ಲಂಚ ಪ್ರಕರಣದಲ್ಲಿ ಬಂಧಿತರಾಗಿ ಅಮಾನತುಗೊಂಡಿರುವ ಬೆಂಗಳೂರು ನಗರದ ಹಿಂದಿನ ಜಿಲ್ಲಾಧಿಕಾರಿ ಜೆ ಮಂಜುನಾಥ್ ಅವರ ಜಾಮೀನು ಮನವಿಗೆ ಆಕ್ಷೇಪಣೆ ಸಲ್ಲಿಸಲು ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ಕರ್ನಾಟಕ ಹೈಕೋರ್ಟ್ ಗುರುವಾರ ನಿರ್ದೇಶಿಸಿದ್ದು, ಸೋಮವಾರಕ್ಕೆ (ಆಗಸ್ಟ್ 1) ವಿಚಾರಣೆ ಮುಂದೂಡಿತು.
ಮಂಜುನಾಥ್ ಅವರ ಜಾಮೀನು ಮನವಿಯ ವಿಚಾರಣೆಯನ್ನು ನ್ಯಾಯಮೂರ್ತಿ ಕೆ ನಟರಾಜನ್ ಅವರ ನೇತೃತ್ವದ ಏಕಸದಸ್ಯ ಪೀಠವು ನಡೆಸಿತು.
ಮಂಜುನಾಥ್ ಅವರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಚಂದ್ರಮೌಳಿ ಅವರು ಪ್ರಕರಣದ ಕುರಿತು ನ್ಯಾಯಾಲಯಕ್ಕೆ ವಿವರಿಸಿದರು. ಇದನ್ನು ಆಲಿಸಿದ ಪೀಠವು ಸೋಮವಾರ ವಿಚಾರಣೆ ನಡೆಸೋಣ. ಅಷ್ಟರೊಳಗೆ ಎಸಿಬಿ ಆಕ್ಷೇಪಣೆ ಸಲ್ಲಿಸಬೇಕು ಎಂದು ಹೇಳಿ, ವಿಚಾರಣೆ ಮುಂದೂಡಿತು.
ಆನೇಕಲ್ ತಾಲ್ಲೂಕಿನ ಕೂಡ್ಲು ಗ್ರಾಮದ 38 ಗುಂಟೆ ಜಮೀನು ಒಡೆತನಕ್ಕೆ ಸಂಬಂಧಿಸಿದಂತೆ ಅನುಕೂಲಕರ ಆದೇಶ ಮಾಡಲು ಅಜಂ ಪಾಷಾ ಎಂಬುವರಿಂದ 5 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಉಪ ತಹಶೀಲ್ದಾರ್ ಆಗಿದ್ದ ಮಹೇಶ್ ಮತ್ತು ನ್ಯಾಯಾಲಯ ವಿಭಾಗದ ಸಹಾಯಕ ಚೇತನ್ ಕುಮಾರ್ ಅಲಿಯಾಸ್ ಚಂದ್ರ ಅವರನ್ನು ಮೇ 21ರಂದು ಎಸಿಬಿ ಬಂಧಿಸಿತ್ತು. ಈ ಪ್ರಕರಣದಲ್ಲಿ ಮಂಜುನಾಥ್ ಮೂರನೇ ಆರೋಪಿಯಾಗಿದ್ದಾರೆ.
ನಿಗದಿತ 60 ದಿನಗಳ ಒಳಗೆ ಎಸಿಬಿಯು ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸದಿದ್ದರಿಂದ ಈಚೆಗೆ ಮಹೇಶ್ ಅವರಿಗೆ ಜಾಮೀನು ಮಂಜೂರಾಗಿದ್ದನ್ನು ಇಲ್ಲಿ ನೆನೆಯಬಹುದಾಗಿದೆ.