ಹಿರಿಯ ಐಪಿಎಸ್ ಅಧಿಕಾರಿ ಡಿ ರೂಪ ಮೌದ್ಗಿಲ್ ವಿರುದ್ಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ದಾಖಲಿಸಿರುವ ಕ್ರಿಮಿನಲ್ ಮಾನಹಾನಿ ಪ್ರಕರಣವನ್ನು ರದ್ದು ಪಡಿಸಲು ಕರ್ನಾಟಕ ಹೈಕೋರ್ಟ್ ಸೋಮವಾರ ನಿರಾಕರಿಸಿದೆ.
ತಮ್ಮ ವಿರುದ್ಧದ ಪ್ರಕರಣ ರದ್ದು ಕೋರಿ ಡಿ ರೂಪ ಮೌದ್ಗಿಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಆಗಸ್ಟ್ 4ರಂದು ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರ ನೇತೃತ್ವದ ಏಕಸದಸ್ಯ ಪೀಠವು ಇಂದು ಪ್ರಕಟಿಸಿತು. ವಿಸ್ತೃತ ಆದೇಶ ಇನ್ನಷ್ಟೇ ಪ್ರಕಟವಾಗಬೇಕಿದೆ.
2023ರ ಮಾರ್ಚ್ 24ರಂದು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹೂಡಿದ್ದ ಖಾಸಗಿ ಮೊಕದ್ದಮೆಯನ್ನು ಪರಿಗಣಿಸಿದ್ದ ಬೆಂಗಳೂರಿನ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಐಪಿಎಸ್ ಅಧಿಕಾರಿ ಡಿ ರೂಪಾ ಮೌದ್ಗಿಲ್ ಅವರ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಲು ಆದೇಶಿಸಿತ್ತು. ಅಲ್ಲದೇ, ರೂಪಾ ಅವರಿಗೆ ಸಮನ್ಸ್ ಜಾರಿ ಮಾಡಿತ್ತು. ಇದನ್ನು ವಜಾ ಮಾಡಬೇಕು ಎಂದು ರೂಪಾ ಕೋರಿದ್ದರು.
ಅಲ್ಲದೇ, ರೋಹಿಣಿ ಸಿಂಧೂರಿ ಅವರ ಖಾಸಗಿ ದೂರಿನ ಅನ್ವಯ ಭಾರತೀಯ ದಂಡ ಸಂಹಿತೆ ಸೆಕ್ಷನ್ 500ರ ಅಡಿ ಸಂಜ್ಞೇಯ ಪರಿಗಣಿಸಿ, 2023ರ ಮಾರ್ಚ್ 4ರಂದು ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಮಾಡಿರುವ ಆದೇಶವನ್ನು ಬದಿಗೆ ಸರಿಸಬೇಕು. 2023ರ ಫೆಬ್ರವರಿ 28ರಂದು ರೋಹಿಣಿ ಸಿಂಧೂರಿ ಅವರು ದಾಖಲಿಸಿರುವ ಖಾಸಗಿ ದೂರು ಹಾಗೂ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಮುಂದೆ ಬಾಕಿರುವ ಕ್ರಿಮಿನಲ್ ಪ್ರಕರಣವನ್ನು ರದ್ದುಪಡಿಸಬೇಕು ಎಂದೂ ಕೋರಲಾಗಿದೆ.
