ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ತೀರ್ಥಕ್ಷೇತ್ರ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವು ಪ್ರಕರಣಗಳ ತನಿಖೆಗಾಗಿ ಕರ್ನಾಟಕ ಸರ್ಕಾರ ವಿಶೇಷ ತನಿಖಾ ತಂಡ ರಚಿಸಿದೆ.
ರಾಜ್ಯದ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾ ನಿರ್ದೇಶಕ ಡಾ. ಪ್ರಣವ ಮೊಹಾಂತಿ ಎಸ್ಐಟಿಯ ನೇತೃತ್ವ ವಹಿಸಲಿದ್ದು ನೇಮಕಾತಿ ವಿಭಾಗದ ಉಪ ಪೊಲೀಸ್ ಮಹಾ ನಿರೀಕ್ಷಕ ಎಂ ಎನ್ ಅನುಚೇತ್, ಸಿಎಆರ್ ಕೇಂದ್ರದ ಉಪ ಪೊಲೀಸ್ ಆಯುಕ್ತರಾದ ಸೌಮ್ಯಲತ ಹಾಗೂ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಅಧೀಖ್ಷಕ ಜಿತೇಂದ್ರ ಕುಮಾರ್ ದಯಾಮ ತಂಡದ ಸದಸ್ಯರಾಗಿದ್ದಾರೆ.
ಧರ್ಮಸ್ಥಳ ಭಾಗದಲ್ಲಿ ನೂರಾರು ಶವಗಳನ್ನು ತಾನು ಹೂತು ಹಾಕಿರುವುದಾಗಿ ವ್ಯಕ್ತಿಯೊಬ್ಬರು ಈಚೆಗೆ ನ್ಯಾಯಾಲಯದೆದುರು ಹೇಳಿಕೆ ನೀಡಿದ್ದರು. ಆ ಪ್ರದೇಶದಲ್ಲಿ ತಲೆಬುರುಡೆ ದೊರೆತ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿತ್ತು. ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ನಾಪತ್ತೆಯಾಗಿರುವ ಬಗ್ಗೆ ಆಕೆಯ ಕುಟುಂಬದವರು ಹೇಳಿಕೆ ನೀಡಿದ್ದರು. ಬಳಿಕ ಧರ್ಮಸ್ಥಳ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ ಕಲಂ 211 ಎ ಅಡಿ ಪ್ರಕರಣ ದಾಖಲಾಗಿತ್ತು. ಎಸ್‌ಐಟಿ ರಚನೆಗೆ ರಾಜ್ಯದ ವಿವಿಧ ಭಾಗಗಳಿಂದ ಒತ್ತಾಯ ಕೇಳಿಬಂದಿತ್ತು. ಇತ್ತ ರಾಜ್ಯ ಮಹಿಳಾ ಆಯೋಗ ಎಸ್‌ಐಟಿ ರಚಿಸುವಂತೆ ಕೋರಿ ಸರ್ಕಾರಕ್ಕೆ ಪತ್ರ ಬರೆದಿತ್ತು.
ರಾಜ್ಯ ಮಹಿಳಾ ಆಯೋಗದ ಪತ್ರದಲ್ಲಿ ಪ್ರಸ್ತಾಪಿಸಿರುವ ಅಂಶಗಳು ಮತ್ತು ಧರ್ಮಸ್ಥಳ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಲು ಎಸ್‌ಐಟಿ ರಚಿಸಿ ಸರ್ಕಾರ ಆದೇಶ ಹೊರಡಿಸಿದೆ.
ಈ ಸಂಬಂಧ ರಾಜ್ಯದ ಬೇರೆ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಅಥವಾ ಭವಿಷ್ಯದಲ್ಲಿ ದಾಖಲಾಗುವ ಎಲ್ಲಾ ಕ್ರಿಮಿನಲ್ ಪ್ರಕರಣಗಳ ತನಿಖೆಯನ್ನು ಪೊಲೀಸ್ ಮಹಾ ನಿರ್ದೇಶಕರು (ಡಿಜಿ ಐಜಿಪಿ) ಎಸ್‌ಐಟಿಗೆ ವಹಿಸಬೇಕು. ವಿಶೇಷ ತನಿಖಾ ತಂಡಕ್ಕೆ ಅಗತ್ಯವಿರುವ ಉಳಿದ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಒದಗಿಸಬೇಕು ಎಂದು ಸರ್ಕಾರ ನಿರ್ದೇಶನ ನೀಡಿದೆ. ಅಲ್ಲದೆ ತನಿಖಾ ತಂಡ ದಕ್ಷಿಣ ಕನ್ನಡ ಪೊಲೀಸ್ ಕಚೇರಿಯಲ್ಲಿ ಲಭ್ಯ ಇರುವ ಸಂಪನ್ಮೂಲ ಬಳಸಿಕೊಳ್ಳುವಂತೆ ಸೂಚಿಸಿದೆ.
ತನಿಖಾ ತಂಡ ಕಾಲಕಾಲಕ್ಕೆ ತನಿಖೆಗೆ ಸಂಬಂಧಿಸಿದ ಪ್ರಗತಿಯನ್ನು ರಾಜ್ಯದ ಪೊಲೀಸ್ ಮಹಾ ನಿರ್ದೇಶಕರಿಗೆ ವರದಿ ಮಾಡಬೇಕು. ಅಲ್ಲದೆ ಅದು ಧರ್ಮಸ್ಥಳದಲ್ಲಿ ದಾಖಲಾಗಿರುವ ಪ್ರಕರಣ ಹಾಗೂ ರಾಜ್ಯದ ಉಳಿದ ಪೊಲೀಸ್ ಠಾಣೆಗಳಲ್ಲಿ ದಾಖಲಾಗುವ ಎಲ್ಲಾ ಪ್ರಕರಣಗಗಳ ಸಮಗ್ರ ತನಿಖೆ ನಡೆಸಿ ವರದಿಯನ್ನು ಡಿಜಿ ಐಜಿಪಿ ಅವರಿಗೆ ಸಲ್ಲಿಸಬೇಕು ಎಂದು ಆದೇಶಿಸಲಾಗಿದೆ.
[ಸರ್ಕಾರದ ಆದೇಶದ ಪ್ರತಿ]