Karnataka HC and MLA C S Puttaraju

 
ಸುದ್ದಿಗಳು

ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ನಿವೇಶನ: ಶಾಸಕ ಸಿ ಎಸ್‌ ಪುಟ್ಟರಾಜು ಮನವಿ ವಜಾ ಮಾಡಿದ ಹೈಕೋರ್ಟ್‌

ಪುಟ್ಟರಾಜು ಪತ್ನಿ ಈ ಮೊದಲೇ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ನಿವೇಶನ ಪಡೆದಿದ್ದರು. ಇದನ್ನು ಬಚ್ಚಿಟ್ಟು ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದಿಂದಲೂ ನಿವೇಶನ ಪಡೆದಿದ್ದಾರೆ ಎಂದು ಸಿಬಿಐ ದೋಷಾರೋಪ ಪಟ್ಟಿ ಸಲ್ಲಿಸಿತ್ತು.

Bar & Bench

ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಿಯಮಬಾಹಿರವಾಗಿ ನಿವೇಶನ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳದ (ಸಿಬಿಐ) ದೂರನ್ನು ವಿಚಾರಣೆಗೆ ಪರಿಗಣಿಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ರದ್ದು ಕೋರಿದ್ದ ಜೆಡಿಎಸ್‌ ಶಾಸಕ ಸಿ ಎಸ್‌ ಪುಟ್ಟರಾಜು ಅವರ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ಸೋಮವಾರ ವಜಾಗೊಳಿಸಿದೆ.

ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಸಿ ಎಸ್ ಪುಟ್ಟರಾಜು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಎಸ್ ಸುನಿಲ್ ದತ್‌ ಯಾದವ್‌ ಅವರಿದ್ದ ಏಕಸದಸ್ಯ ಪೀಠವು ವಜಾಗೊಳಿಸಿ ಆದೇಶಿಸಿದೆ.

ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರವು ಸುಮಾರು 107 ನಿವೇಶನಗಳನ್ನು ನಿಯಮಬಾಹಿರವಾಗಿ ಹಂಚಿಕೆ ಮಾಡಿದೆ ಎಂದು ಸಾಮಾಜಿಕ ಹೋರಾಟಗಾರ ಕೆ ಆರ್ ರವೀಂದ್ರ ಹಾಗೂ ಕೆಪಿಸಿಸಿ ಸದಸ್ಯ ಟಿ ಎಸ್ ಸತ್ಯಾನಂದ ಆರೋಪಿಸಿದ್ದರು. 2011ರ ಅಕ್ಟೋಬರ್ 17ರಂದು ಈ ಹಗರಣ ಬೆಳಕಿಗೆ ಬಂದಿತ್ತು. ಸರ್ಕಾರ ಇದನ್ನು ಸಿಬಿಐ ತನಿಖೆಗೆ ವಹಿಸಿತ್ತು.

ಪುಟ್ಟರಾಜು ಅವರ ಪತ್ನಿ ಈ ಮೊದಲೇ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ನಿವೇಶನ ಪಡೆದಿದ್ದರು. ಇದನ್ನು ಮುಚ್ಚಿಟ್ಟು ಸುಳ್ಳು ಪ್ರಮಾಣ ಪತ್ರ ಸಲ್ಲಿಸಿ ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದಿಂದಲೂ ನಿವೇಶನ ಪಡೆದಿದ್ದಾರೆ ಎಂದು ಸಿಬಿಐ ದೋಷಾರೋಪ ಪಟ್ಟಿ ಸಲ್ಲಿಸಿತ್ತು.

ಭ್ರಷ್ಟಾಚಾರ ನಿಗ್ರಹ ಕಾಯಿದೆಗೆ 2018ರಲ್ಲಿ ಆದ ತಿದ್ದುಪಡಿ ಅನುಸಾರ ಶಾಸಕರ ವಿರುದ್ಧದ ಪ್ರಕರಣದಲ್ಲಿ ತನಿಖೆ ನಡೆಸಲು ಹೊಸದಾಗಿ ಪೂರ್ವಾನುಮತಿ ಪಡೆಯಬೇಕಿತ್ತು. ಆದರೆ, ಪೂರ್ವಾನುಮತಿ ಪಡೆಯದೆ ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಶೇಷ ನ್ಯಾಯಾಲಯ ಸಿಬಿಐ ದೂರನ್ನು ಸಂಜ್ಞೇಯ ಅಪರಾಧ ಎಂದು ಪರಿಗಣಿಸಿರುವುದು ಕಾನೂನು ಬಾಹಿರ. ಆದ್ದರಿಂದ, ವಿಚಾರಣಾ ನ್ಯಾಯಾಲಯದಲ್ಲಿನ ದೂರನ್ನು ವಜಾಗೊಳಿಸಬೇಕು ಎಂದು ಪುಟ್ಟರಾಜು ಕೋರಿದ್ದರು.

ಇದನ್ನು ಬಲವಾಗಿ ಅಲ್ಲಗಳೆದಿದ್ದ ಸಿಬಿಐ ಪರ ವಕೀಲ ಪಿ ಪ್ರಸನ್ನಕುಮಾರ್‌ ಅವರು ಭ್ರಷ್ಟಾಚಾರ ನಿಗ್ರಹ ಕಾಯಿದೆ–1988ರ ಪ್ರಕಾರ ಸಾರ್ವಜನಿಕ ಸೇವೆಯ ಚುನಾಯಿತ ಜನಪ್ರತಿನಿಧಿಗೆ ಆತನ ಸದಸ್ಯತ್ವ ಅವಧಿ ಮುಗಿದ ನಂತರ ತನಿಖೆಗೆ ಪೂರ್ವಾನುಮತಿ ಬೇಕಿಲ್ಲ. ತಿದ್ದುಪಡಿಯಲ್ಲಿ ಪೂರ್ವಾನುಮತಿ ಅವಶ್ಯಕತೆ ಇದೆ. ಆದರೆ, ಇದು 2018ಕ್ಕೂ ಮೊದಲೇ ನಡೆದ ಅಪರಾಧಕ್ಕೆ ಅನ್ವಯವಾಗುವುದಿಲ್ಲ ಎಂದು ವಾದ ಮಂಡಿಸಿದ್ದರು.