ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಅಧಿಸೂಚಿತ ಮತ್ತು ಅಭಿವೃದ್ಧಿಪಡಿಸಿದ ಕೈಗಾರಿಕಾ ಪ್ರದೇಶಗಳಲ್ಲಿರುವ ಕೈಗಾರಿಕಾ ಸಂಸ್ಥೆಗಳಿಗೆ ತೆರಿಗೆ ವಿಧಿಸಲು ಅಥವಾ ಸಂಗ್ರಹಿಸಲು ಗ್ರಾಮ ಪಂಚಾಯಿತಿಗಳಿಗೆ ಕಾನೂನಿನಲ್ಲಿ ಯಾವುದೇ ಅಧಿಕಾರವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಈಚೆಗೆ ಆದೇಶಿಸಿದೆ.
ಬೆಂಗಳೂರಿನ ಬಳಿಯ ನೆಲಮಂಗಲದ ಸೋಂಪುರ ಕೈಗಾರಿಕಾ ಪ್ರದೇಶದಲ್ಲಿ ನೆಲೆಗೊಂಡಿರುವ ಹಲವಾರು ಕೈಗಾರಿಕಾ ಸಂಸ್ಥೆಗಳಿಗೆ ಸೋಂಪುರ ಗ್ರಾಮ ಪಂಚಾಯತ್ ಆಸ್ತಿ ತೆರಿಗೆ ಪಾವತಿಸುವಂತೆ ನೀಡಿರುವ ನೋಟಿಸ್‌ಗಳನ್ನು ಪ್ರಶ್ನಿಸಿ ಕಲ್ಪತರು ಬ್ರೂವರೀಸ್ ಮತ್ತು ಡಿಸ್ಟಿಲರೀಸ್ ಪ್ರೈವೆಟ್ ಲಿಮಿಟೆಡ್ ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರ ಏಕಸದಸ್ಯಪೀಠ ಪುರಸ್ಕರಿಸಿದೆ.
ಸೋಂಪುರ ಗ್ರಾಮ ಪಂಚಾಯತಿ ಕೈಗಾರಿಕಾ ಸಂಸ್ಥೆಗಳಿಗೆ ಆಸ್ತಿ ತೆರಿಗೆ ಪಾವತಿಸುವಂತೆ ನೀಡಿದ್ದ ನೋಟಿಸ್‌ಗಳನ್ನು ನ್ಯಾಯಾಲಯ ರದ್ದುಗೊಳಿಸಿದೆ.
“ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಕಾಯಿದೆ 1966ರ ನಿಬಂಧನೆಗಳಡಿಯಲ್ಲಿ ಕೆಐಎಡಿಬಿ ಕೈಗಾರಿಕಾ ಪ್ರದೇಶಗಳಲ್ಲಿ ತೆರಿಗೆ ವಿಧಿಸುವ ಮತ್ತು ಸಂಗ್ರಹಿಸುವ ಹಕ್ಕು ಸೇರಿದಂತೆ ಅಭಿವೃದ್ಧಿ ಚಟುವಟಿಕೆಗಳನ್ನು ನಿಯಂತ್ರಿಸುವ ಮತ್ತು ಅನುಮೋದಿಸುವ ಅಧಿಕಾರವು ಕೆಐಎಡಿಬಿಗೆ ಮಾತ್ರ ಇರುತ್ತದೆ. ನಿರ್ದಿಷ್ಟ ಶಾಸನಬದ್ಧ ಸಮ್ಮತಿಯ ಅನುಪಸ್ಥಿತಿಯಲ್ಲಿ ಗ್ರಾಮ ಪಂಚಾಯತಿಗಳಿಗೆ ಅಂತಹ ಅಧಿಕಾರವಿಲ್ಲ ಮತ್ತು ಅಂತಹ ಅಧಿಕಾರವನ್ನು ಕೆಐಎಡಿಬಿಯಿಂದ ಕಸಿದುಕೊಳ್ಳಲು ಸಾಧ್ಯವಿಲ್ಲ” ಎಂದು ನ್ಯಾಯಾಲಯ ಹೇಳಿದೆ.
“ರಾಜ್ಯ ಸರ್ಕಾರವು ಕೆಐಎಡಿಬಿ ಕಾಯಿದೆಯ ಸೆಕ್ಷ ನ್ 37ರ ಅಡಿಯಲ್ಲಿ ಕೈಗಾರಿಕಾ ಪ್ರದೇಶಗಳನ್ನು ಕೆಐಎಡಿಬಿ ನಿಯಂತ್ರಣದಿಂದ ಸಂಬಂಧಪಟ್ಟ ಸ್ಥಳೀಯ ಅಧಿಕಾರಿಗಳಿಗೆ ವರ್ಗಾಯಿಸಿ ಅಧಿಸೂಚನೆಯನ್ನು ಹೊರಡಿಸಿದ್ದಾಗ ಮಾತ್ರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಕೈಗಾರಿಕಾ ಪ್ರದೇಶಗಳ ಮೇಲೆ ಅಧಿಕಾರ ವ್ಯಾಪ್ತಿ ಹೊಂದಲಿದ್ದಾರೆ” ಎಂದು ನ್ಯಾಯಾಲಯ ಹೇಳಿದೆ.
ಮುಂದುವರೆದು, ರಾಜ್ಯ ಸರ್ಕಾರವು ಅಂತಹ ಅಧಿಸೂಚನೆಯನ್ನು ಹೊರಡಿಸುವವರೆಗೆ, ಕೆಐಎಡಿಬಿ ಅಧಿಕಾರ ವ್ಯಾಪ್ತಿ ಇರಲಿದೆ. ಆದ್ದರಿಂದ, ಗ್ರಾಮ ಪಂಚಾಯತಿಗಳು ಸೇರಿದಂತೆ ಯಾವುದೇ ಸ್ಥಳೀಯ ಪ್ರಾಧಿಕಾರವು ಪರೋಕ್ಷ ವಾಗಿ ಅಥವಾ ಆಕಸ್ಮಿಕವಾಗಿ ಅಧಿಕಾರ ವ್ಯಾಪ್ತಿಯನ್ನು ಚಲಾಯಿಸಲು ಯಾವುದೇ ಅವಕಾಶವಿರುವುದಿಲ್ಲ ಎಂದು ನ್ಯಾಯಾಲಯವು ಹೇಳಿದೆ.