ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆ ಹಿನ್ನೆಲೆಯಲ್ಲಿ ನಡೆಸಲಾಗಿದ್ದ ನಗರ ವ್ಯಾಪ್ತಿಯ ವಿವಿಧ ವಿಧಾನಸಭೆ ಕ್ಷೇತ್ರಗಳ ವಾರ್ಡ್ ಮರು ವಿಂಗಡಣೆಯಲ್ಲಿ ಲೋಪವಾಗಿದ್ದು, ಅದನ್ನು ಸರಿಪಡಿಸಿದ ನಂತರವೇ ಚುನಾವಣೆ ವಿಚಾರದಲ್ಲಿ ಮುಂದುವರಿಯಲಾಗುವುದು ಎಂದು ರಾಜ್ಯ ಸರ್ಕಾರವು ಸೋಮವಾರ ಕರ್ನಾಟಕ ಹೈಕೋರ್ಟ್‌ಗೆ ಸ್ಪಷ್ಟಪಡಿಸಿದೆ.
ಬಿಬಿಎಂಪಿ ವಾರ್ಡ್ ಮರುವಿಂಗಣೆ ಮಾಡಿ ಹಿಂದಿನ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು 2022ರ ಜುಲೈ 14ರಂದು ಹೊರಡಿಸಿದ್ದ ಅಧಿಸೂಚನೆಯನ್ನು ಎತ್ತಿಹಿಡಿದಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ತೀರ್ಪು ಪ್ರಶ್ನಿಸಿ ಮಾಜಿ ಮೇಯರ್ ಬಿ ಎನ್ ಮಂಜುನಾಥ ರೆಡ್ಡಿ ಮತ್ತಿತರರು ಸಲ್ಲಿಸಿದ್ದ ಮೇಲ್ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂ ಜಿ ಎಸ್ ಕಮಲ್ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಅರ್ಜಿದಾರರ ಪರ ಹಿರಿಯ ವಕೀಲ ಉದಯ ಹೊಳ್ಳ ಅವರು ವಾರ್ಡ್ ಮರು ವಿಂಗಡಣೆಯಲ್ಲಿ ಕೆಲ ಲೋಪಗಳಾಗಿವೆ. ಈ ಅಂಶಗಳನ್ನು ಏಕ ಸದಸ್ಯ ಪೀಠವು ತನ್ನ ತೀರ್ಪಿನಲ್ಲಿ ಉಲ್ಲೇಖಿಸಿದೆ. ಆದರೂ ಪ್ರಕರಣದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದೆ. ಲೋಪಗಳು ಕಂಡುಬಂದಾಗ ಅದನ್ನು ಸರಿಪಡಿಸುವುದು ಅನಿವಾರ್ಯ ಎಂದು ವಿಭಾಗೀಯ ಪೀಠದ ಗಮನಕ್ಕೆ ತಂದರು.
ಅಡ್ವೋಕೇಟ್ ಜನರಲ್ ಕೆ ಶಶಿಕಿರಣ್ ಶೆಟ್ಟಿ ಅವರು ಬಿಬಿಎಂಪಿ ವಾರ್ಡ್ ಮರು ವಿಂಗಡಣೆಯಲ್ಲಿ ಕೆಲವೊಂದು ಲೋಪಗಳಾಗಿವೆ. ಅವು ರಾಜ್ಯ ಸರ್ಕಾರದ ಗಮನಕ್ಕೆ ಬಂದಿವೆ. ಕಾಲಮಿತಿಯೊಳಗೆ ಚುನಾವಣೆ ನಡೆಸಲು ಸರ್ಕಾರ ಬದ್ಧವಾಗಿದೆ. ಆದರೆ, ಲೋಪಗಳನ್ನು ಸರಿಪಡಿಸಿಕೊಂಡು ಹೊಸದಾಗಿ ವಾರ್ಡ್ ಮರು ವಿಂಗಡಣೆ ಮಾಡುವುದು ಅನಿವಾರ್ಯವಾಗಿದೆ. ಆ ನಂತರವೇ ಚುನಾವಣೆ ವಿಚಾರಣೆಯಲ್ಲಿ ಸರ್ಕಾರ ಮುಂದುವರಿಯುತ್ತದೆ. ಅದಕ್ಕಾಗಿ ಸ್ವಲ್ಪ ಕಾಲಾವಕಾಶ ನೀಡಬೇಕು ಎಂದು ಕೋರಿದರು.
ಈ ಹೇಳಿಕೆ ದಾಖಲಿಸಿಕೊಂಡ ನ್ಯಾಯಾಲಯವು ರಾಜ್ಯ ಸರ್ಕಾರಕ್ಕೆ 12 ವಾರ ಕಾಲಾವಕಾಶ ನೀಡಿ ಮೇಲ್ಮನವಿ ವಿಚಾರಣೆ ಮುಂದೂಡಿದೆ.
ಪ್ರಕರಣದ ಹಿನ್ನೆಲೆ: ಬಿಬಿಎಂಪಿ ವಾರ್ಡ್‌ಗಳನ್ನು ಪುನರ್ ರಚಿಸಿ 2022ರ ಜುಲೈ 14ರಂದು ಹಿಂದಿನ ಬಿಜೆಪಿ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಈ ಅಧಿಸೂಚನೆ ರದ್ದುಪಡಿಸುವಂತೆ ಕೋರಿ ಮಾಜಿ ಶಾಸಕಿ ಸೌಮ್ಯಾರೆಡ್ಡಿ ಹಾಗೂ ಹಾಲಿ ಸಚಿವರಾದ ಜಮೀರ್ ಅಹ್ಮದ್ ಖಾನ್, ಮಾಜಿ ಮೇಯರ್ ಬಿ ಎನ್ ಮಂಜುನಾಥ ರೆಡ್ಡಿ, ಶಾಸಕ ಎಂ.ಸತೀಶ್ ರೆಡ್ಡಿ ಸೇರಿದಂತೆ ಹಲವರು ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದರು. ಈ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿದ್ದ ನ್ಯಾ.ಹೇಮಂತ್ ಚಂದನಗೌಡರ್ ಅವರ ಏಕಸದಸ್ಯ ಪೀಠ, ಸರ್ಕಾರದ ಅಧಿಸೂಚನೆಯಲ್ಲಿ ಮಧ್ಯಪ್ರವೇಶಿಸುವ ಅವಶ್ಯಕತೆ ಕಂಡುಬರುತ್ತಿಲ್ಲ ಎಂದು ತಿಳಿಸಿ 2022ರ ಸೆಪ್ಟೆಂಬರ್ 16ರಂದು ತೀರ್ಪು ನೀಡಿತ್ತು. ಅದನ್ನು ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲಾಗಿದೆ.