ಮಾವೋವಾದಿಗಳೊಂದಿಗೆ ನಂಟು ಹೊಂದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಗೋಕರಕೊಂಡ ನಾಗ ಸಾಯಿಬಾಬಾ ಅವರನ್ನು ಖುಲಾಸೆಗೊಳಿಸಿರುವ ಬಾಂಬೆ ಹೈಕೋರ್ಟ್‌ನ ನಾಗಪುರ ಪೀಠದ ತೀರ್ಪು ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ನಡೆಸಲಿದೆ.
ನ್ಯಾಯಮೂರ್ತಿಗಳಾದ ಎಂ ಆರ್ ಶಾ ಮತ್ತು ಬೇಲಾ ಎಂ ತ್ರಿವೇದಿ ಅವರಿದ್ದ ಪೀಠದ ಮುಂದೆ ಬೆಳಗ್ಗೆ 11 ಗಂಟೆಗೆ ಪ್ರಕರಣವನ್ನು ವಿಚಾರಣೆಗೆ ಪಟ್ಟಿ ಮಾಡಲಾಗಿದೆ.
ಸುಪ್ರೀಂ ಕೋರ್ಟ್ ಸಾಮಾನ್ಯವಾಗಿ ಶನಿವಾರ ಮತ್ತು ಭಾನುವಾರಗಳಂದು ಪ್ರಕರಣಗಳ ವಿಚಾರಣೆ ನಡೆಸುವುದಿಲ್ಲ. ಆದರೆ ಪ್ರಕರಣವನ್ನು ಆದ್ಯತೆಯ ಮೇಲೆ ಪಟ್ಟಿ ಮಾಡುವಂತೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಶುಕ್ರವಾರ ಸಂಜೆ ನ್ಯಾಯಮೂರ್ತಿಗಳಾದ ಡಿ ವೈ ಚಂದ್ರಚೂಡ್ ಮತ್ತು ಹಿಮಾ ಕೊಹ್ಲಿ ಅವರಿದ್ದ ಪೀಠದ ಮುಂದೆ ತುರ್ತಾಗಿ ಪ್ರಸ್ತಾಪಿಸಿದ ಬಳಿಕ ಪ್ರಕರಣವನ್ನು ಪಟ್ಟಿ ಮಾಡಲಾಗಿದೆ.
ಶನಿವಾರ ತುರ್ತು ವಿಚಾರಣೆ ನಡೆಸಲು ಕೋರಿ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಬಹುದು ಎಂದು ಕೂಡ ನ್ಯಾಯಾಲಯ ಸ್ಪಷ್ಟಪಡಿಸಿತ್ತು.
ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆಯ (ಯುಎಪಿಎ) ಸೆಕ್ಷನ್ 45(1)ರ ಅಡಿ ಕೇಂದ್ರ ಸರ್ಕಾರದಿಂದ ಅನುಮತಿ ಇಲ್ಲದಿರುವಾಗ ಸೆಷನ್ಸ್ ನ್ಯಾಯಾಲಯ ಸಾಯಿಬಾಬಾ ಅವರ ವಿರುದ್ಧ ಆರೋಪ ನಿಗದಿಪಡಿಸಿದೆ ಎಂಬ ನೆಲೆಯಲ್ಲಿ ನ್ಯಾಯಮೂರ್ತಿಗಳಾದ ರೋಹಿತ್ ದಿಯೋ ಮತ್ತು ಅನಿಲ್ ಪನ್ಸಾರೆ ಅವರಿದ್ದ ಬಾಂಬೆ ಹೈಕೋರ್ಟ್‌ನ ನಾಗಪುರ ಪೀಠ ಅವರನ್ನು ಖುಲಾಸೆಗೊಳಿಸಿತ್ತು.