Karnataka HC and election 
ಸುದ್ದಿಗಳು

ತಾ.ಪಂ, ಜಿ.ಪಂ ಚುನಾವಣೆ: ಮೀಸಲಾತಿ ನಿಗದಿ ಪ್ರಕ್ರಿಯೆ ಆರಂಭಿಸಲಾಗಿದೆ ಎಂದ ಸರ್ಕಾರ, ಮತ್ತೆ ನಾಲ್ಕು ವಾರ ಕಾಲಾವಕಾಶ

ಅಧಿಕಾರ ವಿಕೇಂದ್ರೀಕರಣದ ಮೂಲಕ ಸ್ಥಳೀಯ ಸಂಸ್ಥೆಗಳಿಗೆ ಸ್ವಾಯತ್ತತೆ ನೀಡುವ ಉದ್ದೇಶದ ಸಂವಿಧಾನದ 73 ಮತ್ತು 74ನೇ ತಿದ್ದುಪಡಿಯಿಂದ ಕರ್ನಾಟಕಕ್ಕೆ ವಿನಾಯಿತಿ ಇದೆಯೇ ಎಂದು ಮೌಖಿಕವಾಗಿ ಪ್ರಶ್ನಿಸಿರುವ ಹೈಕೋರ್ಟ್‌.

Bar & Bench

“ನಾಲ್ಕು ವರ್ಷಗಳಿಂದ ರಾಜ್ಯದಲ್ಲಿ ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ನಡೆದಿಲ್ಲವೇ? ಅಧಿಕಾರ ವಿಕೇಂದ್ರೀಕರಣಕ್ಕೆ ಸಂಬಂಧಿಸಿದ ಸಂವಿಧಾನದ 73 ಮತ್ತು 74ನೇ ತಿದ್ದುಪಡಿಯಿಂದ ಕರ್ನಾಟಕಕ್ಕೆ ವಿನಾಯಿತಿ ಇದೆಯೇ” ಎಂದು ರಾಜ್ಯ ಸರ್ಕಾರವನ್ನು ಕರ್ನಾಟಕ ಹೈಕೋರ್ಟ್ ಮಾರ್ಮಿಕವಾಗಿ ಪ್ರಶ್ನಿಸಿದೆ.

ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಕ್ಷೇತ್ರ ಪುನರ್‌ ವಿಂಗಡಣೆ ಹಾಗೂ ಮೀಸಲಾತಿ ಪ್ರಕಟಿಸಲು ವಿಫಲವಾಗಿರುವ ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಪ್ರಕಟಿಸಲು ಏಕಸದಸ್ಯ ಪೀಠ ಆದೇಶ ಪಾಲಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು 2023ರಲ್ಲಿ ಸಲ್ಲಿಸಲಾದ ಎರಡು ಪ್ರತ್ಯೇಕ ನ್ಯಾಯಾಂಗ ನಿಂದನೆ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ್ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಅರ್ಜಿದಾರರ ಪರ ವಕೀಲ ಮೊಹಮ್ಮದ್ ತಾಹೀರ್ ಅವರು “ಕಳೆದ ನಾಲ್ಕು ವರ್ಷಗಳಿಂದ ರಾಜ್ಯದ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿಗಳು ಆಡಳಿತಾಧಿಕಾರಿಗಳ ಅಧೀನದಲ್ಲಿವೆ. ಕಾನೂನಿನ ಪ್ರಕಾರ ಅವಧಿ ಮುಗಿದ ಆರು ತಿಂಗಳ ಒಳಗೆ ಚುನಾವಣೆ ನಡೆಸಬೇಕು” ಎಂದರು.

ಆಗ ಪೀಠವು “ನಾಲ್ಕು ವರ್ಷಗಳಿಂದ ಚುನಾವಣೆ ನಡೆದಿಲ್ಲವೇ ಎಂದು ಅಚ್ಚರಿ ವ್ಯಕ್ತಪಡಿಸಿತು. ಅಲ್ಲದೆ, ಅಧಿಕಾರ ವಿಕೇಂದ್ರೀಕರಣದ ಮೂಲಕ ಸ್ಥಳೀಯ ಸಂಸ್ಥೆಗಳಿಗೆ ಸ್ವಾಯತ್ತತೆ ನೀಡುವ ಅವುಗಳ ಸ್ವತಂತ್ರ ನಿರ್ವಹಣೆಗೆ ಸಹಕಾರ ನೀಡುವ ಉದ್ದೇಶದ ಸಂವಿಧಾನದ 73 ಮತ್ತು 74ನೇ ತಿದ್ದುಪಡಿಯಿಂದ ಕರ್ನಾಟಕಕ್ಕೆ ವಿನಾಯಿತಿ ಇದೆಯೇ” ಎಂದು ಮಾರ್ಮಿಕವಾಗಿ ಪ್ರಶ್ನಿಸಿದರು.

