Acting Chief Justice Alok Aradhe and Justice S Vishwajith Shetty, Karnataka High Court 
ಸುದ್ದಿಗಳು

ಬಾಬಾ ಬುಡನ್‌ ಗಿರಿ ದತ್ತ ಪೀಠದಲ್ಲಿ ಡಿಸೆಂಬರ್ 6 ರಿಂದ ದತ್ತಾತ್ರೇಯ ಜಯಂತಿ ನಡೆಸಲು ಅನುಮತಿಸಿದ ಹೈಕೋರ್ಟ್‌

ಡಿ. 6, 7 & 8 ರಂದು ದತ್ತ ಜಯಂತಿ ನಡೆಸಲು ಉದ್ದೇಶಿಸಲಾಗಿದೆ. ದೇವಸ್ಥಾನದಲ್ಲಿ ಪೂಜಾ ವಿಧಿ ವಿಧಾನ ನೆರವೇರಿಸುವ ವಿಚಾರದಲ್ಲಿ ಉಸ್ತುವಾರಿ ವಹಿಸಲು ರಚಿಸಿರುವ ವ್ಯವಸ್ಥಾಪನಾ ಸಮಿತಿಯು ದತ್ತ ಜಯಂತಿ ಆಚರಣೆಗೆ ಸಿದ್ಧತೆ ನಡೆಸಲಾಗಿದೆ ಎಂದ ಎಜಿ.

Bar & Bench

ಚಿಕ್ಕಮಗಳೂರು ಜಿಲ್ಲೆಯ ಬಾಬಾ ಬುಡನ್‌ ಗಿರಿಯ ದತ್ತಾತ್ರೇಯ ಪೀಠದಲ್ಲಿ ಡಿಸೆಂಬರ್ 6 ರಿಂದ ಮೂರು ದಿನಗಳ ಕಾಲ ದತ್ತಾತ್ರೇಯ ಜಯಂತಿ ಆಚರಿಸಲು ಕರ್ನಾಟಕ ಹೈಕೋರ್ಟ್ ಬುಧವಾರ ಅನುಮತಿಸಿದೆ.

ದತ್ತಾತ್ರೇಯ ಪೀಠದಲ್ಲಿ ಪೂಜಾ ವಿಧಿ ವಿಧಾನ ನೆರವೇರಿಸಲು ತಮ್ಮನ್ನು ನೇಮಿಸಿ 2018ರಲ್ಲಿ ಅಂದಿನ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ರದ್ದುಪಡಿಸಿದ್ದ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ಮುಸ್ಲಿಂ ಮೌಲ್ವಿ ಸೈಯದ್ ಗೌಸ್ ಮೊಹಿಯುದ್ದೀನ್ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಅಲೋಕ್ ಅರಾಧೆ ಮತ್ತು ವಿಶ್ವಜಿತ್‌ ಶೆಟ್ಟಿ ಅವರ ನೇತೃತ್ವದ ವಿಭಾಗೀಯ ಪೀಠ ನಡೆಸಿತು.

ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ಅವರು “ಡಿಸೆಂಬರ್ 6, 7 ಮತ್ತು 8 ಎಂದು ದತ್ತಾತ್ರೇಯ ಜಯಂತಿ ನಡೆಸಲು ಉದ್ದೇಶಿಸಲಾಗಿದೆ. ದೇವಸ್ಥಾನದಲ್ಲಿ ಪೂಜಾ ವಿಧಿ ವಿಧಾನ ನೆರವೇರಿಸುವ ವಿಚಾರದಲ್ಲಿ ಉಸ್ತುವಾರಿ ವಹಿಸಲು ರಚಿಸಿರುವ ವ್ಯವಸ್ಥಾಪನಾ ಸಮಿತಿಯು ದತ್ತಾತ್ರೇಯ ಜಯಂತಿ ಆಚರಣೆಗೆ ಎಲ್ಲಾ ಸಿದ್ಧತೆ ನಡೆಸಿದೆ” ಎಂದರು.

