ಬಾಗಲಗುಂಟೆ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಎಂ ಕೆ ಮಂಜಣ್ಣ ವಿರುದ್ಧದ ₹10 ಸಾವಿರ ಲಂಚ ಪಡೆದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ವಿಚಾರಣಾಧೀನ ನ್ಯಾಯಾಲಯ ವಿಧಿಸಿದ್ದ ನಾಲ್ಕು ವರ್ಷಗಳ ಶಿಕ್ಷೆ ಮತ್ತು ₹1 ಲಕ್ಷ ದಂಡದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಈಚೆಗೆ ಕಾಯಂಗೊಳಿಸಿದೆ.
ವಿಶೇಷ ನ್ಯಾಯಾಲಯ ವಿಧಿಸಿರುವ ಶಿಕ್ಷೆಯನ್ನು ರದ್ದುಗೊಳಿಸಬೇಕು ಎಂದು ಕೋರಿ ಎಂ ಕೆ ಮಂಜಣ್ಣ ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿಯನ್ನು ನ್ಯಾಯಮೂರ್ತಿ ಎಚ್ ಪಿ ಸಂದೇಶ್ ಅವರ ಏಕಸದಸ್ಯ ಪೀಠ ವಜಾಗೊಳಿಸಿದೆ.
“ಭ್ರಷ್ಟಾಚಾರ ಆರೋಪ ಹೊತ್ತ ಪ್ರಕರಣಗಳಲ್ಲಿ ಮುಖ್ಯವಾಗಿ ಹಣಕ್ಕಾಗಿ ಬೇಡಿಕೆ ಇಟ್ಟಿರುವುದು ಮತ್ತು ಹಣ ಪಡೆದಿರುವುದು ಸಾಬೀತಾಗಬೇಕು. ಇದರಲ್ಲಿ ಅವೆರಡೂ ದೃಢಪಟ್ಟಿವೆ. ಹೀಗಾಗಿ, ವಿಚಾರಣಾಧೀನ ನ್ಯಾಯಾಲಯದ ಆದೇಶವನ್ನು ಕಾಯಂಗೊಳಿಸಲಾಗುತ್ತಿದೆ” ಎಂದು ಪೀಠ ವಿವರಿಸಿದೆ.
ಕ್ರಿಮಿನಲ್ ಆರೋಪದ ಪ್ರಕರಣವೊಂದನ್ನು ಮುಕ್ತಾಯಗೊಳಿಸಲು ಮಂಜಣ್ಣ ₹10 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳಿಗೆ ಸಿಕ್ಕಿ ಬಿದ್ದಿದ್ದರು. ವಿಚಾರಣೆ ನಡೆಸಿದ್ದ ವಿಶೇಷ ನ್ಯಾಯಾಲಯ ಆರೋಪಿಗೆ ಭ್ರಷ್ಟಾಚಾರ ನಿಗ್ರಹ ಕಾಯಿದೆ–1988ರ ಸೆಕ್ಷನ್ 13(1)ಡಿ ಮತ್ತು ಸೆಕ್ಷನ್ 13(2) ಅಡಿ ನಾಲ್ಕು ವರ್ಷಗಳ ಜೈಲು ಶಿಕ್ಷೆ ಮತ್ತು ₹50 ಸಾವಿರ ದಂಡ ವಿಧಿಸಿತ್ತು.