Justice Arun Mishra
Justice Arun Mishra 
ಸುದ್ದಿಗಳು

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಲಿದ್ದಾರೆಯೇ ನ್ಯಾ.ಅರುಣ್‌ ಮಿಶ್ರಾ?

Bar & Bench

ಸುಪ್ರೀಂಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಅರುಣ್ ಮಿಶ್ರಾ ಅವರು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗುವ ಸಾಧ್ಯತೆ ಇದೆ ಎಂದು ರಾಷ್ಟ್ರೀಯ ಆಂಗ್ಲ ದೈನಿಕವೊಂದು ವರದಿ ಮಾಡಿದೆ. ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಯಾಗಿದ್ದ ಅರುಣ್‌ ಮಿಶ್ರಾ ಸೆಪ್ಟೆಂಬರ್ 3, 2020 ರಂದು ನಿವೃತ್ತರಾಗಿದ್ದರು.

ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಾಜ್ಯಸಭೆಯ ಉಪಸಭಾಪತಿ ಹರಿವಂಶ್, ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಹಾಗೂ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರನ್ನೊಳಗೊಂಡ ಸಮಿತಿ ನ್ಯಾಯಮೂರ್ತಿ ಮಿಶ್ರಾ ಅವರ ಹೆಸರನ್ನು ಶಿಫಾರಸು ಮಾಡಿದೆ. ಈ ನೇಮಕಾತಿಗೆ ಖರ್ಗೆ ವಿರೋಧ ವ್ಯಕ್ತಪಡಿಸಿದ್ದರು ಎಂದು ದಿನಪತ್ರಿಕೆ ವರದಿ ಮಾಡಿದೆ.

ನ್ಯಾಯಮೂರ್ತಿ ಅರುಣ್ ಮಿಶ್ರಾ 1978 ರಲ್ಲಿ ವಕೀಲರಾಗಿ ನೇಮಕವಾದರು. 1998-99ರಲ್ಲಿ ಭಾರತೀಯ ವಕೀಲರ ಪರಿಷತ್‌ (ಬಿಸಿಐ) ಕಿರಿಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. 1999ರ ಅಕ್ಟೋಬರ್‌ನಲ್ಲಿ ಮಧ್ಯಪ್ರದೇಶ ಹೈಕೋರ್ಟ್‌ ನ್ಯಾಯಮೂರ್ತಿಯಾಗಿ ನೇಮಕಗೊಂಡರು.

ಜುಲೈ 7, 2014 ರಂದು ಸುಪ್ರೀಂ ಕೋರ್ಟ್‌ಗೆ ಪದೋನ್ನತಿ ಪಡೆಯುವ ಮುನ್ನ ಅವರು ರಾಜಸ್ಥಾನ ಮತ್ತು ಕಲ್ಕತ್ತಾ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದರು.

ಸುಪ್ರೀಂಕೋರ್ಟ್‌ನ ಅವರ ಅಧಿಕಾರಾವಧಿ ಹಲವು ವಿವಾದಗಳಿಂದ ಕೂಡಿತ್ತು. ಅವುಗಳಲ್ಲಿ ಪ್ರಮುಖವಾದುದು ನ್ಯಾ. ಬಿ ಎಚ್‌ ಲೋಯಾ ಪ್ರಕರಣ ಹಾಗೂ ಹಿರಿಯ ನ್ಯಾಯವಾದಿ ಪ್ರಶಾಂತ್‌ ಭೂಷಣ್‌ ಅವರ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣ.

ನ್ಯಾ. ಲೋಯಾ ಪ್ರಕರಣದ ವಿಚಾರಣೆಯನ್ನು ಆರಂಭದಲ್ಲಿ ಮಿಶ್ರಾ ಅವರಿಗೆ ವಹಿಸಲಾಗಿತ್ತು. ಇದನ್ನು ವಿರೋಧಿಸಿ ಸುಪ್ರೀಂಕೋರ್ಟ್‌ನ ನಾಲ್ವರು ಅತಿ ಹಿರಿಯ ನ್ಯಾಯಮೂರ್ತಿಗಳು ಪತ್ರಿಕಾಗೋಷ್ಠಿ ನಡೆಸಿದ್ದರು. ಅಂತಿಮವಾಗಿ ಅವರು ಪ್ರಕರಣದಿಂದ ಹಿಂದೆ ಸರಿದಿದ್ದರು.