Tamilnadu former CM J Jayalalithaa 
ಸುದ್ದಿಗಳು

ಜಯಲಲಿತಾ ಚಿನ್ನಾಭರಣ ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಗೆ ನೀಡಿದ್ದ ತಡೆ ವಿಸ್ತರಿಸಿದ ಹೈಕೋರ್ಟ್‌

ಪ್ರಸ್ತುತ ಅರ್ಜಿಯು ಆಭರಣ ಮತ್ತು ಸ್ಥಿರಾಸ್ತಿಗೆ ಸಂಬಂಧಿಸಿದ್ದು, 5 ಕೋಟಿ ರೂಪಾಯಿಯನ್ನು ಕರ್ನಾಟಕ ಸರ್ಕಾರಕ್ಕೆ ಪಾವತಿಸುವ ಆದೇಶಕ್ಕೆ ತಡೆಯನ್ನು ವಿಚಾರಣಾಧೀನ ನ್ಯಾಯಾಲಯದ ಮುಂದೆ ಅರ್ಜಿ ಸಲ್ಲಿಸುವ ಮೂಲಕ ಕೋರಬಹುದು ಎಂದಿರುವ ನ್ಯಾಯಾಲಯ.

Bar & Bench

ಬೆಂಗಳೂರಿನ ವಿಶೇಷ ಸಿಬಿಐ ನ್ಯಾಯಾಲಯದ ಸುಪರ್ದಿಯಲ್ಲಿದ್ದ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜೆ ಜಯಲಲಿತಾ ಅಕ್ರಮವಾಗಿ ಗಳಿಸಿದ್ದ ಆಭರಣ ಮತ್ತು ಸ್ಥಿರಾಸ್ತಿಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರ ಮಾಡುವ ಪ್ರಕ್ರಿಯೆಗೆ ನೀಡಿದ್ದ ತಡೆಯಾಜ್ಞೆಯನ್ನು ಕರ್ನಾಟಕ ಹೈಕೋರ್ಟ್ ಸೋಮವಾರ ವಿಸ್ತರಿಸಿದೆ.

ಜಯಲಲಿತಾ ಪುತ್ರಿ ಎಂದು ಜೆ ದೀಪಾ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಪಿ ಮೊಹಮ್ಮದ್‌ ನವಾಜ್ ಅವರ ಏಕಸದಸ್ಯ ಪೀಠ ನಡೆಸಿತು.

ಜಯಲಲಿತಾ ಪ್ರಕರಣದ ವಿಚಾರಣೆ ನಡೆಸಿದ್ದರ ವೆಚ್ಚವಾಗಿ ತಮಿಳುನಾಡು ಸರ್ಕಾರವು ಕರ್ನಾಟಕ ಸರ್ಕಾರಕ್ಕೆ 5 ಕೋಟಿ ರೂಪಾಯಿ ಪಾವತಿಸಬೇಕು ಎಂದು ವಿಚಾರಣಾಧೀನ ನ್ಯಾಯಾಲಯ ಆದೇಶಿಸಿದೆ. ಈ ಆದೇಶಕ್ಕೆ ತಡೆ ನೀಡಬೇಕು ಎಂದು ಅರ್ಜಿದಾರರ ಪರ ವಕೀಲರು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠವು ಪ್ರಸ್ತುತ ಅರ್ಜಿಯು ಆಭರಣ ಮತ್ತು ಸ್ಥಿರಾಸ್ತಿಗೆ ಸಂಬಂಧಿಸಿದ್ದು, 5 ಕೋಟಿ ರೂಪಾಯಿಯನ್ನು ಕರ್ನಾಟಕ ಸರ್ಕಾರಕ್ಕೆ ಪಾವತಿಸುವ ಆದೇಶಕ್ಕೆ ತಡೆಯನ್ನು ವಿಚಾರಣಾಧೀನ ನ್ಯಾಯಾಲಯದ ಮುಂದೆ ಅರ್ಜಿ ಸಲ್ಲಿಸುವ ಮೂಲಕ ಕೋರಬಹುದು ಎಂದು ಹೇಳಿ, ವಿಚಾರಣೆ ಮುಂದೂಡಿತು.