ಹಾವೇರಿ ಜಿಲ್ಲೆ ರಟ್ಟೀಹಳ್ಳಿ ಪಟ್ಟಣದಲ್ಲಿ ಸರ್ಕಾರಿ ಆಸ್ತಿಯನ್ನು ಕಬಳಿಸಿಕೊಂಡು ಹಜರತ್ ಮುಂಡೇಶಾವಲಿ ದರ್ಗಾ ನಿರ್ಮಿಸಲಾಗಿದೆ ಎಂದು ಆಕ್ಷೇಪಿಸಿ ಸಲ್ಲಿಸಿದ ಅರ್ಜಿ ಸಂಬಂಧ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತಕ್ಕೆ ಕರ್ನಾಟಕ ಹೈಕೋರ್ಟ್ ಈಚೆಗೆ ನೋಟಿಸ್ ಜಾರಿಗೊಳಿಸಿದೆ.
ರಟ್ಟೀಹಳ್ಳಿ ನಿವಾಸಿಗಳಾದ ಸೋಮಶೇಖರ ಹುರಕಡ್ಲಿ ಹಾಗೂ ಮೃತ್ಯುಂಜಯಸ್ವಾಮಿ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ್ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಕೆಲ ಕಾಲ ವಾದ ಆಲಿಸಿದ ಪೀಠವು ರಾಜ್ಯ ಸರ್ಕಾರ, ಹಾವೇರಿ ಜಿಲ್ಲಾಧಿಕಾರಿ, ರಟ್ಟೀಹಳ್ಳಿ ತಹಶೀಲ್ದಾರ್, ಜಿಲ್ಲಾ ಪಂಚಾಯಿತಿ ಸಿಇಒ ಹಾಗೂ ಇತರರಿಗೆ ನೋಟಿಸ್ ಜಾರಿಗೊಳಿಸಿ, ಆಕ್ಷೇಪಣೆ ಸಲ್ಲಿಸಲು ಸೂಚಿಸಿ ವಿಚಾರಣೆಯನ್ನು ಜುಲೈ 9ಕ್ಕೆ ಮುಂದೂಡಿತು. ಅರ್ಜಿದಾರರ ಪರ ವಕೀಲ ಜಯಂತ್ ರಾಮಚಂದ್ರ ಇಟಗಿ ವಾದಿಸಿದರು.
ರಟ್ಟೀಹಳ್ಳಿಯ ಸರ್ಕಾರಿ ಆಸ್ತಿ ಸಂಖ್ಯೆ 90 ಹಾಗೂ 91ರಲ್ಲಿ ಅಕ್ರಮವಾಗಿ ಕಟ್ಟಿರುವ ಮುಂಡೇಶಾವಲಿ ದರ್ಗಾದ ಭಾಗ, ಸಮಾಧಿ, ತಾವರಗಿ-ತುಮ್ಮಿನಕಟ್ಟಿ ರಸ್ತೆಯಲ್ಲಿರುವ ಬಸ್ ನಿಲ್ದಾಣವನ್ನು ತೆರವುಗೊಳಿಸುವಂತೆ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.