JDS former MLA K S Lingesh and Karnataka HC 
ಸುದ್ದಿಗಳು

ಬಗರ್‌ಹುಕುಂ ಜಮೀನು ಅಕ್ರಮ ಮಂಜೂರು: ಜೆಡಿಎಸ್‌ ಮಾಜಿ ಶಾಸಕ ಲಿಂಗೇಶ್‌ಗೆ ಜಾಮೀನು ನೀಡಿದ ಹೈಕೋರ್ಟ್‌

“ಅರ್ಜಿದಾರರನ್ನು ವಶಕ್ಕೆ ಪಡೆದು 40 ದಿನಗಳಾಗಿದ್ದು, ಅವರು ಅಂದಿನಿಂದ ಕಸ್ಟಡಿಯಲ್ಲಿದ್ದಾರೆ. ಅರ್ಜಿದಾರರು ಓಪನ್‌ ಹಾರ್ಟ್‌ ಸರ್ಜರಿಗೆ ಒಳಗಾಗಿದ್ದು, ಕಾರಾಗೃಹದಲ್ಲಿಅವರ ಆರೋಗ್ಯ ಕ್ಷಿಣಿಸುತ್ತಿದೆ” ಎಂದು ಆದೇಶದಲ್ಲಿ ದಾಖಲಿಸಿರುವ ನ್ಯಾಯಾಲಯ.

Bar & Bench

ಬಗರ್‌ಹುಕುಂ ಜಮೀನು ಮಂಜೂರಾತಿಯಲ್ಲಿಅಕ್ರಮ ಎಸಗಿದ ಪ್ರಕರಣದಲ್ಲಿ ಬಂಧಿತರಾಗಿರುವ ಜೆಡಿಎಸ್‌ನ ಬೇಲೂರಿನ ಮಾಜಿ ಶಾಸಕ ಕೆ ಎಸ್‌ ಲಿಂಗೇಶ್‌ಗೆ ಕರ್ನಾಟಕ ಹೈಕೋರ್ಟ್‌ ಈಚೆಗೆ ಜಾಮೀನು ಮಂಜೂರು ಮಾಡಿದೆ.

ತನಿಖೆ ನಡೆಯುತ್ತಿದ್ದು, ಇದಕ್ಕೆ ಅಗತ್ಯವಾದ ಎಲ್ಲಾ ದಾಖಲೆಗಳನ್ನು ಸಿಐಡಿ ತನಿಖಾಧಿಕಾರಿಗಳು ವಶಪಡಿಸಿಕೊಂಡಿರುವುದರಿಂದ ಅವರು ಲಿಂಗೇಶ್‌ ಕಸ್ಟಡಿ ಅಗತ್ಯವಿಲ್ಲ ಎಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಆದೇಶಿಸಿದೆ.

Justice M Nagaprasanna

ಅರ್ಜಿಯನ್ನು ಮಾನ್ಯ ಮಾಡಿರುವ ನ್ಯಾಯಾಲಯವು “ಅರ್ಜಿದಾರರು ಎರಡು ಲಕ್ಷ ರೂಪಾಯಿ ಮೌಲ್ಯದ ವೈಯಕ್ತಿಕ ಬಾಂಡ್‌ ಮತ್ತು ಅಷ್ಟೇ ಮೊತ್ತದ ಭದ್ರತೆ ಒದಗಿಸಬೇಕು. ವಿಚಾರಣಾಧೀನ ನ್ಯಾಯಾಲಯಕ್ಕೆ ನಿಗದಿಯಂತೆ ವಿಚಾರಣೆಗೆ ಹಾಜರಾಗಬೇಕು, ಯಾವುದೇ ಸಾಕ್ಷ್ಯ ನಾಶ ಮಾಡುವಂತಿಲ್ಲ ಮತ್ತು ಬೆದರಿಕೆ ಹಾಕುವಂತಿಲ್ಲ. ತನಿಖಾಧಿಕಾರಿ ಕರೆದಾಗ ಹಾಜರಾಗಿ, ತನಿಖೆಗೆ ಅಗತ್ಯ ದಾಖಲೆಗಳನ್ನು ಒದಗಿಸಬೇಕು ಮತ್ತು ನ್ಯಾಯಾಲಯದ ಅನುಮತಿ ಇಲ್ಲದೆ ವ್ಯಾಪ್ತಿ ಬಿಟ್ಟು ಹೋಗುವಂತಿಲ್ಲ ಎಂಬ ಷರತ್ತುಗಳನ್ನು ವಿಧಿಸಿದೆ. ಜತೆಗೆ ಷರತ್ತುಗಳನ್ನು ಉಲ್ಲಂಘಿಸಿದರೆ ಜಾಮೀನು ಸಹಜವಾಗಿಯೇ ರದ್ದಾಗಲಿದೆ ಎಂದು ಆದೇಶದಲ್ಲಿಎಚ್ಚರಿಕೆ ನೀಡಿದೆ.

“ಅರ್ಜಿದಾರರನ್ನು ವಶಕ್ಕೆ ಪಡೆದು 40 ದಿನಗಳಾಗಿದ್ದು, ಅವರು ಅಂದಿನಿಂದ ಕಸ್ಟಡಿಯಲ್ಲಿದ್ದಾರೆ. ಅರ್ಜಿದಾರರು ಓಪನ್‌ ಹಾರ್ಟ್‌ ಸರ್ಜರಿಗೆ ಒಳಗಾಗಿದ್ದು, ಕಾರಾಗೃಹದಲ್ಲಿಅವರ ಆರೋಗ್ಯ ಕ್ಷಿಣಿಸುತ್ತಿದೆ” ಎಂದು ನ್ಯಾಯಾಲಯ ಹೇಳಿದೆ.

