Karnataka High Court 
ಸುದ್ದಿಗಳು

ಶಾಸಕರು, ಸಂಸದರ ವಿರುದ್ಧದ ಪ್ರಕರಣಗಳ ಹಿಂಪಡೆತ: ಅಧಿಕೃತ ಆದೇಶಗಳ ಸಲ್ಲಿಕೆಗೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್‌

ಸಂಬಂಧಪಟ್ಟ ಹೈಕೋರ್ಟ್‌ಗಳು ಅನುಮತಿಸದ ಹೊರತು ಶಾಸಕರು ಮತ್ತು ಸಂಸದರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯುವಂತಿಲ್ಲ ಎಂದು ಮಂಗಳವಾರ ಸುಪ್ರೀಂ ಕೋರ್ಟ್‌ ಆದೇಶಿಸಿದ ಬೆನ್ನಿಗೇ ರಾಜ್ಯ ಹೈಕೋರ್ಟ್‌ನಿಂದ ನಿರ್ದೇಶನ.

Bar & Bench

ಕಳೆದ ವರ್ಷದ ಸೆಪ್ಟೆಂಬರ್‌ 16ರಿಂದ ಈಚೆಗೆ ಶಾಸಕರು ಮತ್ತು ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳನ್ನು ಹಿಂಪಡೆಯುವ ಸಂಬಂಧ ಹೊರಡಿಸಿರುವ ಆದೇಶಗಳನ್ನು ನ್ಯಾಯಾಲಯಕ್ಕೆ ಅಧಿಕೃತವಾಗಿ ಸಲ್ಲಿಸುವಂತೆ ಬುಧವಾರ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಆದೇಶ ಮಾಡಿದೆ. ಸಂಬಂಧಪಟ್ಟ ಹೈಕೋರ್ಟ್‌ಗಳು ಅನುಮತಿಸದ ಹೊರತು ಶಾಸಕರು ಮತ್ತು ಸಂಸದರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯುವಂತಿಲ್ಲ ಎಂದು ಮಂಗಳವಾರ ಸುಪ್ರೀಂ ಕೋರ್ಟ್‌ ಆದೇಶಿಸಿದ ಬೆನ್ನಲ್ಲೇ ಹೈಕೋರ್ಟ್‌ ಮೇಲಿನ ಆದೇಶ ಮಾಡಿದೆ.

ಶಾಸಕರು ಮತ್ತು ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳನ್ನು ತುರ್ತಾಗಿ ವಿಚಾರಣೆ ನಡೆಸುವುದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಆದೇಶದ ಅನ್ವಯ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಮನವಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಶ್ರೀನಿವಾಸ್‌ ಓಕಾ ಮತ್ತು ನ್ಯಾಯಮೂರ್ತಿ ಎನ್‌ ಎಸ್‌ ಸಂಜಯ್‌ ಗೌಡ ಅವರಿದ್ದ ವಿಭಾಗೀಯ ಪೀಠ ನಡೆಸಿತು.

“ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್‌ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಶಾಸಕರು ಮತ್ತು ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳನ್ನು ಹಿಂಪಡೆಯುವುದಕ್ಕೆ ಸಂಬಂಧಿಸಿದಂತೆ ಕಳೆದ ವರ್ಷದ ಸೆಪ್ಟೆಂಬರ್‌ 16ರಿಂದ ಈಚೆಗಿನ ಪ್ರಕರಣಗಳಲ್ಲಿ ರಾಜ್ಯ ಸರ್ಕಾರದ ನಿಲುವಿನ ಕಾನೂನು ಸಿಂಧುತ್ವವನ್ನು ಪರಿಗಣಿಸಲಾಗುವುದು. ಪ್ರಕರಣಗಳನ್ನು ಹಿಂಪಡೆಯುವಾಗ ಸುಪ್ರೀಂ ಕೋರ್ಟ್‌ ನಿರ್ದೇಶನಗಳನ್ನು ಪಾಲಿಸಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಶಾಸಕರು ಮತ್ತು ಸಂಸದರ ವಿರುದ್ಧದ ಪ್ರಕರಣಗಳ ಕುರಿತಾದ ಮಾಹಿತಿಯನ್ನು ಅಧಿಕೃತವಾಗಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಲಾಗಿದೆ” ಎಂದು ಪೀಠ ಹೇಳಿದೆ.

ಚುನಾಯಿತ ಜನಪ್ರತಿನಿಧಿಗಳ ವಿರುದ್ಧ ಇರುವ ಪ್ರಕರಣಗಳು ಸೇರಿದಂತೆ 61 ಪ್ರಕರಣಗಳನ್ನು ಹಿಂಪಡೆಯುವ ಸಂಬಂಧ 2020ರ ಆಗಸ್ಟ್‌ 31ರಂದು ಸರ್ಕಾರ ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಮನವಿ ಸಲ್ಲಿಸಲಾಗಿದೆ. ಸುಪ್ರೀಂ ಕೋರ್ಟ್‌ ಆದೇಶದ ಹಿನ್ನೆಲೆಯಲ್ಲಿ ಸದರಿ ಅರ್ಜಿಯನ್ನು ವಿಲೇವಾರಿ ಮಾಡುವಂತೆ ಅರ್ಜಿದಾರ ಸಂಸ್ಥೆ ಪೀಪಲ್‌ ಯೂನಿಯನ್‌ ಫಾರ್‌ ಸಿವಿಲ್‌ ಲಿಬರ್ಟೀಸ್‌ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದರು.

ಸುಪ್ರೀಂ ಕೋರ್ಟ್‌ ಆದೇಶದ ಪ್ರತಿಯನ್ನು ಅಧಿಕೃತವಾಗಿ ಸಲ್ಲಿಸುವಂತೆ ಪೀಠ ಆದೇಶಿಸಿದ್ದು, ಪ್ರಕರಣಗಳನ್ನು ಹಿಂಪಡೆಯುವ ಕುರಿತಾದ ವಿವರವನ್ನು ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ. ಕಳೆದ ವರ್ಷದ ಸೆಪ್ಟೆಂಬರ್‌ 26ರಂದು ಹೈಕೋರ್ಟ್‌ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಮನವಿ ದಾಖಲಿಸಿಕೊಂಡಿದ್ದು, ಶಾಸಕರು ಮತ್ತು ಸಂಸದರ ವಿರುದ್ಧ ಬಾಕಿ ಇರುವ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆ ನಡೆಸಲು ವಿಶೇಷ ಪೀಠವನ್ನು ರಚಿಸಿತ್ತು.