“ವ್ಯವಸ್ಥಾಪನಾ ಸಮಿತಿ ಮತ್ತು ಭಕ್ತರು ದತ್ತಪೀಠದ ದತ್ತ ಪಾದುಕೆಗೆ ಪೂಜೆ ನೆರವೇರಿಸಲಿದ್ದಾರೆ. ಇಸ್ಲಾಂ ಮತ್ತು ಹಿಂದೂ ಧಾರ್ಮಿಕ ಸಂಪ್ರದಾಯದಂತೆ ದತ್ತಪೀಠದಲ್ಲಿ ಪೂಜಾ ವಿಧಿ ವಿಧಾನ ನೆರವೇರಿಸಲು ಸಮಿತಿಯಿಂದ ಅರ್ಚಕ ಹಾಗೂ ಮುಜಾವರ್ ಅವರನ್ನು ನೇಮಿಸಲಾಗಿದೆ. ಪ್ರತಿದಿನ ಇಸ್ಲಾಂ ಮತ್ತು ಹಿಂದೂ ಸಮುದಾಯದವರು ದತ್ತ ಪಾದುಕೆಗೆ ಪೂಜೆ ನಡೆಸುತ್ತಿದ್ದಾರೆ. ಆದ್ದರಿಂದ ದತ್ತಾತ್ರೇಯ ಜಯಂತಿ ಆಚರಣೆಗೆ ಅನುಮತಿ ನೀಡಬೇಕು” ಎಂದು ಕೋರಿದರು. ಈ ಹೇಳಿಕೆ ದಾಖಲಿಸಿಕೊಂಡ ಪೀಠವು ದತ್ತಾತ್ರೇಯ ಜಯಂತಿ ಆಚರಣೆಗೆ ಅನುಮತಿ ನೀಡಿ ವಿಚಾರಣೆಯನ್ನು 2023ರ ಜನವರಿ 12ಕ್ಕೆ ಮುಂದೂಡಿತು.

ಪ್ರಕರಣದ ಹಿನ್ನೆಲೆ: ದತ್ತಾತ್ರೇಯ ಪೀಠದಲ್ಲಿ ಪೂಜಾ ವಿಧಿ ವಿಧಾನ ನೆರವೇರಿಸಲು ಮುಸ್ಲಿಂ ಮೌಲ್ವಿ ಸೈಯದ್ ಗೌಸ್ ಮೊಹಿಯುದ್ದೀನ್ ಅವರನ್ನು ನೇಮಿಸಿ 2018ರಲ್ಲಿ ಅಂದಿನ ರಾಜ್ಯ ಸರ್ಕಾರ ಆದೇಶಿಸಿತ್ತು. ಅದನ್ನು ರದ್ದುಪಡಿಸಿದ್ದ ಹೈಕೋರ್ಟ್ ಏಕ ಸದಸ್ಯ ಪೀಠವು ಪ್ರಕರಣವನ್ನು ಸರ್ಕಾರಕ್ಕೆ ಹಿಂದಿರುಗಿಸಿತ್ತು. ಹಾಗೆಯೇ, ಪ್ರಕರಣದ ಕುರಿತು ರಚಿಸಲಾಗಿದ್ದ ಉನ್ನತ ಮಟ್ಟದ ಸಮಿತಿ ನೀಡಿರುವ ವರದಿ ಗಣನೆಗೆ ತೆಗೆದುಕೊಳ್ಳದೇ ಪ್ರಕರಣವನ್ನು ಹೊಸದಾಗಿ ಪರಿಗಣಿಸಬೇಕು ಎಂದು 2021ರ ಸೆಪ್ಟೆಂಬರ್‌ 28ರಂದು ನಿರ್ದೇಶಿಸಿತ್ತು. ಈ ತೀರ್ಪು ಪ್ರಶ್ನಿಸಿ ಗೌಸ್ ಮೊಹಿಯುದ್ದೀನ್ ಮೇಲ್ಮನವಿ ಸಲ್ಲಿಸಿದ್ದರು.

ಮೇಲ್ಮನವಿಯು 2022ರ ಆಗಸ್ಟ್‌ 22ರಂದು ವಿಚಾರಣೆಗೆ ಬಂದ ವೇಳೆ, ದತ್ತಾತ್ರೇಯ ಪೀಠದಲ್ಲಿ ಇಸ್ಲಾಂ ಮತ್ತು ಹಿಂದೂ ಸಂಪ್ರದಾಯಗಳದಂತೆ ಪೂಜಾ ವಿಧಿ ವಿಧಾನ ನೆರವೇರಿಸುವುದಕ್ಕೆ ಅವಕಾಶ ಕಲ್ಪಿಸಲು 2022ರ ಜುಲೈ 1ರಂದು ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ. ದತ್ತಾತ್ರೇಯ ಪೀಠದಲ್ಲಿ ಪೂಜೆ ನೆರವೇರಿಸಲು ಮುಜಾವರ್ ಮತ್ತು ಅರ್ಚಕರನ್ನು ನೇಮಿಸಲು 2022ರ ಜುಲೈ 19ರಂದು ಆದೇಶಿಸಲಾಗಿದೆ. ಹಾಗೆಯೇ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರ ನೇಮಕಾತಿಗೆ ಅರ್ಜಿ ಆಹ್ವಾನಿಸಿ ಆಗಸ್ಟ್‌ 17ರಂದು ಅಧಿಸೂಚನೆ ಹೊರಡಿಸಲಾಗಿದೆ ಎಂದು ಸರ್ಕಾರ ಮಾಹಿತಿ ನೀಡಿತ್ತು.