ವಿಧಾನಸಭೆ ಚುನಾವಣೆಯ ವೇಳೆ ಹಿಂದೂಗಳು ಕಾಂಗ್ರೆಸ್ ಪಕ್ಷವನ್ನು ಬಹಿಷ್ಕರಿಸುತ್ತಾರೆ ಎಂಬ ಹೇಳಿಕೆ ನೀಡಿದ್ದ ವಿಜಯಪುರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧದ ಗದಗ ಜಿಲ್ಲಾ ನ್ಯಾಯಾಲಯದಲ್ಲಿನ ಕಾನೂನು ಪ್ರಕ್ರಿಯೆಯನ್ನು ಕರ್ನಾಟಕ ಹೈಕೋರ್ಟ್ ಗುರುವಾರ ರದ್ದುಪಡಿಸಿದೆ.
ಗದಗ ಜಿಲ್ಲೆಯ 1ನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿನ ಖಾಸಗಿ ದೂರು ಮತ್ತು ವಿಚಾರಣಾ ನ್ಯಾಯಾಲಯ ವಿಚಾರಣಾ ಪ್ರಕ್ರಿಯೆ ರದ್ದುಪಡಿಸುವಂತೆ ಕೋರಿ ಶಾಸಕ ಯತ್ನಾಳ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಪುರಸ್ಕರಿಸಿದೆ.
ಯತ್ನಾಳ್ ಪರ ವಕೀಲ ವೆಂಕಟೇಶ್ ದಳವಾಯಿ ಅವರು, ಚುನಾವಣಾ ವಿಚಕ್ಷಣಾ ತಂಡದ ಅಧಿಕಾರಿ ದಾಖಲಿಸಿದ್ದ ಖಾಸಗಿ ದೂರು ಆಧರಿಸಿ ವಿಚಾರಣಾಧೀನ ನ್ಯಾಯಾಲಯವು ಐಪಿಸಿ ಸೆಕ್ಷನ್ 188 ಅಡಿ ಸರ್ಕಾರಿ ಅಧಿಕಾರಿಗಳು ಹೊರಡಿಸಿದ ಆದೇಶ ಉಲ್ಲಂಘಿಸಿದ ಅಪರಾಧದ ಸಂಜ್ಞೇ ತೆಗೆದುಕೊಂಡಿತ್ತು. ಹಾಗೆಯೇ, ಅರ್ಜಿದಾರರಿಗೆ ಸಮನ್ಸ್ ಜಾರಿಗೊಳಿಸಿದೆ. ಆದರೆ, ಈ ಪ್ರಕರಣದಲ್ಲಿ ಐಪಿಸಿ ಸೆಕ್ಷನ್ 188 ಅನ್ವಯಿಸುವುದಿಲ್ಲ. ಹಾಗಾಗಿ, ವಿಚಾರಣಾಧೀನ ನ್ಯಾಯಾಲಯ ಆದೇಶ ರದ್ದುಪಡಿಸಬೇಕು ಎಂದು ಕೋರಿದರು.
ಈ ವಾದ ಪುರಸ್ಕರಿಸಿದ ಪೀಠವು ಅರ್ಜಿದಾರರ ವಿರುದ್ಧದ ಪ್ರಕರಣದ ವಿಚಾರಣೆಗೆ ಅನುಮತಿಸಿದರೆ, ಅದು ಕಾನೂನಿನ ದುರ್ಬಳಕೆಯಾಗಲಿದೆ ಎಂದು ಅಭಿಪ್ರಾಯಪಟ್ಟಿತು. ಬಳಿಕ ಯತ್ನಾಳ್ ಅವರ ವಿರುದ್ಧದ ಖಾಸಗಿ ದೂರು ಮತ್ತು ಅದಕ್ಕೆ ಸಂಬಂಧಿಸಿದ ವಿಚಾರಣಾಧೀನ ನ್ಯಾಯಾಲಯದ ಪ್ರಕ್ರಿಯೆ ರದ್ದುಪಡಿಸಿತು.
ಪ್ರಕರಣದ ಹಿನ್ನೆಲೆ: ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ 2023ರ ಮೇ 2ರಂದು ಗದಗ ನಗರ ಬಿಜೆಪಿ ಅಭ್ಯರ್ಥಿ ಪರ ರೋಡ್ ಶೋ ನಡೆದಿತ್ತು. ಇದಾದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಯತ್ನಾಳ್ ಮಾತನಾಡಿದ್ದರು. 2ಎ ಮೀಸಲಾತಿ ವಿಚಾರವಾಗಿ ಮಾಧ್ಯಮದವರು ಕೇಳಿದ್ದ ಪ್ರಶ್ನೆಗೆ ಉತ್ತರಿಸಿದ್ದ ಯತ್ನಾಳ್ ಅವರು ಹಿಂದೂಗಳು ಕಾಂಗ್ರೆಸ್ ಪಕ್ಷವನ್ನು ಬಹಿಷ್ಕಾರಿಸುತ್ತಾರೆ ಎಂದಿದ್ದರು. ಈ ದೃಶ್ಯಗಳು ಯೂಟ್ಯೂಬ್ ಚಾಲನೆಗಳಲ್ಲಿ ಪ್ರಸಾರವಾಗಿ ವೈರಲ್ ಆಗಿತ್ತು.
ಇದರಿಂದ ಗದಗ ಮತಕ್ಷೇತ್ರದ ಸಂಚಾರ ವಿಚಕ್ಷಣಾ ದಳದ ಅಧಿಕಾರಿಯಾಗಿದ್ದ ಸಹಾಯಕ ಎಂಜಿನಿಯರ್ ಮಂಜುನಾಥ್, ಗದಗ 1ನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿಗೆ ಖಾಸಗಿ ದೂರು ದಾಖಲಿಸಿದ್ದರು. ವಿಚಾರಣಾಧೀನ ನ್ಯಾಯಾಲಯ ಯತ್ನಾಳ್ ಅವರಿಗೆ ಸಮನ್ಸ್ ಜಾರಿಗೊಳಿಸಿ 2023ರ ಮೇ 11ರಂದು ಆದೇಶಿಸಿತ್ತು.