ಸಹಕಾರ ಸಂಘಗಳಲ್ಲಿ ನೇಮಕಾತಿ, ವೃಂದ ರಚನೆ, ನೌಕರರ ವರ್ಗಾವಣೆ ಮತ್ತು ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವ ಅಧಿಕಾರವನ್ನು ಸಹಕಾರ ಸಂಘಗಳಿಂದ ಮೊಟಕುಗೊಳಿಸಿ ಕರ್ನಾಟಕ ಸಹಕಾರ ಸಂಘಗಳ ಕಾಯಿದೆಯ ಸೆಕ್ಷನ್ 128ಎ ಸಂವಿಧಾನಬಾಹಿರ ಎಂದು ಘೋಷಿಸಿರುವ ಏಕಸದಸ್ಯ ಪೀಠ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ವಿಚಾರಣೆಗೆ ಪರಿಗಣಿಸಿದೆ.
ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಎಂ ಐ ಅರುಣ್ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
“ಮೇಲ್ಮನವಿಯನ್ನು ವಿಚಾರಣೆಗೆ ಪರಿಗಣಿಸಲಾಗಿದೆ. ಆದರೆ, ಏಕಸದಸ್ಯ ಪೀಠದ ಆದೇಶಕ್ಕೆ ಮಧ್ಯಂತರ ತಡೆ ನೀಡಬೇಕು ಎಂಬ ಸರ್ಕಾರದ ಮನವಿ ಈ ಹಂತದಲ್ಲಿ ಪರಿಗಣಿಸಲಾಗದು. ಕರ್ನಾಟಕ ಸಹಕಾರ ಸಂಘಗಳ (ತಿದ್ದುಪಡಿ) ಕಾಯಿದೆ-2023ರ ಸೆಕ್ಷನ್ 128-ಎ ಅಡಿ ಕರಡು ನಿಯಮಗಳನ್ನು ರಾಜ್ಯ ಸರ್ಕಾರ ರಚಿಸಬಹುದಾಗಿದೆ. ಕರಡು ನಿಯಮಗಳನ್ನು ಮುಂದಿನ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಸಲ್ಲಿಸಬೇಕು” ಎಂದು ನಿರ್ದೇಶಿಸಿ ವಿಚಾರಣೆಯನ್ನು ಮಾರ್ಚ್ 3ಕ್ಕೆ ಮುಂದೂಡಿತು.
ರಾಜ್ಯ ಸರ್ಕಾರದ ಪರವಾಗಿ ವಾದಿಸಿದ ಅಡ್ವೊಕೇಟ್ ಜನರಲ್ ಕೆ ಶಶಿಕಿರಣ್ ಶೆಟ್ಟಿ ಅವರು “ಪ್ರಾಥಮಿಕ ಸಹಕಾರ ಬ್ಯಾಂಕ್‌ಗಳಲ್ಲಿ 1,400 ಕೋಟಿ ರೂಪಾಯಿಗೂ ಅಧಿಕ ಭ್ರಷ್ಟಾಚಾರವಾಗಿದೆ. ಇದಕ್ಕಾಗಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಮಟ್ಟದಲ್ಲಿ ಅಧಿಕಾರಿಗಳನ್ನು ಸರ್ಕಾರ ನೇಮಕ ಮಾಡಲಿದೆ. ಪಾರದರ್ಶಕತೆ, ಹೊಣೆಗಾರಿಕೆ ಹೆಚ್ಚಿಸಲು ಹಾಗೂ ಸಾರ್ವಜನಿಕರ ಹಣ ಪೋಲಾಗುವುದನ್ನು ತಡೆಗಟ್ಟುವ ಉದ್ದೇಶ ಹೊಂದಲಾಗಿದೆ. ಇಲ್ಲಿ ಯಾರ ವೈಯಕ್ತಿಕ ಹಕ್ಕುಗಳನ್ನು ಮೊಟಕುಗೊಳಿಸಲು ಅಥವಾ ಸಹಕಾರ ಸಂಘಗಳ ಮೇಲೆ ಅಧಿಕಾರ ಚಲಾಯಿಸುವ ಉದ್ದೇಶ ಸರ್ಕಾರಕ್ಕೆ ಇಲ್ಲ” ಎಂದರು.
