ಮಹಿಳೆ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಸಂತ್ರಸ್ತ ಮಹಿಳೆಯನ್ನು ಅಪಹರಿಸಿದ ಆರೋಪ ಸಂಬಂಧ ಕ್ರಮವಾಗಿ ಹಾಸನದ ಹೊಳೆನರಸೀಪುರ ಮತ್ತು ಮೈಸೂರು ಜಿಲ್ಲೆಯ ಕೆ ಆರ್ ನಗರ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಎರಡು ಪ್ರತ್ಯೇಕ ಎಫ್‌ಐಆರ್‌ಗಳನ್ನು ರದ್ದುಪಡಿಸುವಂತೆ ಜೆಡಿಎಸ್ ಶಾಸಕರಾಗಿರುವ ಪ್ರಕರಣದ ಮೊದಲ ಆರೋಪಿ ಎಚ್ ಡಿ ರೇವಣ್ಣ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಈ ಮಧ್ಯೆ, ರೇವಣ್ಣಗೆ ಜಾಮೀನು ಮಂಜೂರು ಮಾಡಿರುವುದನ್ನು ಪ್ರಶ್ನಿಸಿ ರಾಜ್ಯ ಸರ್ಕಾರವು ಹೈಕೋರ್ಟ್ ಕದತಟ್ಟಿದೆ. ಈ ಅರ್ಜಿಗಳು ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.
ಎಚ್ ಡಿ ರೇವಣ್ಣ ಅವರು ಎರಡು ಪ್ರತ್ಯೇಕ ಕ್ರಿಮಿನಲ್ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಿರುವ ಕೆ ಆರ್ ನಗರ ಠಾಣಾ ಪೊಲೀಸರು (ಸದ್ಯ ತನಿಖೆ ನಡೆಸುತ್ತಿರುವ ಸಿಐಡಿ ಎಸ್‌ಐಟಿ ಅಧಿಕಾರಿಗಳು) ಮತ್ತು ದೂರುದಾರ ಎಚ್ ಡಿ ರಾಜು ಅವರನ್ನು ಪ್ರತಿವಾದಿ ಮಾಡಲಾಗಿದೆ.
ಅಂತೆಯೇ, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಿರುವ ಹೊಳೆನರಸೀಪುರ ಠಾಣೆಯ ಪೊಲೀಸರು (ಸದ್ಯ ತನಿಖೆ ನಡೆಸುತ್ತಿರುವ ಸಿಐಡಿ ಎಸ್‌ಐಟಿ ಅಧಿಕಾರಿಗಳು) ಮತ್ತು ದೂರುದಾರ ಮಹಿಳೆಯನ್ನು ಪ್ರತಿವಾದಿ ಮಾಡಿದ್ದಾರೆ.
ಮಹಿಳೆಯ ಅಪಹರಣ ಆರೋಪ ಸಂಬಂಧ ಕೆ ಆರ್ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಎಚ್ ಡಿ ರೇವಣ್ಣ ಅವರಿಗೆ ಜಾಮೀನು ನೀಡಿ ಜನಪ್ರತಿನಿಧಿಗಳ ವಿಶೇಷ ಸತ್ರ ನ್ಯಾಯಾಲಯವು 2024ರ ಮೇ 13ರಂದು ಹೊರಡಿಸಿದ ಆದೇಶ ರದ್ದುಪಡಿಸಬೇಕು ಎಂದು ಕೋರಿ ರಾಜ್ಯ ಸರ್ಕಾರ (ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ-ಎಸ್‌ಐಟಿ ಅಧಿಕಾರಿಗಳು) ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.
ಅಪಹರಣ ಪ್ರಕರಣವು ಗಂಭೀರ ಸ್ವರೂಪದಿಂದ ಕೂಡಿದೆ. ಪ್ರಕರಣದಲ್ಲಿ ರೇವಣ್ಣ ಅವರ ಪಾತ್ರವೂ ಇದೆ. ಪ್ರಕರಣ ಇನ್ನೂ ತನಿಖಾ ಹಂತದಲ್ಲಿದೆ. ಆರೋಪಿಗಳ ಹಾಗೂ ಸಾಕ್ಷಿಗಳ ಹೆಚ್ಚಿನ ವಿಚಾರಣೆ ನಡೆಸಬೇಕಿದೆ. ಆರೋಪಿಗೆ ಜಾಮೀನು ಲಭ್ಯವಾಗಿರುವುದರಿಂದ ತನಿಖೆ ಮೇಲೆ ಪ್ರಭಾವ ಬೀರಬಹುದು. ಹೀಗಾಗಿ, ರೇವಣ್ಣ ಅವರಿಗೆ ನೀಡಲಾಗಿರುವ ಜಾಮೀನು ರದ್ದುಪಡಿಸಬೇಕು ಎಂದು ಎಸ್‌ಐಟಿ ಪೊಲೀಸರು ಮನವಿ ಮಾಡಿದ್ದಾರೆ. ಈ ಅರ್ಜಿಯಲ್ಲಿ ಆರೋಪಿ ಎಚ್ ಡಿ ರೇವಣ್ಣ ಅವರನ್ನು ಪ್ರತಿವಾದಿ ಮಾಡಲಾಗಿದೆ.
ರೇವಣ್ಣ ಆಕ್ಷೇಪ: ತಾವು ಯಾವುದೇ ಅಪರಾಧ ಕೃತ್ಯ ಎಸಗಿಲ್ಲ. ರಾಜಕೀಯ ಪ್ರೇರಿತ ಮತ್ತು ದುರುದ್ದೇಶದಿಂದ ತಮ್ಮ ವಿರುದ್ಧ ದೂರು ದಾಖಲಿಸಲಾಗಿದೆ. ಪ್ರಕರಣದಲ್ಲಿ ಹುರುಳಿಲ್ಲ. ದೂರಿನ ಅಂಶಗಳು ಕಟ್ಟುಕತೆಯಂತಿವೆ. ಆದ್ದರಿಂದ, ಎಫ್‌ಐಆರ್ ರದ್ದುಪಡಿಸಬೇಕು ಎಂದು ರೇವಣ್ಣ ಕೋರಿದ್ದಾರೆ. ಅರ್ಜಿ ಇತ್ಯರ್ಥವಾಗುವರೆಗೂ ಎಫ್‌ಐಆರ್, ಪ್ರಕರಣದ ತನಿಖೆ ಹಾಗೂ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಚಾರಣೆಗೆ ತಡೆಯಾಜ್ಞೆ ನೀಡಬೇಕು ಎಂದು ಮಧ್ಯಂತರ ಮನವಿ ಮಾಡಲಾಗಿದೆ.