Supreme Court 
ಸುದ್ದಿಗಳು

ಹತ್ರಾಸ್ ಅತ್ಯಾಚಾರ ಪ್ರಕರಣ: ವಿಚಾರಣೆಯನ್ನು ಸಿಬಿಐ ಅಥವಾ ಎಸ್‌ಐಟಿಗೆ ಹಸ್ತಾಂತರಿಸಲು ಸುಪ್ರೀಂ ಕೋರ್ಟ್‌ನಲ್ಲಿ ಮನವಿ

ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಸೆಪ್ಟೆಂಬರ್ 14ರಂದು 19 ವರ್ಷದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದ್ದು, ಇದರಲ್ಲಿ ಪೊಲೀಸರ ಪಾತ್ರದ ಬಗ್ಗೆ ಅರ್ಜಿದಾರರು ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ.

Bar & Bench

ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್‌ನ ಹಾಲಿ ಅಥವಾ ನಿವೃತ್ತ ನ್ಯಾಯಮೂರ್ತಿ ಅವರ ನಿಗಾವಣೆಯಡಿ ಕೇಂದ್ರೀಯ ತನಿಖಾ ದಳ (ಸಿಬಿಐ) ಅಥವಾ ವಿಶೇಷ ತನಿಖಾ ತಂಡ (ಎಸ್‌ಐಟಿ) ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ನಡೆದಿರುವ ಸಾಮೂಹಿಕ ಅತ್ಯಾಚಾರ ಪ್ರಕರಣದ ವಿಚಾರಣೆ ನಡೆಸುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಮನವಿ ಸಲ್ಲಿಸಲಾಗಿದೆ.

ಪ್ರಕರಣದ ವಿಚಾರಣೆಯನ್ನು ಉತ್ತರ ಪ್ರದೇಶದಿಂದ ದೆಹಲಿಗೆ ವರ್ಗಾಯಿಸಬೇಕು ಮತ್ತು ತ್ವರಿತಗತಿಯಲ್ಲಿ ವಿಚಾರಣೆ ನಡೆಸಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿರುವ ಮೂವರು ಅರ್ಜಿದಾರರು ಕೋರಿದ್ದಾರೆ.

ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಸೆಪ್ಟೆಂಬರ್ 14ರಂದು 19 ವರ್ಷದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದ್ದು, ಇದರಲ್ಲಿ ಪೊಲೀಸರ ಪಾತ್ರದ ಬಗ್ಗೆ ಅರ್ಜಿದಾರರು ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ.

ತೀವ್ರವಾಗಿ ಗಾಯಗೊಂಡಿದ್ದ ಸಂತ್ರಸ್ತೆ ದೆಹಲಿಯ ಸಫ್ದರ್ ಜಂಗ್ ಆಸ್ಪತ್ರೆಯಲ್ಲಿ ಮಂಗಳವಾರ ಸಾವನ್ನಪ್ಪಿದ್ದರು. ಶವವನ್ನು ಆಕೆಯ ತವರಿಗೆ ಕೊಂಡೊಯ್ಯುತ್ತಲೇ ಆಕೆಯ ಪೋಷಕರ ಒಪ್ಪಿಗೆ ಪಡೆಯದೇ ಮತ್ತು ಅವರ ಅನುಪಸ್ಥಿತಿಯಲ್ಲಿ ಬಲವಂತವಾಗಿ ಮಧ್ಯರಾತ್ರಿಯಲ್ಲಿ ಪೊಲೀಸರು ಮತ್ತು ಆಡಳಿತ ವರ್ಗ ಸಂಸ್ಕಾರ ನಡೆಸಿತ್ತು ಎಂದು ಆರೋಪಿಸಲಾಗಿದೆ. ಮಧ್ಯರಾತ್ರಿಯಲ್ಲಿ ಶವ ಸಂಸ್ಕಾರ ನಡೆಸುವಾಗ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ಉಪಸ್ಥಿತರಿದ್ದರು ಎಂದು ಆರೋಪಿಸಲಾಗಿದೆ.

ಎಫ್‌ಐಆರ್ ದಾಖಲಿಸುವುದು ಮತ್ತು ಸಂತ್ರಸ್ತೆಯ ಹೇಳಿಕೆ ದಾಖಲಿಸಿಕೊಳ್ಳುವುದು ಸೇರಿದಂತೆ ಹಲವು ವಿಚಾರಗಳಲ್ಲಿ ಸಂದರ್ಭೋಚಿತ ನಿರ್ಧಾರ ಕೈಗೊಳ್ಳಲು ಪೊಲೀಸರು ವಿಫಲವಾಗಿದ್ದಾರೆ ಎಂದು ಹಲವು ವರದಿಗಳು ಹೇಳಿವೆ. ಎರಡು ಗ್ರಾಮಗಳ ನಡುವಿನ ಗಲಭೆ ಎಂದು ಪ್ರಕರಣವನ್ನು ಮುಚ್ಚಿ ಹಾಕಲು ಪೊಲೀಸರು ಯತ್ನಿಸಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದ್ದು, ಹೀಗೆ ಹೇಳಲಾಗಿದೆ.

“... ಸಂತ್ರಸ್ತೆಯ ಪರವಾಗಿ ಪೊಲೀಸ್ ಅಧಿಕಾರಿ ವರ್ಗ ತಮ್ಮ ಕರ್ತವ್ಯ ನಿರ್ವಹಿಸಿಲ್ಲ. ಆರೋಪಿಗಳನ್ನು ರಕ್ಷಿಸುವ ಕೆಲಸವನ್ನು ಪೋಲಿಸರು ಮಾಡಿದ್ದಾರೆ. ಯಾವ ಕಾರಣಕ್ಕಾಗಿ ಹೀಗೆ ಮಾಡಿದ್ದಾರೆ ಎಂಬುದು ಅವರಿಗೇ ಗೊತ್ತು.”

ವಕೀಲ ಪ್ರದೀಪ್ ಕುಮಾರ್ ಯಾದವ್ ಅರ್ಜಿ ಸಿದ್ಧಪಡಿಸಿದ್ದು, ವಕೀಲ ಸಂಜೀವ್ ಮಲ್ಹೋತ್ರಾ ಅವರ ಮೂಲಕ ಮನವಿ ಸಲ್ಲಿಸಲಾಗಿದೆ.

ದಲಿತ ಯುವತಿಯ ಮೇಲಿನ ಹೀನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದೆಡೆಗೆ ಗಮನಹರಿಸಲು ಕೋರಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ಮತ್ತು ಇತರೆ ನ್ಯಾಯಮೂರ್ತಿಗಳಿಗೆ ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಪತ್ರ ಬರೆದಿದ್ದಾರೆ.