್‌) ಪರ ಹಿರಿಯ ವಕೀಲ ಎಂ ಅರುಣ್‌ ಶ್ಯಾಮ್‌ ಮತ್ತು ಸುರೇಶ್‌ ಪರವಾಗಿ ವಕೀಲ ಮಧುಕರ್‌ ದೇಶಪಾಂಡೆ ವಾದಿಸಿದ್ದರು. ರಾಜ್ಯ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಅಶೋಕ್‌ ನಾಯಕ್‌ ವಾದಿಸಿದ್ದರು.

ಪ್ರಕರಣದ ಹಿನ್ನೆಲೆ: 2017ರ ಸೆಪ್ಟೆಂಬರ್‌ 5ರಂದು ಗೌರಿ ಲಂಕೇಶ್‌ ಅವರು ಕೆಲಸ ಮುಗಿಸಿ ಮನೆಗೆ ಮರಳಿದ ವೇಳೆ ಗುಂಡು ಹಾರಿಸಿ ಕೊಲ್ಲಲಾಗಿತ್ತು. ಹತ್ಯೆಯ ಸಂಚು ರೂಪಿಸಿದ ಪ್ರಮುಖ ರೂವಾರಿ ಎಂದು ಅಮೋಲ್ ಕಾಳೆ ಮೇಲೆ ಆರೋಪವಿದ್ದರೆ, ಗುಂಡು ಹಾರಿಸಿದ ಆರೋಪ ಪರಶುರಾಮ್ ವಾಗ್ಮೋರೆ ಮೇಲೂ ಹಾಗೂ ಆತನನ್ನು ಕೂರಿಸಿಕೊಂಡು ಬೈಕ್ ಚಲಾಯಿಸಿ ತಪ್ಪಿಸಿಕೊಳ್ಳಲು ನೆರವಾದ ಆರೋಪವು ಗಣೇಶ್ ಮಿಸ್ಕಿನ್ ಮೇಲೂ ಇದೆ.

ಅಮೋಲ್ ಕಾಳೆ, ಪರಶುರಾಮ್ ವಾಗ್ಮೋರೆ, ಗಣೇಶ್ ಮಿಸ್ಕಿನ್, ಅಮಿತ್ ಬಾಡ್, ಅಮಿತ್ ದೆಗ್ವೇಕರ್, ಭರತ್ ಕುರಣೆ, ಸುರೇಶ್ ಹೆಚ್ ಎಲ್, ರಾಜೇಶ್ ಬಂಗೇರ, ಸುಧನ್ವ ಗೊಂದಲೇಕರ್, ಶರದ್ ಕಾಲಸ್ಕರ್, ಮೋಹನ್ ನಾಯಕ್, ವಾಸುದೇವ್ ಸೂರ್ಯವಂಶಿ, ಸುಜಿತ್ ಕುಮಾರ್, ಮನೋಹರ ಎಡವೆ, ವಿಕಾಸ್‌ ಪಾಟೀಲ್‌, ಶ್ರೀಕಾಂತ್ ಪಂಗರ್ಕರ್, ಕೆ ಟಿ ನವೀನ್ ಕುಮಾರ್ ಮತ್ತು ಹೃಶಿಕೇಶ್ ದಿಯೋದಿಕರ್‌ ಪ್ರಕರಣದ ಆರೋಪಿಗಳಾಗಿದ್ದಾರೆ.

ಬೆಂಗಳೂರಿನ ರಾಜರಾಜೇಶ್ವರಿ ನಗರ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 302, 120ಬಿ, 114, 118, 109, 201, 203, 204 ಮತ್ತು 35, ಸಶಸ್ತ್ರ ಕಾಯಿದೆಯ ಸೆಕ್ಷನ್‌ಗಳಾದ 25(1), 25(1B), 27(1) ಮತ್ತು ಕೋಕಾ ಕಾಯಿದೆಯ ಸೆಕ್ಷನ್‌ಗಳಾದ 3(1)(I), 3(2), 3(3), 3(4) ಅಡಿ ಪ್ರಕರಣ ದಾಖಲಿಸಲಾಗಿದೆ.