Chief Justice Vibhu Bhakhru & Justice CM Poonacha 
ಸುದ್ದಿಗಳು

ಮಕ್ಕಳ ಭಿಕ್ಷಾಟನೆ: ತಡೆ ಹಾಗೂ ಪುನರ್ವಸತಿಗೆ ಸಮಗ್ರ ಕ್ರಿಯಾ ಯೋಜನೆ, ನೋಡಲ್ ಅಧಿಕಾರಿ ನೇಮಿಸಲು ಹೈಕೋರ್ಟ್‌ ನಿರ್ದೇಶನ

ಭಿಕ್ಷುಕರ ಸೆಸ್ ಸಂಗ್ರಹಣೆ ಸಂಬಂಧ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಲೆಕ್ಕಾಧಿಕಾರಿ ಸಲ್ಲಿಸಿರುವ ಪ್ರಮಾಣ ಪತ್ರವನ್ನು ಹೆಚ್ಚುವರಿ ಅಡ್ವೋಕೇಟ್ ಜನರಲ್ ಪ್ರತಿಮಾ ಹೊನ್ನಾಪುರ ನ್ಯಾಯಾಲಯಕ್ಕೆ ಸಲ್ಲಿಸಿದರು.

Bar & Bench

ಮಕ್ಕಳ ಭಿಕ್ಷಾಟನೆ ತಡೆದು ಅವರ ಪುನರ್ವಸತಿಗೆ ಸಮಗ್ರ ಕ್ರಿಯಾ ಯೋಜನೆ ರೂಪಿಸಲು ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಲು ನೋಡಲ್ ಅಧಿಕಾರಿಯೊಬ್ಬರನ್ನು ನೇಮಕ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಗುರುವಾರ ನಿರ್ದೇಶನ ನೀಡಿದೆ.

ಭಿಕ್ಷಾಟನೆಯಲ್ಲಿ ತೊಡಗಿರುವ ಮಕ್ಕಳನ್ನು ಗುರುತಿಸಿ, ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಲೆಟ್ಜ್‌ ಕಿಟ್‌ ಫೌಂಡೇಷನ್‌ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ಮತ್ತು ನ್ಯಾಯಮೂರ್ತಿ ಸಿ ಎಂ ಪೂಣಚ್ಚ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಈ ವೇಳೆ ಭಿಕ್ಷುಕರ ಸೆಸ್ ಸಂಗ್ರಹಣೆ ಸಂಬಂಧ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಲೆಕ್ಕಾಧಿಕಾರಿ ಸಲ್ಲಿಸಿರುವ ಪ್ರಮಾಣ ಪತ್ರವನ್ನು ಹೆಚ್ಚುವರಿ ಅಡ್ವೋಕೇಟ್ ಜನರಲ್ ಪ್ರತಿಮಾ ಹೊನ್ನಾಪುರ ನ್ಯಾಯಾಲಯಕ್ಕೆ ಸಲ್ಲಿಸಿದರು.

