ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ಆದೇಶದ ಮೇರೆಗೆ ಜಾರ್ಖಂಡ್ ರಾಜ್ಯ ಪೊಲೀಸರು ತನ್ನ ಅಧಿಕಾರಿಗಳ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆಯಡಿ ನಕಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಜಾರಿ ನಿರ್ದೇಶನಾಲಯ (ಇ ಡಿ) ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ [ಹೇಮಂತ್ ಸೊರೆನ್ ಮತ್ತು ಜಾರಿ ನಿರ್ದೇಶನಾಲಯ ಇನ್ನಿತರರ ನಡುವಣ ಪ್ರಕರಣ].
ತನ್ನ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ತಡೆಯಲು ಹೀಗೆ ಮಾಡಲಾಗಿದ್ದು ಸರ್ಕಾರಿ ವ್ಯವಸ್ಥೆಯನ್ನು ಹೀಗೆ ದುರುಪಯೋಗಪಡಿಸಿಕೊಂಡಿರುವುದರಿಂದ ಜಾರ್ಖಂಡ್ ಮುಕ್ತಿ ಮೋರ್ಚಾ ನಾಯಕ ಹೇಮಂತ್ ಅವರಿಗೆ ಮಧ್ಯಂತರ ಜಾಮೀನು ನೀಡಬಾರದು ಎಂದು ಇ ಡಿ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.
"ಪಿಎಂಎಲ್‌ಎ ಅಡಿಯಲ್ಲಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸದಂತೆ ತಡೆಯಲು ಎಸ್‌ಸಿ/ಎಸ್‌ಟಿ ಕಾಯಿದೆಯಡಿಯಲ್ಲಿ ಇ ಡಿ ತನಿಖಾಧಿಕಾರಿಗಳ ಮೇಲೆ ಸುಳ್ಳು ಪ್ರಕರಣ ಹೂಡಿರುವುದರಿಂದ ಮಧ್ಯಂತರ ಜಾಮೀನು ಪಡೆಯಲು ಅರ್ಜಿದಾರರು ಅನರ್ಹರು... ಜಾಮೀನು ನೀಡಿದರೆ, ಪ್ರಕರಣದ ಮುಂದಿನ ತನಿಖೆ ವಿಫಲಗೊಳಿಸಲು, ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಹಾಗೂ ಸಾಕ್ಷ್ಯವನ್ನು ಹಾಳುಮಾಡಲು ಅವರು ಸರ್ಕಾರಿ ಯಂತ್ರವನ್ನು ದುರುಪಯೋಗಪಡಿಸಿಕೊಳ್ಳುತ್ತಾರೆ” ಎಂದು ಆರೋಪಿಸಲಾಗಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಭಾಗಿಯಾಗಿರುವ ಅಧಿಕಾರಿಗಳ ವಿರುದ್ಧ ಇ ಡಿ ಮಾಹಿತಿ ಹಂಚಿಕೊಂಡ ನಂತರವೂ ಜಾರ್ಖಂಡ್ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಫಿಡವಿಟ್ ಹೇಳಿದೆ.
ಸೊರೇನ್ ಅವರ ಜಾಮೀನು ಅರ್ಜಿಯನ್ನು ವಿಶೇಷ ನ್ಯಾಯಾಲಯ ವಜಾಗೊಳಿಸಿದ್ದು ಅದನ್ನು ಇಲ್ಲಿ ಪ್ರಶ್ನಿಸಲಾಗಿಲ್ಲ, ಅವರು ನೇರವಾಗಿ ಸುಪ್ರೀಂ ಕೋರ್ಟ್‌ನಲ್ಲಿ ಉಳಿದ ಪ್ರಕರಣಗಳಲ್ಲಿ ಮಧ್ಯಂತರ ಜಾಮೀನು ಪಡೆಯಲು ಸಾಧ್ಯವಿಲ್ಲ ಎಂದು ಇ ಡಿ ತಿಳಿಸಿದೆ.
ನ್ಯಾಯಮೂರ್ತಿಗಳಾದ ದೀಪಂಕರ್ ದತ್ತಾ ಮತ್ತು ಸತೀಶ್ ಚಂದ್ರ ಶರ್ಮಾ ಅವರಿರುವ ರಜಾಕಾಲೀನ ಪೀಠ ಇಂದು ಪ್ರಕರಣದ ವಿಚಾರಣೆ ನಡೆಸಲಿದೆ.
ಭೂ ಹಗರಣದ ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಸೊರೇನ್ ಅವರನ್ನು ಬಂಧಿಸಿತ್ತು. ಇದರಿಂದಾಗಿ ಜನವರಿ 31 ರಂದು ಸೋರೆನ್ ಜಾರ್ಖಂಡ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.