Karnataka High Court
Karnataka High Court 
ಸುದ್ದಿಗಳು

ಭೂಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ನ್ಯಾಯಾಂಗ ಸದಸ್ಯರಾಗಿ ಹುನಗುಂದ ನೇಮಕ: ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

Bar & Bench

ಕರ್ನಾಟಕ ರಾಜ್ಯ ಮಾನವ ಹಕ್ಕು ಆಯೋಗದ (ಕೆಎಸ್‌ಎಚ್‌ಆರ್‌ಸಿ) ಮಾಜಿ ಸದಸ್ಯ ಸಿ ಜೆ ಹುನಗುಂದ ಅವರನ್ನು ಕರ್ನಾಟಕ ಭೂಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ನ್ಯಾಯಾಂಗ ಸದಸ್ಯರನ್ನಾಗಿ ನೇಮಕ ಮಾಡಿರುವ ಕ್ರಮ ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ.

ಬೆಂಗಳೂರಿನ ವಕೀಲ ಎಸ್ ಉಮಾಪತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂ ಜಿ ಎಸ್ ಕಮಲ್ ಅವರ ನೇತೃತ್ವದ ವಿಭಾಗೀಯ ಪೀಠವು ಪ್ರತಿವಾದಿಗಳಾದ ರಾಜ್ಯ ಸರ್ಕಾರ ಮತ್ತು ಸಿ ಜೆ ಹುನಗುಂದ್ ಅವರಿಗೆ ನೋಟಿಸ್ ಜಾರಿ ಮಾಡಿ, ಆಕ್ಷೇಪಣೆ ಸಲ್ಲಿಸಲು ತಿಳಿಸಿ ವಿಚಾರಣೆಯನ್ನು ಮೂರು ವಾರ ಮುಂದೂಡಿದೆ.

ಹುನಗುಂದ ಅವರು ರಾಮನಗರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾಗಿ ನಿವೃತ್ತರಾಗಿದ್ದರು. ಇದಾದ ಬಳಿಕ ಅವರು 2012ರ ನವೆಂಬರ್ 29 ರಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯರಾಗಿದ್ದು, 2017ರ ನವೆಂಬರ್ 28ರಂದು ನಿವೃತ್ತರಾಗಿದ್ದರು.

ಆನಂತರ 2022ರ ಅಕ್ಟೋಬರ್ 20ರಂದು ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ನ್ಯಾಯಾಂಗ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ. ಇದು ಕಾನೂನು ಬಾಹಿರ ಕ್ರಮವಾಗಿದ್ದು, ಈ ನೇಮಕಾತಿ ರದ್ದುಪಡಿಸುವಂತೆ ಕೋರಿ ಅರ್ಜಿದಾರರು 2023ರ ಪ್ರತಿವಾದಿಗಳಿಗೆ ಮನವಿ ಮಾಡಿರುವುದಾಗಿ ಅರ್ಜಿಯಲ್ಲಿ ತಿಳಿಸಲಾಗಿದೆ. ಆದರೂ, ಈವರೆಗೂ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಆದ್ದರಿಂದ ಅವರ ನೇಮಕ ಆದೇಶ ರದ್ದುಪಡಿಸಬೇಕು ಎಂದು ಹೈಕೋರ್ಟ್‌ ಕದತಟ್ಟಿದ್ದಾರೆ.

ಮಾನವ ಹಕ್ಕುಗಳ ಸಂರಕ್ಷಣಾ ಕಾಯಿದೆ ಸೆಕ್ಷನ್ 24(3)ರ ಪ್ರಕಾರ ಯಾವುದೇ ರಾಜ್ಯದ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಮತ್ತು ಸದಸ್ಯರಾದವರು ದೇಶದ ಯಾವುದೇ ರಾಜ್ಯದಲ್ಲಿ ಮತ್ಯಾವುದೇ ಹುದ್ದೆಯನ್ನು ಹೊಂದುವುದಕ್ಕೆ ಅವಕಾಶವಿಲ್ಲ ಎಂದು ತಿಳಿಸಲಾಗಿದೆ.

ಆದರೆ, ಈ ಅಂಶವನ್ನು ಮರೆಮಾಚಿ 2022ರ ಅಕ್ಟೋಬರ್ ತಿಂಗಳಿನಿಂದ ಅನ್ವಯವಾಗುವಂತೆ ಬೆಂಗಳೂರಿನ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ ಎಂದು ಅರ್ಜಿಯಲ್ಲಿ ಆಕ್ಷೇಪಿಸಲಾಗಿದೆ.