“ಪರಿಶಿಷ್ಟ ಜಾತಿಗೆ ಮೀಸಲಾದ ಮುಳಬಾಗಿಲು ಕ್ಷೇತ್ರದಲ್ಲಿ 2013ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿ ಆಯ್ಕೆಯಾಗಿದ್ದಾರೆ” ಎಂದು ಆರೋಪಿಸಿ ಅಂದಿನ ಶಾಸಕ ಜಿ ಮಂಜುನಾಥ್ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ.
ತನ್ನ ವಿರುದ್ಧದ ಎಫ್ಐಆರ್ ರದ್ದುಗೊಳಿಸಬೇಕು ಎಂದು ಕೋರಿ ಜಿ ಮಂಜುನಾಥ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಗುರುವಾರ ಪ್ರಕಟಿಸಿತು.
ಜಾತಿ ಸಿಂಧುತ್ವಕ್ಕೆ ಸಂಬಂಧಿಸಿದಂತೆ ಕೋಲಾರ ಜಿಲ್ಲಾಧಿಕಾರಿ ನೇತೃತ್ವದ ಜಾತಿ ಪರಿಶೀಲನಾ ಸಮಿತಿ ಕೈಗೊಂಡಿದ್ದ ನಿರ್ಣಯವನ್ನು ಪ್ರಶ್ನಿಸಿ ಸದ್ಯ ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕರೂ ಆದ ಕಾಂಗ್ರೆಸ್ ಪಕ್ಷದ ಜಿ ಮಂಜುನಾಥ್ (ಕೊತ್ತೂರು ಮಂಜುನಾಥ್) ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಇತ್ತೀಚೆಗಷ್ಟೇ ತಿರಸ್ಕರಿಸಿತ್ತು.