ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (ಕೆಎಂವಿಎಸ್‌ಟಿಡಿಸಿಎಲ್) ಹಣ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಕೆಲವು ಅಧಿಕಾರಿಗಳ ವಿರುದ್ಧ ಕೇಂದ್ರೀಯ ತನಿಖಾ ದಳವು (ಸಿಬಿಐ) ದಾಖಲಿಸಿರುವ ಎಫ್‌ಐಆರ್ ಹಾಗೂ ಆನಂತರದ ತನಿಖಾ ವರದಿಯನ್ನು ಆಧರಿಸಿ ಮಂಗಳವಾರ ವಿಸ್ತೃತ ಆದೇಶ ಮಾಡುವುದಾಗಿ ಕರ್ನಾಟಕ ಹೈಕೋರ್ಟ್ ಶುಕ್ರವಾರ ಹೇಳಿದೆ.
ಬಿಜೆಪಿಯಿಂದ ಉಚ್ಚಾಟಿಸಲ್ಪಟ್ಟಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹಾಗೂ ಬಿಜೆಪಿಯ ನಾಯಕರಾದ ರಮೇಶ ಜಾರಕಿಹೊಳಿ, ಮಾಜಿ ಶಾಸಕರಾದ ಅರವಿಂದ ಲಿಂಬಾವಳಿ ಮತ್ತು ಕುಮಾರ್ ಬಂಗಾರಪ್ಪ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
ಸಿಬಿಐ ಪ್ರತಿನಿಧಿಸಿದ್ದ ವಿಶೇಷ ಸರ್ಕಾರಿ ಅಭಿಯೋಜಕ ಪಿ ಪ್ರಸನ್ನ ಕುಮಾರ್ ಅವರು “ಮೂರನೇ ಸ್ಥಿತಿಗತಿ ವರದಿಯ ಅಂಶಗಳನ್ನು ನಾಲ್ಕನೇ ವರದಿಯಲ್ಲಿ ಪುನರುಚ್ಚರಿಸಲಾಗಿದೆ. ನಿಗಮದ 89.63 ಕೋಟಿ ರೂಪಾಯಿಯನ್ನು 700 ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿ ಕಬಳಿಸಲಾಗಿದೆ. ಪ್ರಾಥಮಿಕ ತನಿಖೆ ಬಾಕಿ ಇದ್ದು, ಮೂಲ ಪ್ರಕರಣದಲ್ಲಿ ಆರೋಪಿಗಳಾಗಿರುವವರೇ ಇಲ್ಲಿಯೂ ಆರೋಪಿಗಳಾಗಿದ್ದಾರೆ” ಎಂದರು.
ಸಿಬಿಐ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿರುವ ವಸ್ತುಸ್ಥಿತಿ ವರದಿಗಳನ್ನು ಪರಿಶೀಲಿಸಿದ ನ್ಯಾಯಾಲಯವು ವರದಿಯಲ್ಲಿನ ಅಂಶಗಳನ್ನು ಉಲ್ಲೇಖಿಸಿ, ಮಂಗಳವಾರ ವಿಸ್ತೃತ ಆದೇಶ ಮಾಡಲಾಗುವುದು ಎಂದು ಹೇಳಿ, ವಿಚಾರಣೆ ಮುಂದೂಡಿತು.
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (ಕೆಎಂವಿಎಸ್‌ಟಿಡಿಸಿಎಲ್) ಹಣ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಕೆಲವು ಅಧಿಕಾರಿಗಳ ವಿರುದ್ಧ ಕೇಂದ್ರೀಯ ತನಿಖಾ ದಳವು 2024ರ ಜೂನ್ 3ರಂದು ದಾಖಲಿಸಿಕೊಂಡಿರುವ ಎಫ್‌ಐಆರ್ ಸಂಬಂಧ ತನಿಖೆ ಚುರುಕುಗೊಳಿಸಿ, ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ. ಅಲ್ಲದೆ, ಸಿಬಿಐ ಅಂತಿಮ ವರದಿ ಸಲ್ಲಿಸದ ತಕ್ಷಣ ಸಿಬಿಐ ವಿಶೇಷ ನ್ಯಾಯಾಲಯವು ಪ್ರಕ್ರಿಯೆ ಆರಂಭಿಸಲು ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದರು.