ಪಶ್ಚಿಮಘಟ್ಟದ ಭಾಗವಾಗಿರುವ ಚಂದ್ರದ್ರೋಣ ಪರ್ವತ ಖ್ಯಾತಿಯ ಪರಿಸರ ಸೂಕ್ಷ್ಮ ಮುಳ್ಳಯ್ಯನಗಿರಿ ಬೆಟ್ಟದ ಇಡೀ ಪ್ರದೇಶವನ್ನು ತಕ್ಷಣ ಸಂರಕ್ಷಿತ ಮೀಸಲು ಪ್ರದೇಶ ಎಂದು ಘೋಷಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿ ಸಂಬಂಧ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಗುರುವಾರ ನೋಟಿಸ್ ಜಾರಿಗೊಳಿಸಿದೆ.
ಚಿಕ್ಕಮಗಳೂರಿನ ದಿ ಭದ್ರಾ ವನ್ಯಜೀವಿ ಸಂರಕ್ಷಣಾ ಟ್ರಸ್ಟ್‌ನ ಟ್ರಸ್ಟಿ ಹಾಗೂ ಪರಿಸರವಾದಿ ಡಿ ವಿ ಗಿರೀಶ್ ಮತ್ತು ವನ್ಯಜೀವಿ ಸಂರಕ್ಷಣಾ ಆ್ಯಕ್ಷನ್ ಟೀಮ್‌ನ ವ್ಯವಸ್ಥಾಪಕ ಟ್ರಸ್ಟಿ ಶ್ರೀದೇವ್ ಹುಲಿಕೆರೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಕೆ ಎಸ್ ಹೇಮಲೇಖಾ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಕೆಲ ಕಾಲ ವಾದ ಆಲಿಸಿದ ಪೀಠವು ರಾಜ್ಯ ಸರ್ಕಾರ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಪಿಸಿಸಿಎಫ್), ಚಿಕ್ಕಮಗಳೂರು ಜಿಲ್ಲಾಧಿಕಾರಿ, ಕೇಂದ್ರ ಸರ್ಕಾರದ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಸೇರಿ ಇತರ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ನವೆಂಬರ್ 4ಕ್ಕೆ ಮುಂದೂಡಿತು. ಅರ್ಜಿದಾರರ ಪರ ಹಿರಿಯ ವಕೀಲೆ ಜಯ್ನಾ ಕೊಠಾರಿ ವಾದಿಸಿದರು.
ವನ್ಯಜೀವಿ (ಸಂರಕ್ಷಣಾ) ಕಾಯಿದೆ-1972ರ ಸೆಕ್ಷನ್ 36ಎ ಅನ್ವಯ ಮುಳ್ಳಯ್ಯನಗಿರಿ ಬೆಟ್ಟದ 14 ಸಾವಿರ ಎಕರೆ ಪ್ರದೇಶವನ್ನು ಸಂರಕ್ಷಿತ ಮೀಸಲು ಪ್ರದೇಶವೆಂದು ಘೋಷಿಸುವಂತೆ ಚಿಕ್ಕಮಗಳೂರು ವಲಯದ ಉಪ ಅರಣ್ಯ ಸಂರಕ್ಷಣಾಧಿಕಾರಿಯು ರಾಜ್ಯ ಸರ್ಕಾರಕ್ಕೆ ಕರಡು ಪ್ರಸ್ತಾವನೆ ಸಲ್ಲಿಸಿದ್ದರು. ಈ ಬಗ್ಗೆ ಹಲವು ಬಾರಿ ಮನವಿಗಳನ್ನು ಕೊಟ್ಟರೂ ಯಾವುದೇ ಕ್ರಮ ಜರುಗಿಸಲಾಗಿಲ್ಲ. ಈಗ ಸಂರಕ್ಷಿತ ಮೀಸಲು ಪ್ರದೇಶದ ವ್ಯಾಪ್ತಿಯನ್ನು 10 ಸಾವಿರ ಎಕರೆಗೆ ಇಳಿಸಲಾಗಿದೆ ಎಂದು ಹೇಳಲಾಗುತ್ತಿದೆ ಎಂದು ಅರ್ಜಿಯಲ್ಲಿ ದೂರಲಾಗಿದೆ.
ಆದ್ದರಿಂದ, ಮುಳ್ಳಯ್ಯನಗಿರಿ ಬೆಟ್ಟದ ಇಡೀ ಪ್ರದೇಶವನ್ನು ತಕ್ಷಣದಿಂದ ಸಂರಕ್ಷಿತ ಮೀಸಲು ಪ್ರದೇಶ ಎಂದು ಘೋಷಿಸಬೇಕು, ಇದರ ನಿರ್ವಹಣೆಗೆ ವ್ಯವಸ್ಥಾಪನಾ ಸಮಿತಿ ರಚಿಸಬೇಕು, ಬೆಟ್ಟದ ವ್ಯಾಪ್ತಿಯಲ್ಲಿ ನಡೆಯುತ್ತಿರುವ ನಿರ್ಮಾಣ ಕಾಮಗಾರಿಗಳು ಮತ್ತು ಅದಕ್ಕೆ ನೀಡಲಾಗುವ ಹಣಕಾಸಿನ ನೆರವು ತಕ್ಷಣ ನಿಲ್ಲಿಸಬೇಕು ಎಂದು ಸರ್ಕಾರ ಮತ್ತು ಸಂಬಂಧಪಟ್ಟ ಇಲಾಖೆಗಳಿಗೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಕೋರಿದ್ದಾರೆ.