ಅರ್ಜಿದಾರರ ಪರ ವಕೀಲರು “ಸಹಕಾರ ಸಂಘಗಳ ಮೇಲೆ ಹತೋಟಿ ಸಾಧಿಸಲು ಸರ್ಕಾರ ಪ್ರಯತ್ನಿಸುತ್ತಿದೆ. ನಬಾರ್ಡ್ ಬಿಡುಗಡೆ ಮಾಡುವ ಹಣವನ್ನು ಫಲಾನುಭವಿಗಳಿಗೆ ತಲುಪಿಸುವ ಕೆಲಸವನ್ನು ನೂರಾರು ಸಹಕಾರ ಬ್ಯಾಂಕ್‌ಗಳು ಮಾಡುತ್ತಿವೆ. ಇಲ್ಲಿಗೆ ಸಿಬ್ಬಂದಿ ನೇಮಕ ಮಾಡಿ, ನಿಯಂತ್ರಣ ಸಾಧಿಸಲು ಪ್ರಯತ್ನಿಸಲಾಗುತ್ತಿದೆ. ಇದು ಸಹಕಾರ ಸಂಘಗಳ ಸದಸ್ಯರ ವೈಯಕ್ತಿಕ ಹಕ್ಕಿನ ಉಲ್ಲಂಘನೆಯಾಗಿದೆ. ಯಾವುದೇ ಕಾರಣಕ್ಕೂ ಏಕಸದಸ್ಯ ಪೀಠದ ಆದೇಶಕ್ಕೆ ಮಧ್ಯಂತರ ತಡೆ ನೀಡಬಾರದು” ಎಂದರು.
ಡಿಸಿಸಿ ಬ್ಯಾಂಕ್‌ಗಳ ಪರವಾಗಿ ವಾದಿಸಿದ ಹಿರಿಯ ವಕೀಲರಾದ ಬಿ ವಿ ಆಚಾರ್ಯ, ಪ್ರಭುಲಿಂಗ ನಾವದಗಿ ಮತ್ತು ಡಿ ಆರ್ ರವಿಶಂಕರ್ ಅವರು “ಸಿಇಒ ಮಟ್ಟದಲ್ಲಿ ಅಧಿಕಾರಿಗಳನ್ನು ನೇಮಿಸುವ ರಾಜ್ಯ ಸರ್ಕಾರದ ಕ್ರಮ ಸರಿಯಾಗಿದೆ” ಎಂದರು.
ಕರ್ನಾಟಕ ಸಹಕಾರ ಸಂಘಗಳ (ತಿದ್ದುಪಡಿ) ಕಾಯಿದೆ 2023ರ ಸೆಕ್ಷನ್ 128-ಎ ಇದರ ತಿದ್ದುಪಡಿ ಪ್ರಶ್ನಿಸಿ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲ್ಲೂಕಿನ ಉಪ್ಪಿನಂಗಡಿ ಸಹಕಾರ ಕೃಷಿ ಸಂಸ್ಥೆಯ ಹಾಲಿ ಅಧ್ಯಕ್ಷ ಕೆ ವಿ ಪ್ರಸಾದ್ ಹಾಗೂ ಇತರರು ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಅನಂತ್ ರಾಮನಾಥ ಹೆಗಡೆ ಅವರ ಏಕಸದಸ್ಯ ಪೀಠ ಸೆಕ್ಷನ್ 128-ಎ ಸಂವಿಧಾನಬಾಹಿರ ಎಂದು 2024ರ ಆಗಸ್ಟ್ 8ರಂದು ಆದೇಶಿಸಿತ್ತು. ಅದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿದೆ.