ಎರಡು ವರ್ಷಗಳಿಗೂ ಹೆಚ್ಚು ಕಾಲ ಪರವಾನಗಿ ನವೀಕರಿಸದೆ ರಿವಾಲ್ವರ್ ಇರಿಸಿಕೊಂಡಿದ್ದ ಪ್ರಕರಣಕ್ಕೆ ಸಂಬಂದಿಸಿದಂತೆ ಬಳ್ಳಾರಿಯ ಶಾಸಕ ಸೋಮಶೇಖರ ರೆಡ್ಡಿ ವಿರುದ್ಧ ಶಸ್ತ್ರಾಸ್ತ್ರ ಕಾಯಿದೆ ಅಡಿ ದಾಖಲಾಗಿರುವ ಪ್ರಕರಣ ರದ್ದುಪಡಿಸಲು ಕರ್ನಾಟಕ ಹೈಕೋರ್ಟ್ ಸೋಮವಾರ ನಿರಾಕರಿಸಿದೆ.
ತಮ್ಮ ವಿರುದ್ಧ ಸುಳ್ಳು ಆರೋಪ ಮಾಡಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆ ರದ್ದುಪಡಿಸುವಂತೆ ಕೋರಿ ಸೋಮಶೇಖರ್ ರೆಡ್ಡಿ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ನೇತೃತ್ವದ ಏಕ ಸದಸ್ಯ ಪೀಠ ನಡೆಸಿತು.
“ಈಗಾಗಲೇ ಪ್ರಕರಣದ ತನಿಖೆ ಪೂರ್ಣಗೊಂಡು ವಿಚಾರಣಾ ನ್ಯಾಯಾಲಯಕ್ಕೆ ತನಿಖಾಧಿಕಾರಿಗಳು ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ವಿಚಾರಣಾ ನ್ಯಾಯಾಲಯ ಪ್ರಕರಣ ವಿಚಾರಣೆ ನಡೆಸುತ್ತಿದೆ. ಈ ಹಂತದಲ್ಲಿ ಮಧ್ಯಪ್ರವೇಶ ಮಾಡಲು ಸಾಧ್ಯವಿಲ್ಲ” ಎಂದಿರುವ ಹೈಕೋರ್ಟ್ ಸೋಮಶೇಖರ್ ರೆಡ್ಡಿ ಅವರ ಕೋರಿಕೆಯನ್ನು ತಿರಸ್ಕರಿಸಿದೆ.
ಬಳ್ಳಾರಿಯ ಶಾಸಕ ಜಿ ಸೋಮಶೇಖರ ರೆಡ್ಡಿ ಅವರ ರಿವಾಲ್ವರ್ ಪರವಾನಗಿ ಅವಧಿ 2009ರ ಡಿಸೆಂಬರ್ 31ಕ್ಕೆ ಮುಗಿದಿತ್ತು. ಆದರೆ, ರಿವಾಲ್ವರ್ ಅನ್ನು 2011ರ ನವೆಂಬರ್ 10ರಂದು ಸರ್ಕಾರಕ್ಕೆ ಹಿಂದಿರುಗಿಸಿ, ಪರವಾನಗಿ ನವೀಕರಿಸುವಂತೆ ಕೋರಿ ನವೆಂಬರ್ 16ರಂದು ಅರ್ಜಿ ಸಲ್ಲಿಸಿದ್ದರು. ಅದರಂತೆ ಎರಡು ವರ್ಷಕ್ಕೂ ಅಧಿಕ ಕಾಲ ಪರವಾನಗಿ ನವೀಕರಿಸದೆ ಅಕ್ರಮವಾಗಿ ರಿವಾಲ್ವರ್ ಇರಿಸಿಕೊಂಡಿದ್ದ ಆರೋಪ ಮಾಡಿ ಅಂದಿನ ಜಿಲ್ಲಾಧಿಕಾರಿ ಅಮ್ಲಾನ್ ಆದಿತ್ಯ ಬಿಸ್ವಾಸ್ ಬಳ್ಳಾರಿ ಪೊಲೀಸ್ ವರಿಷ್ಠಾಧಿಕಾರಿಗೆ 2012ರ ಫೆಬ್ರವರಿ 5 ಮತ್ತು ಮಾರ್ಚ್ 3ರಂದು ಪತ್ರ ಬರೆದಿದ್ದರು. ಆದರೆ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ 2013ರ ಮಾರ್ಚ್ 14ರಂದು ಮತ್ತೊಂದು ಪತ್ರ ಬರೆಯಲಾಗಿತ್ತು.
ಆ ಪತ್ರವನ್ನು ಬಳ್ಳಾರಿಯ ಗ್ರಾಮಾಂತರ ಪೊಲೀಸ್ ಠಾಣೆಗೆ ರವಾನಿಸಲಾಗಿತ್ತು. ಅದನ್ನು ಆಧರಿಸಿ ಪೊಲೀಸರು ಶಾಸಕ ಸೋಮಶೇಖರ ರೆಡ್ಡಿ ವಿರುದ್ಧ ಶಸ್ತ್ರಾಸ್ತ್ರ ಕಾಯಿದೆ ಸೆಕ್ಷನ್ 21(1)(ಬಿ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿ ಬ್ರೂಸ್ ಪೇಟೆ ಠಾಣಾ ಪೊಲೀಸರಿಗೆ ವರ್ಗಾವಣೆ ಮಾಡಿದ್ದರು.
ಪ್ರಕರಣದ ತನಿಖೆ ನಡೆಸಿದ್ದ ಅಲ್ಲಿನ ಪೊಲೀಸರು ಅನಧಿಕೃತವಾಗಿ ಶಸ್ತ್ರಾಸ್ತ್ರ ಹೊಂದಿದ್ದ ಆರೋಪದ ಹಿನ್ನೆಲೆಯಲ್ಲಿ ಸೋಮಶೇಖರ ರೆಡ್ಡಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣ ಸದ್ಯ ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿದೆ.