ಅದಾನಿ ಪವರ್ ಲಿಮಿಟೆಡ್ ಜೊತೆಗೆ ವಿಲೀನಗೊಂಡಿರುವ ಉಡುಪಿ ಪವರ್ ಕಾರ್ಪೊರೇಷನ್ ಲಿಮಿಟೆಡ್ (ಯುಪಿಸಿಎಲ್) ನಿಯಮ ಹಾಗೂ ಪರವಾನಗಿಗಳನ್ನು ಉಲ್ಲಂಘಿಸಿ ಉಡುಪಿ ಜಿಲ್ಲೆಯಲ್ಲಿ ಪರಿಸರ ಹಾಗೂ ಜನರ ಆರೋಗ್ಯದ ಮೇಲೆ ಮಾಡಿರುವ ಹಾನಿಗೆ ಪರಿಹಾರವಾಗಿ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್‌ಜಿಟಿ) ಚೆನ್ನೈ ಪ್ರಾದೇಶಿಕ ಪೀಠದ ಆದೇಶದಂತೆ ₹47.02 ಕೋಟಿ ವಸೂಲಿ ಮಾಡಲು ಕೇಂದ್ರ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಮಂಗಳವಾರ ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ವಕೀಲ ಎಸ್ ಉಮಾಪತಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ ಎಂ ಜೋಶಿ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಕೆಲ ಕಾಲ ಅರ್ಜಿ ಆಲಿಸಿದ ಪೀಠವು ಈ ವಿಚಾರ ಈಗಾಗಲೇ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇದೆ. ಅರ್ಜಿದಾರರು ಪ್ರಸ್ತಾಪಿಸಿರುವ ವಿಷಯಗಳು ಗಂಭೀರವಾಗಿರಬಹುದು. ಆದರೆ, ಹಸಿರು ನ್ಯಾಯಾಧಿಕರಣದ ಆದೇಶ ಪಾಲಿಸಲು ನಿರ್ದೇಶನ ನೀಡುವಂತೆ ಕೋರಿದ ಮನವಿಯನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಡಿ ಪರಿಗಣಿಸಲು ಬರುವುದಿಲ್ಲ ಎಂದು ಹೇಳಿ ಅರ್ಜಿಯನ್ನು ವಜಾಗೊಳಿಸಿತು.
ಹಸಿರು ನ್ಯಾಯಾಧಿಕರಣದ ಆದೇಶ ನೀಡಿ ಮೂರು ವರ್ಷ ಕಳೆದರೂ ಪಾಲನೆ ಆಗಿಲ್ಲ. ಗ್ರಾಮಸ್ಥರು ಸಂಕಷ್ಟದಲ್ಲಿದ್ದು, ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣ ಸಹ ಮುಂದುವರಿಯುತ್ತಿಲ್ಲ. ಸರ್ಕಾರ ಹಾಗೂ ಇತರ ಪ್ರಾಧಿಕಾರಗಳು ಮೌನವಹಿಸಿವೆ. ಜಂಟಿ ಸಮಿತಿ ಕೆಲಸ ಮಾಡುತ್ತಿಲ್ಲ. ಆದ್ದರಿಂದ ಸ್ಥಳೀಯ ರೈತರ ಪರವಾಗಿ ಹೈಕೋರ್ಟ್ ಮೆಟ್ಟಿಲೇರಲಾಗಿದೆ ಎಂದು ತಿಳಿಸಲಾಗಿತ್ತು.