ಅದರಂತೆ ಜಿಬಿಎ ವ್ಯಾಪ್ತಿಯಲ್ಲಿ 20024-25ರಲ್ಲಿ 86.26 ಕೋಟಿ ರೂಪಾಯಿ ಭಿಕ್ಷುಕರ ಸೆಸ್ ಸಂಗ್ರಹ ಮಾಡಲಾಗಿದ್ದು, ಅದರಲ್ಲಿ 10.32 ಕೋಟಿ ರೂಪಾಯಿಗಳನ್ನು ಕೇಂದ್ರ ಪರಿಹಾರ ಸಮಿತಿಗೆ (ಸಿಆರ್‌ಸಿ) ಪಾವತಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ಇಲ್ಲಿವರೆಗೆ 73.12 ಕೋಟಿ ರೂಪಾಯಿ ಸಂಗ್ರಹಿಸಲಾಗಿದೆ. ಈಗ ಜಿಬಿಎ ವ್ಯಾಪ್ತಿಯಲ್ಲಿ 5 ಹೊಸ ಪಾಲಿಕೆಗಳಾಗಿದ್ದು, ಕಳೆದ ವರ್ಷದ ಬಾಕಿ 75 ಕೋಟಿ ರೂಪಾಯಿ ಹಾಗೂ ಈ ವರ್ಷದ ಭಿಕ್ಷುಕರ ಸೆಸ್ ಪಾಲನ್ನು 2026ರ ಮಾರ್ಚ್ 31ರೊಳಗೆ ಕೇಂದ್ರ ಪರಿಹಾರ ಸಮಿತಿಗೆ ಪಾವತಿಸುವಂತೆ ಆಯಾ ಪಾಲಿಕೆಗೆಗಳ ಆಯುಕ್ತರಿಗೆ ನಿರ್ದೇಶನ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಕಾನೂನು ಸೇವಾ ಪ್ರಾಧಿಕಾರದ ಪರ ವಕೀಲೆ ಮೈತ್ರೇಯಿ ಕೃಷ್ಣನ್ ವಾದ ಮಂಡಿಸಿ, ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಿಂದ ಸಂಗ್ರಹಿಸಲಾದ 40.88 ಕೋಟಿ ರೂಪಾಯಿ ಭಿಕ್ಷುಕರ ಸೆಸ್ ಪೌರಾಡಳಿತ ನಿರ್ದೇಶನಾಲಯದಿಂದ ಬರುವುದು ಬಾಕಿ ಇದೆ. ಅದೇ ರೀತಿ ಪಂಚಾಯಿತಿಗಳಲ್ಲಿ ಸಂಗ್ರಹಿಸಲಾದ ಸೆಸ್ ಬಗ್ಗೆ ಗ್ರಾಮೀಣಾಭಿವೃದ್ದಿ ಇಲಾಖೆಯಿಂದ ಮಾಹಿತಿ ಬರಬೇಕಿದೆ. ಪ್ರಾಧಿಕಾರ ನಡೆಸಿದ ಸಮೀಕ್ಷೆಯಲ್ಲಿ ಭಿಕ್ಷಾಟನೆಯಲ್ಲಿ ತೊಡಗಿದ್ದ 720 ಮಕ್ಕಳನ್ನು ಗುರುತಿಸಲಾಗಿದೆ. ಪುನರ್ವಸತಿಗೆ ಕೆಲವು ಶಿಫಾರಸ್ಸುಗಳನ್ನು ಸೂಚಿಸಲಾಗಿದೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು.

ವಾದ-ಪ್ರತಿವಾದ ಆಲಿಸಿದ ಪೀಠವು ಜಿಬಿಎ ಸೇರಿದಂತೆ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳು ಮತ್ತು ಪಂಚಾಯಿತಿಗಳಲ್ಲಿ ಸಂಗ್ರಹಿಸಲಾಗಿರುವ ಒಟ್ಟು ಭಿಕ್ಷುಕರ ಸೆಸ್, ಅದರಲ್ಲಿ ಕೇಂದ್ರ ಪರಿಹಾರ ಸಮಿತಿಗೆ ಪಾವತಿಸಲಾದ ಮೊತ್ತ, ಬಾಕಿ ಉಳಿದ ಮೊತ್ತದ ಬಗ್ಗೆ ವಸ್ತುಸ್ಥಿತಿ ವರದಿ ನೀಡುವಂತೆ ರಾಜ್ಯ ಸರ್ಕಾರ ಹಾಗೂ ಜಿಬಿಎಗೆ ನಿರ್ದೇಶನ ನೀಡಿತು. ಅದೇ ರೀತಿ ಮಕ್ಕಳ ಭಿಕ್ಷಾಟನೆ ನಿರ್ಮೂಲನೆ ಮತ್ತು ಅವರ ಪುನರ್ವಸತಿಗೆ 6 ವಾರಗಳಲ್ಲಿ ಸಮಗ್ರ ಕ್ರಿಯಾ ಯೋಜನೆ ರೂಪಿಸಬೇಕು. ಕ್ರಿಯಾ ಯೋಜನೆ ರೂಪಿಸಲು ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಲು ನೋಡಲ್ ಅಧಿಕಾರಿಯೊಬ್ಬರನ್ನು ನೇಮಕ ಮಾಡುವಂತೆ ಸರ್ಕಾರಕ್ಕೆ ಸೂಚಿಸಿ ವಿಚಾರಣೆಯನ್ನು ಏಪ್ರಿಲ್ 1ಕ್ಕೆ ಮುಂದೂಡಿತು. ಅರ್ಜಿದಾರರ ಪರ ಹಿರಿಯ ವಕೀಲ ಪುತ್ತಿಗೆ ರಮೇಶ್ ವಾದಿಸಿದರು.