Darshan and Karnataka HC 
ಸುದ್ದಿಗಳು

ರೇಣುಕಾಸ್ವಾಮಿ ಕೊಲೆ ಪ್ರಕರಣ: ಹೈಕೋರ್ಟ್‌ನಲ್ಲಿ ನಟ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಅ. 22ಕ್ಕೆ

ತನಿಖೆ ಈಗಾಗಲೇ ಪೂರ್ಣಗೊಂಡಿದ್ದು, ಹೆಚ್ಚಿನ ತನಿಖೆ ಅಗತ್ಯವಿಲ್ಲ. ಹಾಗೆಯೇ, ತಾನು ಬೆನ್ನುಹುರಿ ನೋವಿನಿಂದ ಬಳಲುತ್ತಿದ್ದು, ಅಗತ್ಯ ಚಿಕಿತ್ಸೆ ಪಡೆಯಲು ಜಾಮೀನು ಮಂಜೂರು ಮಾಡಬೇಕು ಎಂದು ಕೋರಿದ್ದಾರೆ.

Bar & Bench

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್‌ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯು ಅಕ್ಟೋಬರ್‌ 22ರಂದು ಕರ್ನಾಟಕ ಹೈಕೋರ್ಟ್‌ನಲ್ಲಿ ವಿಚಾರಣೆಗೆ ಬರುವ ಸಾಧ್ಯತೆಯಿದೆ.

ಬೆಂಗಳೂರಿನ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯ ಜಾಮೀನು ತಿರಸ್ಕರಿಸಿದ ಹಿನ್ನೆಲೆಯಲ್ಲಿ ದರ್ಶನ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಮೂರ್ತಿ ಎಸ್‌ ವಿಶ್ವಜಿತ್‌ ಶೆಟ್ಟಿ ಅವರ ಪೀಠದ ಮುಂದೆ ಹಾಜರಾದ ದರ್ಶನ್‌ ಪರ ವಕೀಲ ಎಸ್‌ ಸುನಿಲ್‌ ಕುಮಾರ್ ಅವರು ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಲು ಕೋರಿ ಮೆಮೊ ಸಲ್ಲಿಸಿದರು. ಆ ಮೊಮೊ ಆಧರಿಸಿ ಅಕ್ಟೋಬರ್‌ 22ಕ್ಕೆ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸಲಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಕೋರಿ ದರ್ಶನ್‌ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಬೆಂಗಳೂರಿನ ನ್ಯಾಯಾಲಯವು ಅಕ್ಟೋಬರ್‌ 14ರಂದು ಆದೇಶಿಸಿತ್ತು. ಇದರಿಂದ ಅಕ್ಟೋಬರ್‌ 15ರಂದು ಹೈಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸಿದ ದರ್ಶನ್‌, ಪ್ರಕರಣದಲ್ಲಿ ಪ್ರತ್ಯಕ್ಷ ದರ್ಶಿಗಳ ಹೇಳಿಕೆಯನ್ನು ತಡವಾಗಿ ಮಾಡಿಕೊಳ್ಳಲಾಗಿದೆ. ಶವಪರೀಕ್ಷೆಯನ್ನು ಸಹ ವಿಳಂಬವಾಗಿ ಮಾಡಲಾಗಿದೆ. ಪ್ರತ್ಯಕ್ಷ ಸಾಕ್ಷಿದಾರರನ್ನು ತನಿಖಾಧಿಕಾರಿಗಳೇ ಸೃಷ್ಟಿ ಮಾಡಿದ್ದಾರೆ. ಪ್ರಕರಣದಲ್ಲಿ ಇತರೆ ಆರೋಪಿಗಳೊಂದಿಗೆ ತಾನು ಯಾವುದೇ ಒಳಸಂಚು ರೂಪಿಸಿಲ್ಲ. ತನಿಖೆ ಈಗಾಗಲೇ ಪೂರ್ಣಗೊಂಡಿದ್ದು, ಹೆಚ್ಚಿನ ತನಿಖೆ ಅಗತ್ಯವಿಲ್ಲ. ಹಾಗೆಯೇ, ತಾನು ಬೆನ್ನುಹುರಿ ನೋವಿನಿಂದ ಬಳಲುತ್ತಿದ್ದು, ಅಗತ್ಯ ಚಿಕಿತ್ಸೆ ಪಡೆಯಲು ಜಾಮೀನು ಮಂಜೂರು ಮಾಡಬೇಕು ಎಂದು ಕೋರಿದ್ದಾರೆ.