High Court of Karnataka
High Court of Karnataka 
ಸುದ್ದಿಗಳು

ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ಪ್ರಕರಣ: ಗೂಳಿಹಟ್ಟಿ ಶೇಖರ್‌ ಪಿಐಎಲ್‌ ವಜಾಗೊಳಿಸಿದ ಹೈಕೋರ್ಟ್‌

Bar & Bench

ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅವ್ಯವಹಾರ ಪ್ರಕರಣದ ತನಿಖೆ ನಡೆಸುತ್ತಿರುವ ಎ ಡಿ ನಾಗರಾಜು ಅವರ ವರ್ಗಾವಣೆ ಪ್ರಶ್ನಿಸಿ ಸಲ್ಲಿಸಿದ್ದ ಪಿಐಎಲ್ ಅನ್ನು ಕರ್ನಾಟಕ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ.

ಮಾಜಿ ಸಚಿವ ಗೂಳಿಹಟ್ಟಿ ಡಿ. ಶೇಖರ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ನೇತೃತ್ವದ ವಿಭಾಗೀಯ ಪೀಠ ನಡೆಸಿತು.

“ಸಾರ್ವಜನಿಕ ಹಿತಾಸಕ್ತಿಯ ರಕ್ಷಕ ಮತ್ತು ಪ್ರಧಾನ ಉದ್ಯೋಗದಾತನಾಗಿರುವ ಸರ್ಕಾರಕ್ಕೆ ಯಾವ ಅಧಿಕಾರಿಯನ್ನು ಯಾವ ಸ್ಥಾನಕ್ಕೆ ವರ್ಗಾವಣೆ ಮಾಡಬೇಕು, ಯಾವ ಅಧಿಕಾರಿಯನ್ನು ಯಾವ ಹುದ್ದೆಯಲ್ಲಿ ಮುಂದುವರಿಸಬೇಕು ಎಂಬುದನ್ನು ಚೆನ್ನಾಗಿ ತಿಳಿದಿದೆ. ಅಧಿಕಾರಿಗಳು ಬರಬಹುದು ಅಥವಾ ಹೋಗಬಹುದು, ಆದರೆ, ಪ್ರಕ್ರಿಯೆ ಯಾವುದೇ ಅಡೆತಡೆ ಇಲ್ಲದೆ ಸಾಗಬೇಕು ಅಷ್ಟೇ ‘’ ಎಂದು ನ್ಯಾಯಾಲಯ ಹೇಳಿದೆ.

ದಾಖಲೆಗಳನ್ನು ಪರಿಶೀಲಿಸಿದ ಬಳಿಕ ಪೀಠವು “ಸರ್ಕಾರಿ ಅಧಿಕಾರಿಗಳಿಗೆ ನಿಗದಿತ ಅವಧಿಯಲ್ಲಿ ನಿಯಮದಂತೆ ವರ್ಗಾವಣೆ ಮಾಡಲಾಗುತ್ತದೆ. ಒಂದು ವೇಳೆ ನಿಯಮಗಳನ್ನು ಉಲ್ಲಂಘಿಸಿ ವರ್ಗಾವಣೆ ಮಾಡಿದರೆ, ಅದರಿಂದ ಬಾದಿತನಾಗುವ ವ್ಯಕ್ತಿ ಅದನ್ನು ಪ್ರಶ್ನಿಸಬೇಕು. ಇದರಲ್ಲಿ ಮೂರನೇ ವ್ಯಕ್ತಿಗೆ ಯಾವುದೇ ಹಕ್ಕು ಇರುವುದಿಲ್ಲ. ಸಾರ್ವಜನಿಕ ಹಿತಾಸಕ್ತಿ ಹೆಸರಿನಲ್ಲಿ ಅರ್ಜಿದಾರರು ವರ್ಗಾವಣೆ ಪ್ರಶ್ನಿಸುವ ಅಧಿಕಾರವಿಲ್ಲ’’ ಎಂದು ಆದೇಶಿಸಿದೆ.

ಅರ್ಜಿದಾರರ ಪರ ವಕೀಲರು, ತನಿಖೆಯ ಅರ್ಧಕ್ಕೆ ನಿಂತು ಹೋಗಿದೆ, ತನಿಖಾಧಿಕಾರಿಯನ್ನು ಬೇರೊಂದು ಸ್ಥಳಕ್ಕೆ ವರ್ಗಾವಣೆ ಮಾಡಲಾಗಿದೆ. ಇದು ರಾಜಕೀಯ ಪ್ರೇರಿತ ವರ್ಗಾವಣೆಯಾಗಿದೆ. ಕೆಲವು ಪ್ರಭಾವಿ ರಾಜಕೀಯ ವ್ಯಕ್ತಿಗಳು ನಿಗಮದಲ್ಲಿನ ಅಕ್ರಮಗಳನ್ನು ಮುಚ್ಚಿಹಾಕಲು ವರ್ಗಾವಣೆಯ ಪಿತೂರಿ ನಡೆಸಿದ್ದಾರೆ ಎಂದು ಪೀಠಕ್ಕೆ ತಿಳಿಸಿದರು.

ಆದ್ದರಿಂದ ಈವರೆಗೆ ತನಿಖೆ ನಡೆಸುತ್ತಿದ್ದ ಅಧಿಕಾರಿಯನ್ನು ಅದೇ ಸ್ಥಾನದಲ್ಲಿ ಮುಂದುವರಿಸಬೇಕು ಮತ್ತು ಕಳಂಕಿತ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು. ತನಿಖೆ ಪೂರ್ಣಗೊಳಿಸಿ ಅಂತಿಮ ವರದಿಯನ್ನು ಸಲ್ಲಿಸುವವರೆಗೆ ನಿಗಮದ ಹಾಲಿ ವ್ಯವಸ್ಥಾಪಕ ನಿರ್ದೇಶಕರು ಮತ್ತು ವ್ಯವಸ್ಥಾಪಕರು ಹಾಗೂ ಇತರೆ ಸಿಬ್ಬಂದಿಯನ್ನು ಅದೇ ನಿಗಮದಲ್ಲಿ ಮುಂದುವರಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ನ್ಯಾಯಾಲಯವನ್ನು ಕೋರಿದರು.

ಆದರೆ ಆ ವಾದವನ್ನು ವಿರೋಧಿಸಿದ ಸರ್ಕಾರಿ ವಕೀಲರು, ಯಾವ ಅಧಿಕಾರಿಯನ್ನು ಎಲ್ಲಿ ನಿಯೋಜಿಸಬೇಕು, ಎಲ್ಲಿ ನಿಯೋಜಿಸಬಾರದು ಎಂಬುದು ಸರ್ಕಾರದ ವಿವೇಚನೆಗೆ ಬಿಟ್ಟ ವಿಚಾರ. ಈ ವಿಚಾರದಲ್ಲಿ ಯಾರೂ ಮಧ್ಯಪ್ರವೇಶ ಮಾಡಲು ಅಧಿಕಾರವಿಲ್ಲ ಎಂದು ವಾದಿಸಿದ್ದರು.