ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಣ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಯೂನಿಯನ್ ಬ್ಯಾಂಕ್ ಇಂಡಿಯಾ ಅಧಿಕಾರಿಗಳ ವಿರುದ್ದ ತನಿಖೆ ಆರಂಭಿಸಿರುವ ಕೇಂದ್ರೀಯ ತನಿಖಾ ದಳವು (ಸಿಬಿಐ) ಮುಂದಿನ ವಿಚಾರಣೆಯ ವೇಳೆಗೆ ತನಿಖೆಯ ಸ್ಥಿತಿಗತಿ ವರದಿ ಸಲ್ಲಿಸಬೇಕು ಎಂದು ಸಿಬಿಐಗೆ ಮಂಗಳವಾರ ಕರ್ನಾಟಕ ಹೈಕೋರ್ಟ್ ನಿರ್ದೇಶಿಸಿದೆ.
ಬಿಜೆಪಿಯ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ರಮೇಶ ಜಾರಕಿಹೊಳಿ, ಮಾಜಿ ಶಾಸಕರಾದ ಅರವಿಂದ ಲಿಂಬಾವಳಿ ಮತ್ತು ಕುಮಾರ್ ಬಂಗಾರಪ್ಪ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
ಸಿಬಿಐ ಪ್ರತಿನಿಧಿಸಿದ್ದ ವಿಶೇಷ ಸರ್ಕಾರಿ ಅಭಿಯೋಜಕ ಪಿ ಪ್ರಸನ್ನಕುಮಾರ್ ಅವರು “ತನಿಖೆಯ ವಸ್ತುಸ್ಥಿತಿ ವರದಿಯನ್ನು ನ್ಯಾಯಾಲಯಕ್ಕೆ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲಾಗಿದ್ದು, ತನಿಖೆ ನಡೆಯುತ್ತಿದೆ. ರಜಾಕಾಲದ ಬಳಿಕ ವಿಚಾರಣೆ ನಡೆಸಬಹುದು. ಮೂರು ವಾರಗಳ ಬಳಿಕ ತನಿಖೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯ ಸ್ಥಿತಿಗತಿ ವರದಿ ಸಲ್ಲಿಸಲಾಗುವುದು” ಎಂದರು.
ಇದನ್ನು ಆಲಿಸಿದ ಪೀಠವು “ಸಿಬಿಐ ವಕೀಲ ಪ್ರಸನ್ನಕುಮಾರ್ ತನಿಖೆಯೆ ವಸ್ತುಸ್ಥಿತಿ ವರದಿ ಸಲ್ಲಿಸಿದ್ದು, ಅದನ್ನು ಪರಿಶೀಲಿಸಲಾಗಿದೆ. ಅದರಲ್ಲಿ ತನಿಖೆ ಆರಂಭವಾಗಿದೆ ಎಂದು ಹೇಳಲಾಗಿದೆ. ತನಿಖೆಯ ಮುಂದಿನ ಸ್ಥಿತಿಗತಿಯನ್ನು ಮುಂದಿನ ವಿಚಾರಣೆಯ ವೇಳೆಗೆ ಸಿಬಿಐ ಸಲ್ಲಿಸಬೇಕು” ಎಂದು ನ್ಯಾಯಾಲಯ ಆದೇಶಿಸಿದೆ. ವಿಚಾರಣೆಯನ್ನು ಜನವರಿ 16ಕ್ಕೆ ಮುಂದೂಡಿತು.
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (ಕೆಎಂವಿಎಸ್‌ಟಿಡಿಸಿಎಲ್) ಹಣ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಕೆಲವು ಅಧಿಕಾರಿಗಳ ವಿರುದ್ಧ ಕೇಂದ್ರೀಯ ತನಿಖಾ ದಳವು ಜೂನ್ 3ರಂದು ದಾಖಲಿಸಿಕೊಂಡಿರುವ ಎಫ್‌ಐಆರ್ ಸಂಬಂಧ ತನಿಖೆ ಚುರುಕುಗೊಳಿಸಿ, ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಬೇಕು ಎಂದು ಅರ್ಜಿದಾರರು ಕೋರಿದ್ದರು. ಅಲ್ಲದೆ, ಸಿಬಿಐ ಅಂತಿಮ ವರದಿ ಸಲ್ಲಿಸದ ತಕ್ಷಣ ಸಿಬಿಐ ವಿಶೇಷ ನ್ಯಾಯಾಲಯವು ಪ್ರಕ್ರಿಯೆ ಆರಂಭಿಸಲು ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದರು.