Lord Ram statue 
ಸುದ್ದಿಗಳು

"ಮಸೀದಿಯೊಳಗೆ 'ಜೈ ಶ್ರೀ ರಾಮ್' ಎಂದು ಕೂಗುವುದು ಅಪರಾಧವೇ?" ನಿರ್ಧರಿಸಲಿದೆ ಸುಪ್ರೀಂ ಕೋರ್ಟ್

ಮಸೀದಿಯೊಳಗೆ ‘ಜೈ ಶ್ರೀರಾಮ್ ಘೋಷಣೆ ಕೂಗುವುದರಿಂದ ಧಾರ್ಮಿಕ ಭಾವನೆಗಳಿಗೆ ಘಾಸಿಯಾಗುವುದಿಲ್ಲ ಎಂದು ಸೆಪ್ಟೆಂಬರ್ 13ರಂದು, ಕರ್ನಾಟಕ ಹೈಕೋರ್ಟ್ ಹೇಳಿತ್ತು. ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲಾಗಿದೆ.

Bar & Bench

ಮಸೀದಿಯೊಳಗೆ ʼಜೈ ಶ್ರೀ ರಾಮ್ʼ ಎಂದು ಕೂಗಿದರೆ ಅದರಿಂದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲಾಗಿದೆ. 

ಬೇರೆಯವರ ಧಾರ್ಮಿಕ ನಂಬಿಕೆಗಳನ್ನು ಅಪಮಾನಿಸಿದ ಆರೋಪಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ವ್ಯಕ್ತಿಗಳ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು ಸೆಪ್ಟೆಂಬರ್ 13ರಂದು ರದ್ದುಗೊಳಿಸಿದ್ದ ಕರ್ನಾಟಕ ಹೈಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿತ್ತು.

ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಪಂಕಜ್ ಮಿತ್ತಲ್‌ ಮತ್ತು ಸಂದೀಪ್ ಮೆಹ್ತಾ ಅವರಿರುವ ಪೀಠ ಡಿಸೆಂಬರ್ 16 ರಂದು ಕೈಗೆತ್ತಿಕೊಳ್ಳಲಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಐತ್ತೂರು ಗ್ರಾಮದ ಕಡಬ- ಮರ್ದಾಳ ರಸ್ತೆಯಲ್ಲಿರುವ ಮಸೀದಿ ಆವರಣಕ್ಕೆ ನುಗ್ಗಿದ್ದ  ಕೀರ್ತನ್ ಕುಮಾರ್ ಮತ್ತು ಸಚಿನ್ ಕುಮಾರ್  ʼಜೈ ಶ್ರೀ ರಾಮ್ʼ ಎಂದು ಕೂಗಿದ್ದರು ಹಾಗೂ ಬ್ಯಾರಿಗಳನ್ನು (ಮುಸ್ಲಿಮರು) ಶಾಂತಿಯಿಂದ ಬದುಕಲು ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದರು ಎಂಬುದಾಗಿ ಆರೋಪಿಸಲಾಗಿತ್ತು.

ಐಪಿಸಿ ಸೆಕ್ಷನ್‌ 295A (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದ ಕೃತ್ಯಗಳು), 447 (ಅತಿಕ್ರಮಣ) ಮತ್ತು 506 (ಕ್ರಿಮಿನಲ್‌ ಬೆದರಿಕೆ) ಆರೋಪಕ್ಕೆ ಸಂಬಂಧಿಸಿದಂತೆ ಈ ಇಬ್ಬರನ್ನು ಪೊಲೀಸರು ಬಂಧಿಸಿದ್ದರು. ತಮ್ಮ ವಿರುದ್ಧದ ಮೊಕದ್ದಮೆ ರದ್ದುಗೊಳಿಸುವಂತೆ ಕೋರಿ ಬಳಿಕ ಅವರಿಬ್ಬರೂ ಕರ್ನಾಟಕ ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಸೆ. 13ರಂದು ನೀಡಿದ್ದ ತೀರ್ಪಿನಲ್ಲಿ ಹೈಕೋರ್ಟ್‌ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ಇಬ್ಬರ ವಿರುದ್ಧದ ಪ್ರಕರಣ ರದ್ದುಗೊಳಿಸಿದ್ದರು. “ಅರ್ಜಿದಾರರ ವಿರುದ್ಧ ಐಪಿಸಿ ಸೆಕ್ಷನ್ 295 ಎ ( ಧರ್ಮ, ಧಾರ್ಮಿಕ ಭಾವನೆ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವುದು) ಅಡಿಯಲ್ಲಿ ದೂರು ದಾಖಲಿಸಲಾಗಿದೆ. ಜೈ ಶ್ರೀರಾಮ್ ಎಂದು ಘೋಷಣೆ ಕೂಗುವುದು ಧಾರ್ಮಿಕ ಭಾವನೆಗೆ ಹೇಗೆ ಧಕ್ಕೆಯಾಗುತ್ತದೆ ಎಂದು ಅರ್ಥವಾಗುತ್ತಿಲ್ಲ. ಜೊತೆಗೆ ಪ್ರಕರಣದಲ್ಲಿ ಯಾವುದೇ ಅಪರಾಧ ಕಂಡು ಬರುತ್ತಿಲ್ಲ. ಹೀಗಿರುವಾಗ ಅರ್ಜಿದಾರರ ವಿರುದ್ಧ ಮುಂದಿನ ಪ್ರಕ್ರಿಯೆಗಳಿಗೆ ಅನುಮತಿ ನೀಡುವುದು ಕಾನೂನಿನ ಪ್ರಕ್ರಿಯೆಯ ದುರುಪಯೋಗವಾಗುತ್ತದೆ” ಎಂದಿದ್ದರು.

