Darshan and Karnataka HC 
ಸುದ್ದಿಗಳು

ದರ್ಶನ್‌ ವೈದ್ಯಕೀಯ ವರದಿ ಸಲ್ಲಿಸಲು ಜೈಲು ಅಧಿಕಾರಿಗೆ ನಿರ್ದೇಶಿಸಿದ ಹೈಕೋರ್ಟ್‌; ಜಾಮೀನು ಅರ್ಜಿ ಅ.28ಕ್ಕೆ ಮುಂದೂಡಿಕೆ

ದರ್ಶನ್‌ ಬೆನ್ನುಹುರಿ ನೋವಿನಿಂದ ಬಳಲುತ್ತಿದ್ದಾರೆ. ವಿಮ್ಸ್‌ನಲ್ಲಿ ಸೋಮವಾರ ಎಂಆರ್‌ಐ ಸ್ಕ್ಯಾನ್‌ ಮಾಡಿಸಲಾಗಿದೆ. ವೈದ್ಯರು ಶಸ್ತ್ರಚಿಕಿತ್ಸೆ ಅಗತ್ಯ ಎಂದಿದ್ದಾರೆ. ಹೀಗಾಗಿ, ವೈದ್ಯಕೀಯ ಕಾರಣಕ್ಕೆ ದರ್ಶನ್‌ಗೆ ಜಾಮೀನು ನೀಡಬೇಕು ಎಂದು ಕೋರಿಕೆ.

Bar & Bench

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿನ ಎರಡನೇ ಆರೋಪಿಯಾಗಿರುವ ನಟ ದರ್ಶನ್‌ ಅವರ ಆರೋಗ್ಯಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ವರದಿ ಸಲ್ಲಿಸುವಂತೆ ಬಳ್ಳಾರಿ ಜೈಲು ಅಧಿಕಾರಿಗೆ ಕರ್ನಾಟಕ ಹೈಕೋರ್ಟ್‌ ಮಂಗಳವಾರ ನಿರ್ದೇಶಿಸಿದೆ.

ದರ್ಶನ್‌ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಸ್‌ ವಿಶ್ವಜಿತ್‌ ಶೆಟ್ಟಿ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ದರ್ಶನ್‌ ಪರವಾಗಿ ಹಾಜರಾಗಿದ್ದ ಹಿರಿಯ ವಕೀಲ ಸಿ ವಿ ನಾಗೇಶ್‌ ಅವರು “ದರ್ಶನ್‌ ಅವರು ಬೆನ್ನುಹುರಿ ನೋವಿನಿಂದ ಬಳಲುತ್ತಿದ್ದಾರೆ. ವಿಜಯನಗರ ವೈದ್ಯಕೀಯ ಸಂಸ್ಥೆಯಲ್ಲಿ (ವಿಮ್ಸ್‌) ಸೋಮವಾರ ಎಂಆರ್‌ಐ ಸ್ಕ್ಯಾನ್‌ ಮಾಡಿಸಲಾಗಿದೆ. ವೈದ್ಯರು ಶಸ್ತ್ರಚಿಕಿತ್ಸೆ ಅಗತ್ಯ ಎಂದು ಹೇಳಿದ್ದಾರೆ. ಹೀಗಾಗಿ, ವೈದ್ಯಕೀಯ ಕಾರಣಕ್ಕೆ ದರ್ಶನ್‌ಗೆ ಜಾಮೀನು ನೀಡಬೇಕು” ಎಂದು ಕೋರಿದರು.

ಇದನ್ನು ಆಲಿಸಿದ ಪೀಠವು ಬಳ್ಳಾರಿಯ ಜೈಲು ಅಧಿಕಾರಿಗೆ ದರ್ಶನ್‌ ಆರೋಗ್ಯಕ್ಕೆ ಸಂಬಂಧಿಸಿದ ವೈದ್ಯಕೀಯ ವರದಿ ಸಲ್ಲಿಸಬೇಕು. ಇದರೊಳಗೆ ಪ್ರಾಸಿಕ್ಯೂಷನ್‌ ಆಕ್ಷೇಪಣೆ ಸಲ್ಲಿಸಬೇಕು ಎಂದು ಅರ್ಜಿ ವಿಚಾರಣೆಯನ್ನು ಅಕ್ಟೋಬರ್‌ 28ಕ್ಕೆ ಮುಂದೂಡಿತು.