Justice Ashok Kinagi 
ಸುದ್ದಿಗಳು

ಕುಟುಂಬ ಕಲ್ಯಾಣ ಕೇಂದ್ರಗಳ ಸ್ಥಗಿತಗೊಳಿಸಿದ್ದ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ತಡೆ

ಕೇಂದ್ರ ಸರ್ಕಾರ 2012ರಲ್ಲಿ ಹೊರಡಿಸಿದ್ದ ಸುತ್ತೋಲೆ ಆಧರಿಸಿ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ನಗರ ಕುಟುಂಬ ಕಲ್ಯಾಣ ಕೇಂದ್ರಗಳನ್ನು ರದ್ದುಪಡಿಸಿ 2026ರ ಜುಲೈ 29ರಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿತ್ತು.

Bar & Bench

ಕೇಂದ್ರ ಸರ್ಕಾರದ ರಾಷ್ಟ್ರೀಯ ಕುಟುಂಬ ಕಲ್ಯಾಣ ಕಾರ್ಯಕ್ರಮದಡಿ ರಾಜ್ಯದಲ್ಲಿ ದಶಕಗಳಿಂದ ಸ್ವಯಂಸೇವಾ ಸಂಸ್ಥೆಗಳ ಸಹಕಾರದೊಂದಿಗೆ ಕಾರ್ಯನಿರ್ವಹಿಸುತ್ತಿರುವ ನಗರ ಕುಟುಂಬ ಕಲ್ಯಾಣ ಕೇಂದ್ರ (ಯುಎಫ್ ಡಬ್ಲ್ಯೂಸಿ)ಗಳನ್ನು ಸ್ಥಗಿತಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಮಂಗಳವಾರ ತಡೆ ನೀಡಿದೆ.

ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಮೈಸೂರು ಮಕ್ಕಳ ಕೂಟದಲ್ಲಿ ಕಾರ್ಯನಿರ್ವಹಿಸುತ್ತಿರುವ ನಗರ ಕುಟುಂಬ ಕಲ್ಯಾಣ ಕೇಂದ್ರದಲ್ಲಿ ಮಹಿಳಾ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಡಾ. ಎಸ್ ಪ್ರಿಯದರ್ಶಿನಿ ಸೇರಿದಂತೆ ರಾಜ್ಯದ ವಿವಿಧ ಕಡೆ ಸ್ವಯಂ ಸೇವಾ ಸಂಸ್ಥೆಗಳ ನಗರ ಕುಟುಂಬ ಕಲ್ಯಾಣ ಕೇಂದ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ಸೇರಿ 92 ಮಂದಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಅಶೋಕ್ ಕಿಣಗಿ ಅವರ ಏಕಸದಸ್ಯ ಪೀಠ ಮಂಗಳವಾರ ವಿಚಾರಣೆ ನಡೆಸಿತು.

ಕೇಂದ್ರ ಸರ್ಕಾರ 2012ರಲ್ಲಿ ಹೊರಡಿಸಿದ್ದ ಸುತ್ತೋಲೆ ಆಧರಿಸಿ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ನಗರ ಕುಟುಂಬ ಕಲ್ಯಾಣ ಕೇಂದ್ರಗಳನ್ನು ರದ್ದುಪಡಿಸಿ 2026ರ ಜುಲೈ 29ರಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿದ್ದ ಆದೇಶಕ್ಕೆ ಮುಂದಿನ ವಿಚಾರಣೆವರೆಗೆ ತಡೆ ನೀಡಿತು.

ಜೊತೆಗೆ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ, ನಗರ ಕುಟುಂಬ ಕಲ್ಯಾಣ ಕೇಂದ್ರಗಳು ನಡೆಯುತ್ತಿರುವ ಸ್ವಯಂ ಸೇವಾ ಸಂಸ್ಥೆಗಳಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು. ಅರ್ಜಿದಾರರ ಪರ ವಕೀಲೆ ಅಕ್ಕಮಹಾದೇವಿ ಹಿರೇಮಠ ವಾದ ಮಂಡಿಸಿದರು.