ಸುದ್ದಿಗಳು

ತಿಮರೋಡಿ ವಿರುದ್ಧದ ಶಸ್ತ್ರಾಸ್ತ್ರ ಸಂಗ್ರಹ ಪ್ರಕರಣ: ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ಎರಡು ವಾರ ಕಾಲಾವಕಾಶ

ಶಸ್ತ್ರಾಸ್ತ್ರ ಕಾಯಿದೆ ಅಡಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದು ಕೋರಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ. ಮೊಹಮ್ಮದ್‌ ನವಾಜ್‌ ಅವರ ಹೈಕೋರ್ಟ್‌ನ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

Bar & Bench

ಮನೆಯಲ್ಲಿ ಅನಧಿಕೃತವಾಗಿ ಶಸ್ತ್ರಾಸ್ತ್ರ ಇರಿಸಿಕೊಂಡ ಆರೋಪದಲ್ಲಿ ದಾಖಲಾಗಿರುವ ಎಫ್‌ಐಆರ್‌ ರದ್ದು ಕೋರಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಸೋಮವಾರ ಎರಡು ವಾರ ಕಾಲಾವಕಾಶ ನೀಡಿದೆ. ಇದೇ ವೇಳೆ, ಪ್ರಕರಣದ ತನಿಖೆಗೆ ನೀಡಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಅರ್ಜಿಯ ಮುಂದಿನ ವಿಚಾರಣೆವರೆಗೆ ವಿಸ್ತರಿಸಿದೆ.

ಶಸ್ತ್ರಾಸ್ತ್ರ ಕಾಯಿದೆ ಅಡಿ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ರದ್ದು ಕೋರಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಮೊಹಮ್ಮದ್‌ ನವಾಜ್‌ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ಸರ್ಕಾರದ ಪರ ವಕೀಲರು “ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಹಾಗೂ ತನಿಖೆಗೆ ತಡೆಯಾಜ್ಞೆ ನೀಡಿ ಹೊರಡಿಸಿರುವ ಮಧ್ಯಂತರ ಆದೇಶ ತೆರವಿಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಬೇಕು” ಎಂದು ಮನವಿ ಮಾಡಿದರು.

ಇದನ್ನು ಪರಿಗಣಿಸಿದ ಪೀಠವು ವಿಚಾರಣೆಯನ್ನು ಎರಡು ವಾರ ಮುಂದೂಡಿತಲ್ಲದೆ, ಪ್ರಕರಣದ ತನಿಖೆಗೆ ತಡೆಯಾಜ್ಞೆ ನೀಡಿ ಅಕ್ಟೋಬರ್ 24ರಂದು ಹೊರಡಿಸಿದ್ದ ಮಧ್ಯಂತರ ಆದೇಶವನ್ನು ಅರ್ಜಿಯ ಮುಂದಿನ ವಿಚಾರಣೆವರೆಗೆ ವಿಸ್ತರಿಸಿತು.

ಪ್ರಕರಣದ ಹಿನ್ನೆಲೆ: ಧರ್ಮಸ್ಥಳದಲ್ಲಿ ನೂರಾರು ಶವಗಳ ಸಾಮೂಹಿಕ ಅಂತ್ಯಸಂಸ್ಕಾರ ದೂರಿಗೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎಸ್‌ಐಟಿ ಪೊಲೀಸರು, 2025ರ ಆಗಸ್ಟ್ 26ರಂದು ಉಜಿರೆಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ನಿವಾಸದಲ್ಲಿ ಶೋಧ ನಡೆಸಿದ ವೇಳೆ ಎರಡು ತಲವಾರುಗಳು ಮತ್ತು ಒಂದು ಬಂದೂಕು ಸೇರಿ ಒಟ್ಟು 44 ವಸ್ತುಗಳನ್ನು ವಶಪಡಿಸಿಕೊಂಡಿದ್ದರು. ಈ ಬಗ್ಗೆ ತನಿಖಾ ತಂಡ ಬೆಳ್ತಂಗಡಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿತ್ತು. ನಂತರ ಎಸ್‌ಐಟಿ ಅಧಿಕಾರಿ ಸೈಮನ್‌ ಅವರು ಸೆಪ್ಟೆಂಬರ್ 16ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿ, ತಿಮರೋಡಿ ತಮ್ಮ ಮನೆಯಲ್ಲಿ ಅಕ್ರಮವಾಗಿ ಮಾರಕಾಸ್ತ್ರಗಳನ್ನು ಸಂಗ್ರಹಿಸಿಟ್ಟಿರುವ ಬಗ್ಗೆ ಮುಂದಿನ ತನಿಖೆ ನಡೆಸಬೇಕು ಎಂದು ಕೋರಿದ್ದರು. ಈ ದೂರಿನ ಆಧಾರದ ಮೇಲೆ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಶಸ್ತ್ರಾಸ್ತ್ರ ಕಾಯಿದೆ ಅಡಿ ಎಫ್‌ಐಆರ್‌ ದಾಖಲಿಸಲಾಗಿತ್ತು.

ಎಫ್ಐಆರ್ ರದ್ದು ಕೋರಿ ತಿಮರೋಡಿ ಸಲ್ಲಿಸಿದ್ದ ಅರ್ಜಿಯನ್ನು ಅಕ್ಟೋಬರ್ 16ರಂದು ವಿಚಾರಣೆ ನಡೆಸಿದ್ದ ಹೈಕೋರ್ಟ್ ಬೆಳ್ತಂಗಡಿ ಠಾಣೆ ಪೊಲೀಸರು ಹಾಗೂ ಪ್ರಕರಣದ ದೂರುದಾರಾಗಿರುವ ಎಸ್‌ಐಟಿ ಪೊಲೀಸ್‌ ಅಧಿಕಾರಿ ಸಿ ಎ ಸೈಮನ್‌ ಅವರಿಗೆ ನೋಟಿಸ್‌ ಜಾರಿಗೊಳಿಸಿತಲ್ಲದೆ, ಪ್ರಕರಣದ ತನಿಖೆಗೆ ತಡೆ ನೀಡಿತ್ತು.