ಕಳೆದ ಫೆಬ್ರವರಿಯಲ್ಲಿ ರಾಮನಗರ ವಕೀಲರ ಸಂಘದ ಭಾರಿ ಪ್ರತಿಭಟನೆಯ ಕೇಂದ್ರಬಿಂದುವಾಗಿದ್ದ ಐಜೂರು ನಿವಾಸಿಯಾದ ವಕೀಲ ಚಾನ್ ಪಾಷಾ ವಕೀಲಿಕೆ ಮಾಡದಂತೆ ಅಮಾನತು ಮಾಡಿ ಆದೇಶಿಸಿದ್ದ ರಾಜ್ಯ ವಕೀಲರ ಪರಿಷತ್ (ಕೆಎಸ್‌ಬಿಸಿ) ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಈಚೆಗೆ ತಡೆಯಾಜ್ಞೆ ನೀಡಿದೆ.
ಮಾರ್ಚ್ 30ರಂದು ಕೆಎಸ್‌ಬಿಸಿಯು ಚಾನ್ ಪಾಷಾರನ್ನು ವಕೀಲಿಕೆ ಮಾಡುವುದರಿಂದ ಅಮಾನತು ಮಾಡಿ ಆದೇಶಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ನಡೆಸಿತ್ತು.
“ಅರ್ಜಿದಾರರ ಪರ ವಕೀಲರು ಕೆಎಸ್‌ಬಿಸಿ ಆದೇಶ ಮಾಡುವುದಕ್ಕೂ ಮುನ್ನ ಯಾವುದೇ ನೋಟಿಸ್ ಜಾರಿ ಮಾಡಿಲ್ಲ. ಇದು ಸ್ವಾಭಾವಿಕ ನ್ಯಾಯ ತತ್ವಕ್ಕೆ ವಿರುದ್ಧವಾಗಿದೆ ಎಂದು ವಾದಿಸಿದ್ದಾರೆ. ಆದ್ದರಿಂದ, ಅರ್ಜಿದಾರರ ಕೋರಿಕೆಯಂತೆ ಮುಂದಿನ ವಿಚಾರಣೆವರೆಗೆ ಕೆಎಸ್‌ಬಿಸಿ ಆದೇಶಕ್ಕೆ ತಡೆಯಾಜ್ಞೆ ನೀಡಲಾಗಿದೆ” ಎಂದು ನ್ಯಾಯಾಲಯ ಆದೇಶ ಮಾಡಿದೆ.
ಅಲ್ಲದೇ, ರಾಮನಗರ ವಕೀಲರ ಸಂಘ ಮತ್ತು ಕೆಎಸ್‌ಬಿಸಿ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಿದೆ.
ಪ್ರಕರಣದ ಹಿನ್ನೆಲೆ: ಉತ್ತರಪ್ರದೇಶದ ಜ್ಞಾನವಾಪಿ ಮಸೀದಿಯಲ್ಲಿ ಹಿಂದೂಗಳಿಗೆ ಪೂಜೆ ಸಲ್ಲಿಸಲು ಅಲ್ಲಿನ ಜಿಲ್ಲಾ ನ್ಯಾಯಾಲಯ ಜನವರಿ 31ರಂದು ಅವಕಾಶ ಕಲ್ಪಿಸಿ ಆದೇಶ ಮಾಡಿತ್ತು. ಇದಕ್ಕೆ ಆಕ್ಷೇಪಿಸಿ ರಾಮನಗರ ವಕೀಲರ ಸಂಘದ ಸದಸ್ಯ ಹಾಗೂ ಎಸ್‌ಡಿಪಿಐ ಮುಖಂಡ ಚಾನ್ ಪಾಷಾ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದರು.
