ಸುದ್ದಿಗಳು

[ಕಾಲ್ತುಳಿತ] ಮುಚ್ಚಿದ ಲಕೋಟೆಯ ವರದಿಯನ್ನು 4 ದಿನಗಳಲ್ಲಿ ಬಹಿರಂಗಪಡಿಸಿ: ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್‌ ಪಾರ್ಕ್‌ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗಳ ಸಂಬಂಧದ ಅಂತಿಮ ವರದಿಯನ್ನು ನ್ಯಾಯಾಲಯದ ಅನುಮತಿ ಇಲ್ಲದೇ ಸಕ್ಷಮ ನ್ಯಾಯಾಲಯಕ್ಕೆ ಸಲ್ಲಿಸುವಂತಿಲ್ಲ ಎಂದು ಆದೇಶಿಸಿರುವ ಏಕಸದಸ್ಯ ಪೀಠ.

Bar & Bench

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಮುಂಭಾಗದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿರುವ ಸ್ಥಿತಿಗತಿ ವರದಿಯನ್ನು ನಾಲ್ಕು ದಿನಗಳಲ್ಲಿ ಬಹಿರಂಗಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಮಂಗಳವಾರ ಕರ್ನಾಟಕ ಹೈಕೋರ್ಟ್‌ ನಿರ್ದೇಶಿಸಿದೆ.

ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ ಕಾಮೇಶ್ವರ ರಾವ್‌ ಮತ್ತು ನ್ಯಾಯಮೂರ್ತಿ ಸಿ ಎಂ ಜೋಶಿ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಕಳೆದ ವಿಚಾರಣೆಯಲ್ಲಿ ವಾದ-ಪ್ರತಿವಾದ ಆಲಿಸಿದ್ದ ಪೀಠವು “ನಾಲ್ಕು ದಿನಗಳಲ್ಲಿ ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಸ್ಥಿತಿಗತಿ ವರದಿಯನ್ನು ಸಾರ್ವಜನಿಕಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿ, ವಿಚಾರಣೆಯನ್ನು ಜುಲೈ 16ಕ್ಕೆ ಮುಂದೂಡಿತು.

ಇದಕ್ಕೂ ಮುನ್ನ, ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ್‌ ಶೆಟ್ಟಿ ಅವರು “ಮುಚ್ಚಿದ ಲಕೋಟೆಯ ವರದಿ ಬಿಡುಗಡೆಗೆ ಸೀಮಿತವಾಗಿ ನ್ಯಾಯಾಲಯಕ್ಕೆ ಸಹಕರಿಸಲು ಅಮಿಕಸ್‌ ಕ್ಯೂರಿಯನ್ನು ನೇಮಕ ಮಾಡಲಾಗಿತ್ತು. ಪೂರ್ಣ ಪ್ರಕರಣಕ್ಕೆ ಅವರನ್ನು ಅಮಿಕಸ್‌ ಕ್ಯೂರಿಯನ್ನಾಗಿ ಮುಂದುವರಿಸಬೇಕು” ಎಂದರು. ಇದನ್ನು ಸಮ್ಮತಿಸಿದ ಪೀಠವು ವಿಚಾರಣೆಯನ್ನು ಮುಂದೂಡಿತು.

ಜುಲೈ 1ರಂದು ಸ್ಥಿತಿಗತಿ ವರದಿಯನ್ನು ಬಹಿರಂಗಗೊಳಿಸಲು 10 ದಿನ ಕಾಲಾವಕಾಶ ನೀಡಬೇಕು ಎಂದು ರಾಜ್ಯ ಸರ್ಕಾರ ವಾದಿಸಿತ್ತು. ಇದನ್ನು ಆಲಿಸಿ ವಿಚಾರಣೆಯನ್ನು ನ್ಯಾಯಾಲಯವು ಇಂದಿಗೆ ಮುಂದೂಡಿತ್ತು. ಈಗ ನಾಲ್ಕು ದಿನಗಳಲ್ಲಿ ವರದಿ ಬಿಡುಗಡೆ ಮಾಡುವಂತೆ ನಿರ್ದೇಶಿಸಿದೆ.

ಸಕ್ಷಮ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸುವಂತಿಲ್ಲ

ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್‌ ಪಾರ್ಕ್‌ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗಳ ಸಂಬಂಧದ ಅಂತಿಮ ವರದಿಯನ್ನು ತನ್ನ ಅನುಮತಿ ಇಲ್ಲದೇ ಸಕ್ಷಮ ನ್ಯಾಯಾಲಯಕ್ಕೆ ಸಲ್ಲಿಸುವಂತಿಲ್ಲ ಹೈಕೋರ್ಟ್‌ ಆದೇಶಿಸಿದೆ.

ಪ್ರಕರಣ ರದ್ದು ಕೋರಿ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ), ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ಮತ್ತು ಡಿಎನ್‌ಎ ಎಂಟರ್‌ಟೈನ್‌ಮೆಂಟ್‌ ನೆಟ್‌ವರ್ಕ್ಸ್‌ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್‌ ಆರ್‌ ಕೃಷ್ಣ ಕುಮಾರ್‌ ಅವರ ಏಕಸದಸ್ಯ ಪೀಠವು ಈ ಆದೇಶ ಮಾಡಿದೆ.

Justice S R Krishna Kumar

ಅರ್ಜಿದಾರರ ಪರವಾಗಿ ವಾದಿಸಿದ ಹಿರಿಯ ವಕೀಲ ಸಿ ವಿ ನಾಗೇಶ್‌ ಅವರು “ಸರ್ಕಾರ ತನಿಖೆ ಮುಂದುವರಿಸಬಹುದು. ಸಕ್ಷಮ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸದಂತೆ ಆದೇಶಿಸಬೇಕು” ಎಂದು ಕೋರಿದರು.

ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕ ಬಿ ಎನ್‌ ಜಗದೀಶ್‌ ಅವರು “ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಹೀಗಾಗಿ, ಯಾವುದೇ ಆದೇಶ ಮಾಡಬಾರದು” ಎಂದರು.

ಆಗ ಪೀಠವು “ಹಾಲಿ ಅರ್ಜಿಗಳನ್ನು ವಿಸ್ತೃತವಾಗಿ ಆಲಿಸಬೇಕಿದೆ. ಸಕ್ಷಮ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿರುವುದರಿಂದ ಈ ಪ್ರಕರಣಗಳ ಮೇಲೆ ಪರಿಣಾಮ ಉಂಟು ಮಾಡುವ ಸಾಧ್ಯತೆ ಇರುವುದರಿಂದ ನ್ಯಾಯಾಲಯದ ಅನುಮತಿ ಪಡೆಯದೇ ಸಕ್ಷಮ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಬಾರದು” ಎಂದು ಆದೇಶಿಸಿ, ವಿಚಾರಣೆಯನ್ನು ಆಗಸ್ಟ್‌ 5ಕ್ಕೆ ಮುಂದೂಡಿತು.