ಇದಕ್ಕೆ ಸಮಜಾಯಿಷಿ ನೀಡಿದ ಹೆಚ್ಚುವರಿ ಅಡ್ವೋಕೇಟ್ ಜನರಲ್ ಪ್ರತಿಮಾ ಹೊನ್ನಾಪುರ ಅವರು “ಲೋಕಸಭೆ ಚುನಾವಣೆ ಹಾಗೂ ಇನ್ನಿತರ ಕಾರಣಗಳಿಗೆ ತಾ.ಪಂ. ಜಿ.ಪಂ ಚುನಾವಣೆ ವಿಳಂಬವಾಗಿದೆ. ಈಗಾಗಲೇ ರಾಜ್ಯದ ಎಲ್ಲಾ 31 ಜಿ.ಪಂ.ಗಳ ಕ್ಷೇತ್ರ ಪುನರ್‌ವಿಂಗಡಣೆ ಕಾರ್ಯ ಮುಗಿದಿದೆ. ಮೀಸಲಾತಿ ನಿಗದಿಪಡಿಸುವ ಪ್ರಕ್ರಿಯೆ ಪ್ರಾರಂಭವಾಗಿದೆ. ಇದಕ್ಕಾಗಿ ನಾಲ್ಕು ವಾರ ಕಾಲಾವಕಾಶಬೇಕು” ಎಂದು ಕೋರಿದರು.

ಆಗ ಪೀಠವು “ಕ್ಷೇತ್ರ ಪುನರ್‌ ವಿಂಗಡಣೆ, ಮೀಸಲಾತಿ ನಿಗದಿಪಡಿಸುವುದು ಚುನಾವಣಾ ಆಯೋಗದ ಕೆಲಸವಲ್ಲವೇ” ಎಂದು ಪೀಠ ಪ್ರಶ್ನಿಸಿತು.

ಅದಕ್ಕೆ ರಾಜ್ಯ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ ಎನ್‌ ಫಣೀಂದ್ರ ಅವರು ʼಮೊದಲು ಆ ಆಧಿಕಾರ ಆಯೋಗದ ಬಳಿಯೇ ಇತ್ತು. ಅದರಂತೆ ನಾವು ಕ್ಷೇತ್ರ ಪುನರ್‌ವಿಂಗಡಣೆ, ಮೀಸಲಾತಿ ಪ್ರಕ್ರಿಯೆ ಪೂರ್ಣಗೊಳಿಸಿದ್ದೆವು. ಆದರೆ, ರಾಜ್ಯ ಸರ್ಕಾರ ಕಾಯಿದೆಗೆ ತಿದ್ದುಪಡಿ ತಂದು ಆ ಆಧಿಕಾರವನ್ನು ಆಯೋಗದಿಂದ ವಾಪಸ್ ಪಡೆದುಕೊಂಡಿದೆ. ಹೀಗಾಗಿ, ತಾ.ಪಂ. ಜಿ.ಪಂ ಚುನಾವಣೆ ವಿಳಂವಾಗಿದೆ. ಸರ್ಕಾರದ ಈ ಕ್ರಮವನ್ನೂ ಆಯೋಗ ನ್ಯಾಯಾಲಯದಲ್ಲಿ ಪ್ರಶ್ನಿಸಿದೆ. 12 ವಾರಗಳಲ್ಲಿ ಕ್ಷೇತ್ರ ಪುನರ್‌ ವಿಂಗಡಣೆ ಮತ್ತು ಮೀಸಲಾತಿ ಅಂತಿಮಗೊಳಿಸಲಾಗುವುದು ಎಂದು ರಾಜ್ಯ ಸರ್ಕಾರ ನ್ಯಾಾಯಾಲಯಕ್ಕೆ ಭರವಸೆ ನೀಡಿತ್ತು. ಆದರೆ, ವರ್ಷ ಕಳೆದರೂ ಮಾಡಿಲ್ಲ. ಅದಕ್ಕಾಗಿ ನ್ಯಾಾಯಾಂಗ ನಿಂದನೆ ಅರ್ಜಿ ದಾಖಲಿಸಲಾಗಿದೆ” ಎಂದು ತಿಳಿಸಿದರು. ವಾದ-ಪ್ರತಿವಾದ ಆಲಿಸಿದ ಪೀಠವು ವಿಚಾರಣೆಯನ್ನು ಸೆಪ್ಟಂಬರ್ 5ಕ್ಕೆ ಮುಂದೂಡಿತು.