ಇದನ್ನು ಆಧರಿಸಿ ಬಿಜೆಪಿ ಮುಖಂಡ ಪಿ ಶಿವಾನಂದ ಅವರು ಪಾಷ ವಿರುದ್ಧ ರಾಮನಗರ ಪೊಲೀಸ್ ಠಾಣೆಗೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿತ್ತು. ಪಾಷ ವಿರುದ್ಧ ದಾಖಲಾದ ಪ್ರಕರಣದ ಹಿನ್ನೆಲೆಯಲ್ಲಿ ರಾಮನಗರ ಜಿಲ್ಲಾ ವಕೀಲರ ಸಂಘವು ಅವರ ವಿರುದ್ಧ ಕ್ರಮ ಕೈಗೊಳ್ಳಲು ಫೆಬ್ರವರಿ 6ರಂದು ಸಂಜೆ ಸರ್ವ ಸದಸ್ಯರ ಸಭೆ ಕರೆದಿತ್ತು. ಆಗ, ದಲಿತ ಮತ್ತು ಪ್ರಗತಿಪರ ಮುಖಂಡರ ನಿಯೋಗವು ರಾಮನಗರ ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿಯನ್ನು ಭೇಟಿ ಮಾಡಿ, ಪ್ರಕರಣವನ್ನು ಸೌಹಾರ್ದಯುತವಾಗಿ ಪರಿಹರಿಸಿಕೊಳ್ಳುವಂತೆ ಮನವಿ ಸಲ್ಲಿಸಿತ್ತು.
ಈ ವೇಳೆ ಕೆಲ ವಕೀಲರು ಪಾಷ ಪರವಾಗಿ ಬಂದಿದ್ದ ಮುಖಂಡರನ್ನು ಪ್ರಶ್ನಿಸಿದಾಗ, ವಾಗ್ವಾದ ನಡೆದಿತ್ತು. ಘಟನೆಗೆ ಸಂಬಂಧಿಸಿದಂತೆ ನ್ಯಾಯಾಲಯದ ಆವರಣಕ್ಕೆ ಅತಿಕ್ರಮವಾಗಿ ಪ್ರವೇಶಿಸಿದ್ದಾರೆ ಎಂದು ಆರೋಪಿಸಿ, ವಕೀಲರ ಸಂಘದ ಅಧ್ಯಕ್ಷರು ಅಂದು ರಾತ್ರಿ ನೀಡಿದ ದೂರಿನ ಮೇರೆಗೆ, ಪಾಷ ಮತ್ತು 40 ಮುಖಂಡರ ವಿರುದ್ಧ ಐಜೂರು ಠಾಣೆ ಪಿಎಸ್‌ಐ ಸಯ್ಯದ್ ತನ್ವೀರ್ ಹುಸೇನ್ ಎಫ್‌ಐಆರ್ ದಾಖಲಿಸಿಕೊಂಡಿದ್ದರು.
ಇದಾದ ಮಾರನೇಯ ದಿನ ವಕೀಲರ ಸಂಘಕ್ಕೆ ತೆರಳಿದ್ದವರ ಪೈಕಿ ರಫೀಕ್ ಖಾನ್ ಎಂಬುವರು, ವಕೀಲರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ನೀಡಿದ ದೂರಿನ ಮೇರೆಗೆ ಪಿಎಸ್‌ಐ ತನ್ವೀರ್ ಅವರು 40 ವಕೀಲರ ವಿರುದ್ಧ ಪ್ರಕರಣ ದಾಖಲಿಸಿದ್ದರು. ಇದರಿಂದ ಕೆರಳಿದ ವಕೀಲರು ಪಿಎಸ್‌ಐ ಅಮಾನತಿಗೆ ಆಗ್ರಹಿಸಿ ಧರಣಿ ನಡೆಸಿದ್ದರು. ಈ ವಿಚಾರ ವಿಧಾನಸಭೆಯಲ್ಲಿ ಮಾರ್ದನಿಸಿತ್ತು. ವಿಪಕ್ಷದ ಒತ್ತಡಕ್ಕೆ ಮಣಿದು ಪಿಎಸ್‌ಐ ತನ್ವೀರ್ ಅವರನ್ನು ಸರ್ಕಾರ ಅಮಾನತ್ತು ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.
ಇದಾದ ಬಳಿಕ ಕೆಎಸ್‌ಬಿಸಿಯು ಚಾನ್ ಪಾಷಾ ಅವರನ್ನು ವಕೀಲಿಕೆ ಮಾಡುವುದರಿಂದ ಅಮಾನತು ಮಾಡಿ ಆದೇಶಿಸಿತ್ತು.