ಪೋಕ್ಸೊ ಪ್ರಕರಣದಲ್ಲಿ ಅಪರಾಧ ತನಿಖಾ ದಳವು (ಸಿಐಡಿ) ವಿಚಾರಣಾಧೀನ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿರುವುದರಿಂದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಕಸ್ಟಡಿಗೆ ಪಡೆದು ತನಿಖೆಗೆ ಒಳಪಡಿಸುವ ಅಗತ್ಯವಿಲ್ಲ. ಅಲ್ಲದೇ, ಬಿಎಸ್‌ವೈ ವಿರುದ್ಧ ಯಾವುದೇ ತನಿಖೆ ಬಾಕಿ ಇಲ್ಲ ಎಂದಿರುವ ಕರ್ನಾಟಕ ಹೈಕೋರ್ಟ್ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಬಿಜೆಪಿ ಹಿರಿಯ ನಾಯಕ ಬಿಎಸ್‌ವೈ ಅವರು ತನ್ನ ವಿರುದ್ಧ ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲಿ ಪೋಕ್ಸೊ ಮತ್ತು ಲೈಂಗಿಕ ಕಿರುಕುಳ ಆರೋಪದ ಸಂಬಂಧದ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಪುರಸ್ಕರಿಸಿದೆ.
ಬಿಎಸ್‌ವೈ ಅವರು ₹5 ಲಕ್ಷ ಮೌಲ್ಯದ ವೈಯಕ್ತಿಕ ಬಾಂಡ್ ಮತ್ತು ಇಬ್ಬರು ಭದ್ರತೆ ಒದಗಿಸಬೇಕು. ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು ಮತ್ತು ತನಿಖೆಗೆ ಅಡ್ಡಿ ಮಾಡಬಾರದು. ಪೂರ್ವಾನುಮತಿ ಇಲ್ಲದೇ ಸಕ್ಷಮ ನ್ಯಾಯಾಲಯದ ವ್ಯಾಪ್ತಿ ಬಿಟ್ಟು ಹೊರಹೋಗುವಂತಿಲ್ಲ. ಮೇಲಿನ ಷರತ್ತಗಳನ್ನು ಉಲ್ಲಂಘಿಸಿದರೆ ನಿರೀಕ್ಷಣಾ ಜಾಮೀನು ರದ್ದತಿ ಕೋರಲು ಪ್ರಾಸಿಕ್ಯೂಷನ್ ಸ್ವತಂತ್ರವಾಗಿದೆ ಎಂದು ನ್ಯಾಯಾಲಯ ಹೇಳಿದೆ.
ಬಿಎಸ್‌ವೈ ಅವರು 80 ವರ್ಷ ವಯೋಮಾನದವರಾಗಿದ್ದು, ಮುಖ್ಯಮಂತ್ರಿ ಹುದ್ದೆ ನಿಭಾಯಿಸಿದ್ದರಿಂದ ಅವರು ವಿಚಾರಣೆಗೆ ಸಹಕರಿಸುವುದಿಲ್ಲ ಎನ್ನಲಾಗದು ಎಂದು ನ್ಯಾಯಾಲಯವು ಆದೇಶಿಸಿದೆ.