ಸುದ್ದಿಗಳು

ತೂಗು ಸೇತುವೆಗೆ ಮಾಜಿ ಸಿಎಂ ಯಡಿಯೂರಪ್ಪ ಹೆಸರಿಡಲು ನಿರ್ದೇಶನ ಕೋರಿಕೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್

ಅಂಬಾರಗೋಡ್ಲು-ಕಳಸವಳ್ಳಿ ನಡುವಿನ ಶರಾವತಿ ಹಿನ್ನೀರ ತೂಗು ಸೇತುವೆ ಎಂದು ಕರೆಯಲ್ಪಡುವ ಈ ಸೇತುವೆ 2.4 ಕಿ.ಮೀ ಉದ್ದವಿದ್ದು, ಇದಕ್ಕೆ 450 ಕೋಟಿ ವೆಚ್ಚವಾಗಿದೆ ಎನ್ನಲಾಗಿದೆ.

Bar & Bench

ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ಶರಾವತಿ ನದಿಯ ಹಿನ್ನೀರಿನ ಮೇಲೆ ಸಿಗಂದೂರಿಗೆ ಸಂಪರ್ಕ ಕಲ್ಪಿಸುವ ಅಂಬಾರಗೋಡ್ಲು-ಕಳಸವಳ್ಳಿ ನಡುವೆ ನೂತನವಾಗಿ ನಿರ್ಮಾಣವಾಗಿರುವ ತೂಗು ಸೇತುವೆಗೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಹೆಸರಿಡುವಂತೆ ಕೋರಿರುವ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಕರ್ನಾಟಕ ಹೈಕೋರ್ಟ್‌ ಗುರುವಾರ ನೋಟಿಸ್‌ ಜಾರಿ ಮಾಡಿದೆ.

ಶಿವಮೊಗ್ಗದ ಬಿದರೆ ಗ್ರಾಮದ ನಿವಾಸಿ ಕೆ ಹರನಾಥ್ ರಾವ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಸ್‌ ಸುನೀಲ್‌ ದತ್ತ ಯಾದವ್ ಅವರ ಏಕಸದಸ್ಯ ಪೀಠ ನಡೆಸಿತು.

ಅರ್ಜಿದಾರರ ವಾದ ಆಲಿಸಿದ ಪೀಠವು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಜುಲೈ 17ಕ್ಕೆ ಮುಂದೂಡಿತು.

ತೂಗು ಸೇತುವೆಗೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಹೆಸರನ್ನು ನಾಮಕರಣ ಮಾಡಬೇಕು ಎಂದು ಕೋರಿ ಜುಲೈ 7ರಂದು ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಇಲಾಖೆ ಮತ್ತು ರಾಜ್ಯ ಸರ್ಕಾರದ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್‌ಗೆ ಮನವಿ ಸಲ್ಲಿಸಲಾಗಿದೆ. ಆದರೆ, ಮನವಿಗೆ ಸಂಬಂಧಿಸಿದಂತೆ ಈವರೆಗೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

ಸೇತುವೆ ನಿರ್ಮಾಣಕ್ಕೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಕಾರಣರಾಗಿದ್ದು, ಅರ್ಜಿದಾರರು ಸಲ್ಲಿಸಿರುವ ಮನವಿಯಲ್ಲಿ ಸಾಗರ ತಾಲ್ಲೂಕಿನ ಜನರ ಭಾವನೆ ಮತ್ತು ಸಾರ್ವಜನಿಕ ಅಭಿಪ್ರಾಯ ಅಡಗಿದೆ. ಅರ್ಜಿದಾರರು ಮನವಿ ಸಲ್ಲಿಸಿದ ಕೆಲ ದಿನಗಳಲ್ಲಿಯೇ ಸೇತುವೆ ಉದ್ಘಾಟನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ, ಸೇತುವೆ ಉದ್ಘಾಟನೆಗೊಂಡರೂ ಸೇತುವೆಗೆ ಹೆಸರಿಡುವ ವಿಚಾರವನ್ನು ಯಥಾಸ್ಥಿತಿಯಲ್ಲಿಡಬೇಕು ಎಂದು ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ಮಧ್ಯಂತರ ಮನವಿ ಮಾಡಲಾಗಿದೆ.

ಸಿಗಂದೂರು ಸೇತುವೆ ಎಂದು ಕರೆಯಲ್ಪಡುವ ಇದು 2.4 ಕಿ ಮೀ ಉದ್ದವಿದ್ದು, ಇದಕ್ಕೆ 450 ಕೋಟಿ ವೆಚ್ಚವಾಗಿದೆ ಎನ್ನಲಾಗಿದೆ. ಜುಲೈ 14ರಂದು ಕೇಂದ್ರ ಸಚಿವ ನಿತಿನ್‌ ಗಡ್ಕರಿ ಸೇತುವೆ ಉದ್ಘಾಟಿಸಲಿದ್ದಾರೆ.