ಕಳೆದ ಐದು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ರಾಜ್ಯದ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿಗಳಿಗೆ ಚುನಾವಣೆ ನಡೆಸಲು ವಿಳಂಬ ಆಗಿರುವುದಕ್ಕೆ ನ್ಯಾಯಾಲಯದ ಕ್ಷಮೆ ಯಾಚಿಸಿರುವ ರಾಜ್ಯ ಸರ್ಕಾರವು ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳಿಗೆ ಮೀಸಲಾತಿ ನಿಗದಿ ಪ್ರಕ್ರಿಯೆ ಪೂರ್ಣಗೊಳಿಸಲು ಮತ್ತೆ ಎರಡು ತಿಂಗಳು ಕಾಲಾವಕಾಶ ಕೇಳಿದೆ.
ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿಗಳಿಗೆ 12 ವಾರಗಳಲ್ಲಿ ಮೀಸಲಾತಿ ಅಂತಿಮಗೊಳಿಸಲಾಗುವುದು ಎಂದು 2023 ಡಿಸೆಂಬರ್ 19ಕ್ಕೆ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಲಿಖಿತ ಭರವಸೆ ನೀಡಿತ್ತು. ನ್ಯಾಯಾಲಯಕ್ಕೆ ಕೊಟ್ಟ ಭರವಸೆಯಂತೆ ಸರ್ಕಾರ ನಡೆದುಕೊಂಡಿಲ್ಲ ಎಂದು ಆಕ್ಷೇಪಿಸಿ ಸ್ವತಃ ರಾಜ್ಯ ಚುನಾವಣಾ ಆಯೋಗವು ಸರ್ಕಾರದ ವಿರುದ್ಧ 2024ರಲ್ಲಿ ಹೂಡಿರುವ ನ್ಯಾಯಾಂಗ ನಿಂದನೆ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಎಂ ಐ ಅರುಣ್ ಅವರ ವಿಭಾಗೀಯ ಪೀಠ ಶುಕ್ರವಾರ ವಿಚಾರಣೆ ನಡೆಸಿತು.
ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಕಾರ್ಯದರ್ಶಿ ಡಿ ರಂದೀಪ್ ಅವರು ನ್ಯಾಯಾಲಯಕ್ಕೆ ಪ್ರಮಾಣಪತ್ರ ಸಲ್ಲಿಸಿದ್ದು, ಮೀಸಲಾತಿ ನಿಗದಿ ಪ್ರಕ್ರಿಯೆಗೆ ವಿಳಂಬವಾದ ಕಾರಣಗಳನ್ನು ವಿವರಿಸಿದ್ದಾರೆ. ಸರ್ಕಾರದಿಂದ ಉದ್ದೇಶಪೂರ್ವಕವಾಗಿ ವಿಳಂಬವಾಗಿಲ್ಲ, ನ್ಯಾಯಾಲಯದ ಆದೇಶ ಪಾಲನೆಯಲ್ಲೂ ವಿಳಂಬವಾಗಿಲ್ಲ. ಆದರೆ, ಆಗಿರುವ ವಿಳಂಬಕ್ಕೆ ಕ್ಷಮೆ ಯಾಚಿಸುವುದಾಗಿ ಪ್ರಮಾಣಪತ್ರದಲ್ಲಿ ಹೇಳಿದ್ದಾರೆ.
ಕಂದಾಯ ಇಲಾಖೆಯು ವಿಜಯಪುರ ಜಿಲ್ಲೆಯ ನಾಲ್ಕು ಹಾಗೂ ಬಾಗಲಕೋಟೆ ಜಿಲ್ಲೆಯ ತಾಲ್ಲೂಕುಗಳ ಗಡಿಗಳನ್ನು ಬದಲಾಯಿಸಿ ಅಧಿಸೂಚನೆ ಹೊರಡಿಸಿತ್ತು. ಹಾಗಾಗಿ ಈ ಎರಡು ಜಿಲ್ಲೆಗಳ ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಗಡಿಗಳನ್ನು ಮರು ನಿಗದಿಪಡಿಸಬೇಕಾಯಿತು. ಅದರಂತೆ ಈಗಾಗಲೇ ವಿಜಯಪುರ ಜಿಲ್ಲೆಯ ನಾಲ್ಕು ತಾಲ್ಲೂಗಳ ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಗಡಿಗಳನ್ನು ಮರುನಿಗದಿಪಡಿಸಲಾಗಿದೆ. ಉಳಿದಂತೆ ಬಾಗಲಕೋಟೆ ಜಿಲ್ಲೆಯ ತಾಲ್ಲೂಕುಗಳ ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಗಡಿಗಳ ಮರು ನಿಗದಿ ಹಾಗೂ ಮೀಸಲಾತಿ ನಿಗದಿಗೆ ಎರಡು ತಿಂಗಳ ಕಾಲಾವಕಾಶಬೇಕಾಗಿದೆ. ಇದನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳ ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಕ್ಷೇತ್ರ ಮರುವಿಂಗಡಣೆ ಪೂರ್ಣಗೊಂಡಿದ್ದು, ಅವುಗಳಿಗೆ ಮೀಸಲಾತಿ ನಿಗದಿಪಡಿಸಲು ಎರಡು ತಿಂಗಳು ಕಾಲಾವಕಾಶ ಬೇಕು ಎಂದು ಪ್ರಮಾಣಪತ್ರದಲ್ಲಿ ವಿವರಿಸಲಾಗಿದೆ.
ಇದನ್ನು ದಾಖಲಿಸಿಕೊಂಡ ಪೀಠವು ವಿಚಾರಣೆಯನ್ನು ಸೆಪ್ಟಂಬರ್ 11ಕ್ಕೆ ಮುಂದೂಡಿತು.