ಹಿಜಾಬ್‌ಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ವಿಚಾರಣೆಗೆ ಪಟ್ಟಿ ಮಾಡಲು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಸಮ್ಮತಿ ಸೂಚಿಸಿದ್ದು ಇನ್ನೆರಡು ದಿನ ಕಾಯುವಂತೆ ಅರ್ಜಿದಾರರಿಗೆ ತಿಳಿಸಿದ್ದಾರೆ.
ಮೇಲ್ಮನವಿದಾರರ ಪರವಾಗಿ ಹಿರಿಯ ವಕೀಲೆ ಮೀನಾಕ್ಷಿ ಅರೋರಾ ಪ್ರಕರಣ ಪಟ್ಟಿ ಮಾಡುವಂತೆ ಪ್ರಸ್ತಾಪಿಸಿದಾಗ “ಇಂದು ಪ್ರಕರಣ ಆಲಿಸುವುದಿಲ್ಲ. ದಯವಿಟ್ಟು ಎರಡು ದಿನ ಕಾಯಿರಿ” ಎಂದು ನ್ಯಾ. ರಮಣ ತಿಳಿಸಿದರು. ಹೈಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿಗಳ ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಮಾರ್ಚ್‌ನಲ್ಲಿ ನಿರಾಕರಿಸಿತ್ತು.
ಕಾಲೇಜುಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ (ಶಿರವಸ್ತ್ರ) ಧರಿಸುವುದನ್ನು ನಿಷೇಧಿಸುವ ಕುರಿತಂತೆ ರಾಜ್ಯದ ಸರ್ಕಾರಿ ಕಾಲೇಜುಗಳ ಕಾಲೇಜು ಅಭಿವೃದ್ಧಿ ಸಮಿತಿಗಳಿಗೆ (ಸಿಡಿಸಿ) ಅಧಿಕಾರ ನೀಡುವ ಕರ್ನಾಟಕ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಮಾರ್ಚ್ 15 ರಂದು ಎತ್ತಿಹಿಡಿದಿತ್ತು. ಇಸ್ಲಾಂ ಅಡಿ ಹಿಜಾಬ್ ಧಾರಣೆ ಅಗತ್ಯ ಧಾರ್ಮಿಕ ಆಚರಣೆಯ ಭಾಗವಲ್ಲ ಎಂದು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಮತ್ತು ನ್ಯಾಯಮೂರ್ತಿಗಳಾದ ಕೃಷ್ಣ ಎಸ್ ದೀಕ್ಷಿತ್ ಮತ್ತು ಜೆ ಎಂ ಖಾಜಿ ಅವರಿದ್ದ ಪೀಠ ತಿಳಿಸಿತ್ತು.
ಹೈಕೋರ್ಟ್ ತೀರ್ಪಿನ ವಿರುದ್ಧ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಸೇರಿದಂತೆ ಕನಿಷ್ಠ ಮೂರು ಮೇಲ್ಮನವಿಗಳನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಾಗಿದೆ.