ತಾರತಮ್ಯದ ಆರೋಪದಲ್ಲಿ ರಾಜ್ಯ ಸರ್ಕಾರದ ವಿಜ್ಞಾನ-ತಂತ್ರಜ್ಞಾನ ಇಲಾಖೆಯ ಅಧೀನದ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಪರಿಷತ್ತಿಗೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗ ಜಾರಿಗೊಳಿಸಿದ್ದ ನೋಟಿಸ್‌ಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಅಲ್ಪಸಂಖ್ಯಾತರ ಆಯೋಗದ ನೋಟಿಸ್ ಪ್ರಶ್ನಿಸಿ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಪರಿಷತ್ತಿನ ಕಾರ್ಯದರ್ಶಿ ಪ್ರೊ. ಅಶೋಕ್ ಎಂ. ರಾಯಚೂರು ಎಂಬುವರು ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿ ಎಚ್ ಟಿ ನರೇಂದ್ರ ಪ್ರಸಾದ್ ಅವರಿದ್ದ ಏಕಸದಸ್ಯ ಪೀಠ ಬುಧವಾರ ವಿಚಾರಣೆ ನಡೆಸಿತು.
ಕೆಲ ಕಾಲ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ಪೀಠವು ಅಲ್ಪಸಂಖ್ಯಾತರ ಆಯೋಗದ ಕಾರ್ಯದರ್ಶಿ 2025ರ ಜೂನ್ 25ರಂದು ಜಾರಿಗೊಳಿಸಿದ್ದ ನೋಟಿಸ್ ಹಾಗೂ ಅದರ ವಿಚಾರಣೆಗೆ ಮಧ್ಯಂತರ ತಡೆ ನೀಡಿತು. ಅಲ್ಲದೇ, ಅರ್ಜಿ ಸಂಬಂಧ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಆಯೋಗ ಮತ್ತು ದೂರುದಾರ ಡಾ. ಸೈಯದ್ ಸಮೀರ್‌ಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.
ಅರ್ಜಿದಾರರ ಪರ ವಕೀಲರು, ಈ ವಿಚಾರ ಅಲ್ಪಸಂಖ್ಯಾತರ ಆಯೋಗದ ವ್ಯಾಪ್ತಿಗೆ ಬರುವುದಿಲ್ಲ. ಅಷ್ಟಕ್ಕೂ ದೂರುದಾರರು 2022ರಲ್ಲಿ ಇದ್ದ ಪರಿಷತ್ತಿನ ಕಾರ್ಯದರ್ಶಿ ವಿರುದ್ಧ ದೂರು ನೀಡಿದ್ದಾರೆ. ಅದಕ್ಕೆ ಈಗಿನ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಿರುವ ಆಯೋಗ, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ ಎಂದು ತಿಳಿಸಿದರು.
ಇದನ್ನು ಪರಿಗಣಿಸಿದ ಪೀಠವು ಅಲ್ಪಸಂಖ್ಯಾತರ ಆಯೋಗದ ನೋಟಿಸ್ ಹಾಗೂ ಅದಕ್ಕೆ ಸಂಬಂಧಿಸಿದ ವಿಚಾರಣೆಗೆ ಮಧ್ಯಂತರ ತಡೆ ನೀಡಿ ವಿಚಾರಣೆಯನ್ನು ಮುಂದೂಡಿತು.
ತಾರತಮ್ಯ ಮಾಡಲಾಗಿದೆ ಎಂದು ಆರೋಪಿಸಿ ಡಾ. ಸೈಯದ್ ಸಮೀರ್ 2025ರ ಏಪ್ರಿಲ್ 24ರಂದು ಆಯೋಗಕ್ಕೆ ಸಲ್ಲಿಸಿದ್ದ ದೂರು ಆಧರಿಸಿ ಆಯೋಗ ನೋಟಿಸ್ ಜಾರಿಗೊಳಿಸಿತ್ತು. ಅದನ್ನು ಪ್ರಶ್ನಿಸಿ ಪರಿಷತ್ತು ಹೈಕೋರ್ಟ್ ಮೆಟ್ಟೆಲೇರಿದೆ.