ಡಿ.ರೂಪಾ ಮೌದ್ಗಿಲ್ ಅವರು 2023ರ ಫೆಬ್ರವರಿ 18 ಮತ್ತು 19ರಂದು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ನನ್ನ ವಿರುದ್ಧ ಕೀಳು ಅಭಿರುಚಿಯಿಂದ ಕೂಡಿದ ಆರೋಪ ಮಾಡಿದ್ದಾರೆ. ವಿದ್ಯುನ್ಮಾನ ಮಾಧ್ಯಮದಲ್ಲೂ ಹೇಳಿಕೆ ನೀಡಿದ್ದಾರೆ. ಆ ಆರೋಪಗಳು ನನ್ನ ವ್ಯಕ್ತಿತ್ವಕ್ಕೆ ಧಕ್ಕೆ ಉಂಟು ಮಾಡುವಂತಿವೆ. ನನ್ನ ತೇಜೋವಧೆ ಮಾಡುವ ದುರದ್ದೇಶದಿಂದಲೇ ರೂಪ ಈ ಕೃತ್ಯ ಎಸಗಿದ್ದಾರೆ. ಅದು ನನ್ನ ಖಾಸಗಿ, ಸಾಮಾಜಿಕ ಮತ್ತು ವೃತ್ತಿ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರಿ, ಮಾನಸಿಕ ಯಾತನೆ ಉಂಟು ಮಾಡಿವೆ ಎಂದು ಆರೋಪಿಸಿ ರೋಹಿಣಿ ಸಿಂಧೂರಿ ಮಾರ್ಚ್ 3ರಂದು ಖಾಸಗಿ ದೂರು ದಾಖಲಿಸಿದ್ದರು.
ಅಲ್ಲದೆ, ಭಾರತೀಯ ನಾಗರಿಕ ಸೇವಾ ನಿಯಮಗಳಿಗೆ ವಿರುದ್ಧವಾಗಿ ಮಾಧ್ಯಮಗಳ ಮುಂದೆ ಬಹಿರಂಗವಾಗಿ ನನ್ನನ್ನು ಟೀಕೆ ಮಾಡುವ ಮೂಲಕ ನನಗೆ ಮಾತ್ರವಲ್ಲದೆ ಸರ್ಕಾರಕ್ಕೂ ಮುಜುಗುರ ಉಂಟು ಮಾಡಿದ್ದಾರೆ. ಆದ್ದರಿಂದ, ನನಗಾಗಿರುವ ಮಾನಸಿಕ ಯಾತನೆ ಮತ್ತು ಮಾನನಷ್ಟಕ್ಕೆ ಒಂದು ಕೋಟಿ ರೂಪಾಯಿ ಪರಿಹಾರ ಕೊಡಿಸಿಕೊಡಬೇಕು. ರೂಪಾ ಅವರ ವಿರುದ್ಧ ಸೂಕ್ತ ದಂಡನೀಯ ಕ್ರಮ ಕೈಗೊಳ್ಳಬೇಕು ಎಂದು ಅರ್ಜಿದಾರೆ ರೋಹಿಣಿ ಸಿಂಧೂರಿ ಕೋರಿದ್ದರು. ಇದನ್ನು ಪುರಸ್ಕರಿಸಿದ್ದ ಅಧೀನ ನ್ಯಾಯಾಲಯವು ಮಾರ್ಚ್‌ನಲ್ಲಿ ರೂಪಾ ಅವರ ವಿರುದ್ಧ ಕ್ರಿಮಿನಲ್ ಮಾನಹಾನಿ ಪ್ರಕರಣ ದಾಖಲಿಸಲು ಆದೇಶಿಸಿತ್ತು. ಇದರ ವಜಾ ಕೋರಿ ರೂಪಾ ಅವರು ಹೈಕೋರ್ಟ್ ಕದ ತಟ್ಟಿದ್ದರು.
ಅರ್ಜಿದಾರರ ಪರವಾಗಿ ವಕೀಲ ಮಧುಕರ್ ದೇಶಪಾಂಡೆ, ರೋಹಿಣಿ ಸಿಂಧೂರಿ ಅವರ ಪರವಾಗಿ ಹಿರಿಯ ವಕೀಲ ಸಿ ವಿ ನಾಗೇಶ್ ವಾದಿಸಿದ್ದರು. ಸಿಂಧೂರಿ ಪರವಾಗಿ ವಕೀಲ ಜಿ ಪ್ರತೀಕ್ ವಕಾಲತ್ತು ವಹಿಸಿದ್ದರು.