Karnataka High Court
Karnataka High Court 
ಸುದ್ದಿಗಳು

ಅನಧಿಕೃತ ಧಾರ್ಮಿಕ ಕಟ್ಟಡ ತೆರವು: 3 ವಾರಗಳಲ್ಲಿ ವಸ್ತುಸ್ಥಿತಿ ವರದಿ ಸಲ್ಲಿಸಲು ಸರ್ಕಾರ, ಬಿಬಿಎಂಪಿಗೆ ಹೈಕೋರ್ಟ್‌ ಆದೇಶ

Bar & Bench

ಬೆಂಗಳೂರು ನಗರದ ಸೇರಿದಂತೆ ರಾಜ್ಯದ ವಿವಿಧ ಭಾಗದಲ್ಲಿ ಸಾರ್ವಜನಿಕ ಸ್ಥಳ ಒತ್ತುವರಿ ಮಾಡಿ ನಿರ್ಮಿಸಿರುವ ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸಿರುವ ಮತ್ತು ತೆರವಿಗೆ ಕೈಗೊಂಡಿರುವ ಕ್ರಮಗಳ ಮಾಹಿತಿಯುಳ್ಳ ಸಮರ್ಪಕ ವಸ್ತುಸ್ಥಿತಿ ವರದಿಯನ್ನು ಮೂರು ವಾರದಲ್ಲಿ ಸಲ್ಲಿಸಬೇಕು ಎಂದು ರಾಜ್ಯ ಸರ್ಕಾರ ಮತ್ತು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ಕರ್ನಾಟಕ ಹೈಕೋರ್ಟ್ ಗುರುವಾರ ನಿರ್ದೇಶಿಸಿದೆ.

ಸಾರ್ವಜನಿಕ ಸ್ಥಳಗಳಲ್ಲಿ ನಿರ್ಮಿಸಲಾಗಿರುವ ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸುವ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನ ಪಾಲಿಸುವುದಕ್ಕಾಗಿ ಹೈಕೋರ್ಟ್ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್‌ ಎಸ್‌.ಕಿಣಗಿ ಅವರ ನೇತೃತ್ವದ ವಿಭಾಗೀಯ ಪೀಠವು ನಡೆಸಿತು.

ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವು ಕಾರ್ಯಚರಣೆ ನಡೆಸಿ ವರದಿ ಸಲ್ಲಿಸುವಂತೆ ಹೈಕೋರ್ಟ್, ಈ ಹಿಂದೆ ನೀಡಿರುವ ಆದೇಶದ ಅನುಪಾಲನಾ ವರದಿ ಸಲ್ಲಿಸಲು ಸ್ವಲ್ಪ ಕಾಲಾವಕಾಶ ನೀಡುವಂತೆ ಸರ್ಕಾರ ಮತ್ತು ಬಿಬಿಎಂಪಿ ಪರ ವಕೀಲರು ಕೋರಿದರು.

ಇದಕ್ಕೆ ಒಪ್ಪಿದ ಪೀಠವು ಹೈಕೋರ್ಟ್ ಹಲವು ಬಾರಿ ನೀಡಿದ ನಿರ್ದೇಶನದ ಹೊರತಾಗಿಯೂ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗದಲ್ಲಿನ ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವಿಗೆ ಸಂಬಂಧಿಸಿದಂತೆ ಬಿಬಿಎಂಪಿ ಮತ್ತು ಸರ್ಕಾರ ಸಮರ್ಪಕವಾದ ವಸ್ತುಸ್ಥಿತಿ ವರದಿ ಸಲ್ಲಿಸಿಲ್ಲ. ಇನ್ನೂ ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವುಗೊಳಿಸುವಲ್ಲಿ ಸಾಕಷ್ಟು ವಿಳಂಬವಾಗಿದೆ. ವಾಸ್ತವವಾಗಿ ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು ತೆರವಿಗೆ ಬಿಡಿಎ, ಬಿಬಿಎಂಪಿ ಮತ್ತು ಸರ್ಕಾರ ಪರಸ್ಪರ ಸಹಕಾರದೊಂದಿಗೆ ಜಂಟಿ ಕಾರ್ಯಾಚರಣೆ ನಡೆಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿತು.

ಅಲ್ಲದೆ, ನಗರದಲ್ಲಿನ ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವು ಕಾರ್ಯಚರಣೆ ಕುರಿತಂತೆ ಬಿಬಿಎಂಪಿ ಮುಖ್ಯ ಆಯುಕ್ತರು ಸಮರ್ಪಕವಾದ ಅಫಿಡವಿಟ್‌ ಸಲ್ಲಿಸಬೇಕು. ಅಂತೆಯೇ, ಸರ್ಕಾರ ಸಹ ವಸ್ತುಸ್ಥಿತಿ ವರದಿ ಸಲ್ಲಿಸಬೇಕು. ಅದರಲ್ಲಿ 2021ರ ಆಗಸ್ಟ್‌ 12ರಿಂದ (ಹೈಕೋರ್ಟ್ ಆದೇಶ ಹೊರಡಿಸಿದ ದಿನ) ವಸ್ತುಸ್ಥಿತಿ ವರದಿ ಸಲ್ಲಿಸುವ ದಿನದವರೆಗೂ ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವಿಗೆ ಏನೆಲ್ಲಾ ಕ್ರಮ ಕೈಗೊಳ್ಳಲಾಗಿದೆ ಎಂಬ ಬಗ್ಗೆ ಮಾಹಿತಿ ಒದಗಿಸಬೇಕು. ತೆರವು ಮಾಡಿರುವ ಅನಧಿಕೃತ ಧಾರ್ಮಿಕ ಕಟ್ಟಡಗಳ ಅಂಕಿ-ಅಂಶಗಳನ್ನು ನಿಗದಿತ ಚಾರ್ಟ್ (ನಕ್ಷೆ) ರೂಪದಲ್ಲಿ ಸಲ್ಲಿಸಬೇಕು ಎಂದು ನಿರ್ದೇಶಿಸಿದ ಪೀಠವು ಅರ್ಜಿ ವಿಚಾರಣೆಯನ್ನು 2023ರ ಜನವರಿ 12ಕ್ಕೆ ಮುಂದೂಡಿತು.