ತಮ್ಮನ್ನು 60 ವರ್ಷ ವಯೋಮಿತಿಯವರೆಗೆ ಉದ್ಯೋಗದಲ್ಲಿ ಮುಂದುವರಿಸಲು ನಿರ್ದೇಶನ ನೀಡುವಂತೆ ಕೋರಿ ಕೇಂದ್ರ ರೇಷ್ಮೆ ಮಂಡಳಿಯ ನೌಕರರು ಸಲ್ಲಿಸಿರುವ ಅರ್ಜಿ ಸಂಬಂಧ ಮಂಡಳಿಗೆ ಕರ್ನಾಟಕ ಹೈಕೋರ್ಟ್ ಸೋಮವಾರ ನೋಟಿಸ್ ಜಾರಿಗೊಳಿಸಿದೆ.
ಕೇಂದ್ರ ರೇಷ್ಮೆ ಮಂಡಳಿ ನೌಕರರ ಸಂಘ ಹಾಗೂ ಸೇವೆಯಿಂದ ಬಿಡುಗಡೆಗೊಳಿಸಲ್ಪಟ್ಟ ಎಸ್ ಶೇಖರ್ ಸೇರಿ ಮಂಡಳಿಯ 32 ಮಂದಿ ನೌಕರರು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
ವಾದ ಆಲಿಸಿದ ಪೀಠವು ಅರ್ಜಿ ಸಂಬಂಧ ಕೇಂದ್ರ ರೇಷ್ಮೆ ಮಂಡಳಿಗೆ ನೋಟಿಸ್ ಜಾರಿಗೊಳಿಸಿತು. ಅಲ್ಲದೇ ಆಕ್ಷೇಪಣೆ ಸಲ್ಲಿಸುವಂತೆ ಮಂಡಳಿಗೆ ನಿರ್ದೇಶನ ನೀಡಿ ವಿಚಾರಣೆಯನ್ನು ಡಿಸೆಂಬರ್ 9ಕ್ಕೆ ಮುಂದೂಡಿತು.
ಅರ್ಜಿದಾರ ನೌಕರರು ಹಲವು ವರ್ಷಗಳಿಂದ ಕೇಂದ್ರ ರೇಷ್ಮೆ ಮಂಡಳಿಯಲ್ಲಿ ವಿವಿಧ ಹುದ್ದೆಗಳಲ್ಲಿ ಕೆಲಸ ಮಾಡಿದ್ದಾರೆ. ಸದ್ಯ 57ರಿಂದ 59 ವಯೋಮಾನದಲ್ಲಿರುವ ಇವರನ್ನು ಸೇವೆಯಿಂದ ಬಿಡುಗಡೆಗೊಳಿಸಲಾಗಿದೆ. ತಮ್ಮನ್ನು 60 ವರ್ಷದವರೆಗೆ ಸೇವೆಯಲ್ಲಿ ಮುಂದುವರಿಸುವಂತೆ ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳ ವಿವಿಧ ದಿನಾಂಕಗಳಲ್ಲಿ ಅರ್ಜಿದಾರರು ಮನವಿ ಸಲ್ಲಿಸಿದ್ದಾರೆ. ಅದನ್ನು ಪರಿಗಣಿಸದ ಹಿನ್ನೆಲೆಯಲ್ಲಿ ಅರ್ಜಿದಾರರು ಈಗ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.