ಈಗಾಗಲೇ ಈ ಪ್ರಕರಣದಲ್ಲಿ 2,6,8 ನೇ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ. 3, 4, 5ನೇ ಆರೋಪಿಗಳಿಗೆ ಜಾಮೀನು ದೊರೆತಿದೆ. ಹೀಗಾಗಿ ಕಠಿಣ ಷರತ್ತುಗಳೊಂದಿಗೆ ಅರ್ಜಿದಾರರಿಗೆ ಜಾಮೀನು ನೀಡಲಾಗುತ್ತಿದೆ ಎಂದು ನ್ಯಾಯಾಲಯ ಆದೇಶಿಸಿದೆ.

M Aruna Shyam

ಅರ್ಜಿದಾರರ ಪರ ಹಿರಿಯ ವಕೀಲ ಎಂ ಅರುಣ ಶ್ಯಾಮ್‌ ಅವರು “ತನಿಖೆ ಕೋರಿ ಸಲ್ಲಿಸಿದ್ದ ಕ್ರಿಮಿನಲ್‌ ಅರ್ಜಿಯು ವಜಾಗೊಂಡ ಎರಡು ವರ್ಷಗಳ ಬಳಿಕ ಅರ್ಜಿದಾರರನ್ನು ವಶಕ್ಕೆ ಪಡೆಯಲಾಗಿದೆ. ಅವರನ್ನು ಕಸ್ಟಡಿಯಲ್ಲಿಟ್ಟುಕೊಳ್ಳುವ ಅಗತ್ಯವಿಲ್ಲ. ಈಗಾಗಲೇ ದಾಖಲೆಗಳನ್ನು ವಶಕ್ಕೆ ತೆಗೆದುಕೊಂಡಿರುವುದರಿಂದ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಬಹುದು” ಎಂದು ಕೋರಿದರು.

ಪ್ರಾಸಿಕ್ಯೂಷನ್‌ ಪರವಾಗಿ ರಾಜ್ಯ ಸರ್ಕಾರಿ ಅಭಿಯೋಜಕ ಬಿ ಎನ್‌ ಜಗದೀಶ್‌ ವಾದಿಸಿದ್ದರು.

ಪ್ರಕರಣದ ಹಿನ್ನೆಲೆ: ಬೇಲೂರು ವಿಧಾನಸಭಾ ಕ್ಷೇತ್ರದಲ್ಲಿ2018-23ರ ಅವಧಿಯಲ್ಲಿ ಶಾಸಕರಾಗಿದ್ದಾಗ ಬಗರ್‌ಹುಕುಂ ಸಾಗುವಳಿ ಸಕ್ರಮ ಸಮಿತಿ ಅಧ್ಯಕ್ಷ ರಾಗಿದ್ದ ಲಿಂಗೇಶ್‌ 2,750 ಎಕರೆ ಜಮೀನನ್ನು 1,430 ಮಂದಿಗೆ ಅಕ್ರಮವಾಗಿ ಮಂಜೂರಾತಿ ಮಾಡಿದ್ದಾರೆ ಎಂದು ಆರೋಪಿಸಿ ಕೋಲಾರದ ಸಾಮಾಜಿಕ ಕಾರ್ಯಕರ್ತ ಕೆ ಸಿ ರಾಜಣ್ಣ ಖಾಸಗಿ ದೂರು ಸಲ್ಲಿಸಿದ್ದರು.

ಆ ದೂರನ್ನು ಪರಿಗಣಿಸಿದ್ದ ವಿಚಾರಣಾಧೀನ ನ್ಯಾಯಾಲಯವು ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲು ಆದೇಶಿಸಿತ್ತು. ಅದರನ್ವಯ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 468, 464, 465, 471, 409, 420, 120ಬಿ ಅಡಿ ಪ್ರಕರಣ ದಾಖಲಿಸಲಾಗಿತ್ತು. ಮೊದಲ ಆರೋಪಿ ಮಾಜಿ ಶಾಸಕ ಲಿಂಗೇಶ್‌ ಉಳಿದ ಆರೋಪಿಗಳು ಹಾಗೂ ಅಧಿಕಾರಿಗಳ ಜೊತೆ ಶಾಮೀಲಾಗಿ ತಮ್ಮ ಅಧಿಕಾರ ಮತ್ತು ಸ್ಥಾನ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಆರೋಪವಿದೆ. ಅಲ್ಲದೇ, ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಲು ಸಹಕಾರ ನೀಡಿದ್ದ, ಸರ್ಕಾರಕ್ಕೆ ವಂಚಿಸುವ ಉದ್ದೇಶದಿಂದ ಒಳಸಂಚು ನಡೆಸಿದ್ದಾರೆ ಎಂದು ಎಫ್‌ಐಆರ್‌ನಲ್ಲಿಉಲ್ಲೇಖಿಸಲಾಗಿತ್ತು. ಆನಂತರ ಸಿಐಡಿ ಪೊಲೀಸರು ಲಿಂಗೇಶ್‌ ಅವರನ್ನು ಬಂಧಿಸಿದ್ದರು.

K S Lingesh Vs State of Karnataka.pdf
Preview