Chief Justice Vibhu Bakhru & Justice CM Joshi 
ಸುದ್ದಿಗಳು

ಸಾರಿಗೆ ನೌಕರರ ಮುಷ್ಕರ ವಾಪಸ್: ಪಿಐಎಲ್ ಇತ್ಯರ್ಥಪಡಿಸಿದ ಹೈಕೋರ್ಟ್

ಸರ್ಕಾರ ಮತ್ತು ಕಾರ್ಮಿಕರ ನಡುವೆ ಸಂಧಾನ ಮುಂದುವರಿಯಲಿ. ಸದ್ಯ ಮುಷ್ಕರ ಹಿಂಪಡೆಯಲಾಗಿದೆ. ಆದ್ದರಿಂದ, ಪಿಐಎಲ್ ಇತ್ಯರ್ಥಪಡಿಸಲಾಗುತ್ತಿದೆ ಎಂದ ನ್ಯಾಯಾಲಯ.

Bar & Bench

ಹಿಂಬಾಕಿ ಪಾವತಿ ಮತ್ತು ವೇತನ ಪರಿಷ್ಕರಣೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್ಆರ್‌ಟಿಸಿ ಕಾರ್ಮಿಕ ಸಂಘಟನೆಗಳು ನೀಡಿದ್ದ ಮುಷ್ಕರವನ್ನು ಹಿಂಪಡೆಯಲಾಗಿದೆ ಎಂಬ ಹೇಳಿಕೆ ಪರಿಗಣಿಸಿ, ಮುಷ್ಕರ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಗುರುವಾರ ಇತ್ಯರ್ಥಪಡಿಸಿದೆ.

ಮುಷ್ಕರದಿಂದ ಜನಸಾಮಾನ್ಯರಿಗೆ ತೊಂದರೆ ಉಂಟಾಗುವುದರಿಂದ ಮುಷ್ಕರ ನಡೆಸದಂತೆ ಕೆಎಸ್ಆರ್‌ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಗೆ ಆದೇಶಿಸುವಂತೆ ಕೋರಿ ಬೆಂಗಳೂರಿನ ಜೆ ಸುನೀಲ್‌ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ ಎಂ ಜೋಶಿ ಅವರ ನೇತೃತ್ವದ ವಿಭಾಗೀಯ ಪೀಠ ನಡೆಸಿತು.

ಕಾರ್ಮಿಕ ಸಂಘಟನೆಗಳ ಪರ ವಕೀಲರು ಸದ್ಯ ಮುಷ್ಕರ ನಿಲ್ಲಿಸಲಾಗಿದೆ ಎಂದು ಮಾಹಿತಿ ನೀಡಿ, ಆ ಕುರಿತ ನಿರ್ಣಯವನ್ನು ಪೀಠಕ್ಕೆ ಸಲ್ಲಿಸಿದರು.

ಸರ್ಕಾರದ ಪರ ವಕೀಲೆ ನಿಲೋಫಕರ್‌ ಅಕ್ಬರ್‌ ಅವರು “ಕಾರ್ಮಿಕರ ಜತೆ ಸಂಧಾನ ಮುಂದುವರಿಯುತ್ತಿದೆ. ಇಂದೂ ಸಹ ಮಾತುಕತೆ ನಡೆದಿದ್ದು, ಆಗಸ್ಟ್ 28ಕ್ಕೆ ಮತ್ತೆ ಸಂಧಾನ ಸಭೆ ನಡೆಯಲಿದೆ” ಎಂದು ತಿಳಿಸಿದರು.

ಅರ್ಜಿದಾರರ ಪರ ವಕೀಲೆ ದೀಕ್ಷಾ ಅಮೃತೇಶ್ ಅವರು “ಸದ್ಯ ಮುಷ್ಕರ ನಿಲ್ಲಿಸಿದ್ದರೂ ಮುಂದಿನ ದಿನಗಳಲ್ಲಿ ಇದೇ ಪರಿಸ್ಥಿತಿ ಮರುಕಳಿಸುವ ಸಾಧ್ಯತೆ ಇದೆ. ಆದ್ದರಿಂದ, ಪ್ರಕರಣ ಸಂಬಂಧ ನಿರ್ಧಾರ ಕೈಗೊಳ್ಳಲು ಸರ್ಕಾರಕ್ಕೆ ಕಾಲಮಿತಿ ನಿಗದಿಪಡಿಸಬೇಕು” ಎಂದು ಮನವಿ ಮಾಡಿದರು.

ಎಲ್ಲರ ವಾದ ಆಲಿಸಿದ ಪೀಠವು ಸರ್ಕಾರ ಮತ್ತು ಕಾರ್ಮಿಕರ ನಡುವೆ ಸಂಧಾನ ಮುಂದುವರಿಯಲಿ. ಸದ್ಯ ಮುಷ್ಕರ ಹಿಂಪಡೆಯಲಾಗಿದೆ. ಆದ್ದರಿಂದ, ಪಿಐಎಲ್ ಇತ್ಯರ್ಥಪಡಿಸಲಾಗುವುದು ಎಂದು ತಿಳಿಸಿ, ಅರ್ಜಿ ವಿಲೇವಾರಿ ಮಾಡಿತು.