ಪ್ರಕರಣದಲ್ಲಿ ಆಪಾದಿತ ಕೃತ್ಯ ಸಾರ್ವಜನಿಕ ಸುವ್ಯವಸ್ಥೆಯ ಮೇಲೆ ಯಾವುದೇ ವ್ಯತಿರಿಕ್ತ ಪರಿಣಾಮ ಬೀರಿಲ್ಲ ಎಂದು ಹೈಕೋರ್ಟ್ ಹೇಳಿತ್ತು. ಮಹೇಂದ್ರ ಸಿಂಗ್ ಧೋನಿ ಮತ್ತು ಯರ್ರಗುಂಟ್ಲ ಶ್ಯಾಮಸುಂದರ್ (2017) ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ ತೀರ್ಪನ್ನು ಉಲ್ಲೇಖಿಸಿದ್ದ ಪೀಠವು ಸಾರ್ವಜನಿಕ ಸುವ್ಯವಸ್ಥೆಯ ಮೇಲೆ ಕೆಟ್ಟ ಪರಿಣಾಮ ಬೀರದ ಹೋರತಾಗಿ ಯಾವುದೇ ಪ್ರಕರಣವು ಭಾರತೀಯ ದಂಡ ಸಂಹಿತೆ ಸೆಕ್ಷನ್ 295 ಎ ಅಡಿಯಲ್ಲಿ ಅಪರಾಧವಾಗುವುದಿಲ್ಲ ಎಂದಿತ್ತು. ಇದನ್ನು ದೂರುದಾರರು ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ನಿಷ್ಠುರ ನೆಲೆಯಲ್ಲಿ ತೀರ್ಪು ನೀಡಿದ್ದು ಕ್ರಿಮಿನಲ್ ಪ್ರಕರಣಗಳನ್ನು ರದ್ದುಗೊಳಿಸುವ ಅರ್ಜಿಗಳನ್ನು ಹೇಗೆ ನಿಭಾಯಿಸಬೇಕು ಎಂಬ ಕುರಿತಾದ ಅದರ ನಡೆ ಸುಪ್ರೀಂ ಕೋರ್ಟ್ ತೀರ್ಪುಗಳಿಗೆ ವಿರುದ್ಧವಾಗಿದೆ ಎಂದು ದೂರಿನಲ್ಲಿ ಪ್ರಸ್ತಾಪಿಸಲಾಗಿದೆ.

ಪ್ರಕರಣದ ಆರೋಪಗಳು ಮೇಲ್ನೋಟಕ್ಕೆ ಅಪರಾಧ ನಡೆದಿರುವುದನ್ನು ಸೂಚಿಸುತ್ತದೆ. ತನಿಖೆಯ ಹಂತದಲ್ಲಿ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಗೊಳಿಸುವುದನ್ನು ಸುಪ್ರೀಂ ಕೋರ್ಟ್ ಪದೇ ಪದೇ ನಿರಾಕರಿಸಿದೆಎಂದು ಅವರು ಪ್ರತಿಪಾದಿಸಿದ್ದಾರೆ.

ಇದಲ್ಲದೆ, ಮಸೀದಿಯೊಳಗೆ 'ಜೈ ಶ್ರೀ ರಾಮ್' ಎಂದು ಕೂಗುವುದು ಧಾರ್ಮಿಕ ವರ್ಗವನ್ನು ಅವಮಾನಿಸುತ್ತದೆಯೇ ಎಂಬುದು ಅರ್ಥವಾಗುತ್ತಿಲ್ಲ ಎಂಬ ಹೈಕೋರ್ಟ್‌ ನಿಲುವಿಗೆ ದೂರುದಾರರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆಪಾದಿತರು ಮಸೀದಿಯೊಳಗೆ ಅತಿಕ್ರಮ ಪ್ರವೇಶ ಮಾಡುವ ಮೂಲಕ ಇಂತಹ ಹೇಳಿಕೆಗಳನ್ನು ನೀಡಿದ್ದಾರೆ. ಮುಸ್ಲಿಂ ಸಮುದಾಯಕ್ಕೆ ಬೆದರಿಕೆ ಹಾಕಲಾಗಿದೆ ಎಂಬ ಅಂಶವನ್ನು ನಿರ್ಲಕ್ಷಿಸಲಾಗಿದೆ. ಎಂದು ಮನವಿಯಲ್ಲಿ ಹೇಳಲಾಗಿದೆ.

ವಕೀಲ ಜಾವೇದ್‌ ಉರ್ ರೆಹಮಾನ್ ಅವರ ಮೂಲಕ ಮನವಿ ಸಲ್ಲಿಸಲಾಗಿದೆ.